ಲಿಂಗತ್ವ ಅಲ್ಪಸಂಖ್ಯಾತರ ಸಮೀಕ್ಷೆಗೆ ಸಿದ್ದತೆ ಕೈಗೊಳ್ಳಿ

| Published : Aug 09 2025, 12:00 AM IST

ಲಿಂಗತ್ವ ಅಲ್ಪಸಂಖ್ಯಾತರ ಸಮೀಕ್ಷೆಗೆ ಸಿದ್ದತೆ ಕೈಗೊಳ್ಳಿ
Share this Article
  • FB
  • TW
  • Linkdin
  • Email

ಸಾರಾಂಶ

ಜಿಲ್ಲೆಯಲ್ಲಿ ಲಿಂಗತ್ವ ಅಲ್ಪಸಂಖ್ಯಾತರನ್ನು ಗುರುತಿಸಿ ಅವರಿಗೆ ಮೂಲಸೌಲಭ್ಯ ಕಲ್ಪಿಸಲು ಜಿಲ್ಲಾಮಟ್ಟದ ಸಮೀಕ್ಷಾ ಕಾರ್ಯಕ್ಕೆ ಅಗತ್ಯ ಸಿದ್ದತೆಗಳನ್ನು ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಶಿಲ್ಪಾನಾಗ್ ಅಧಿಕಾರಿಗಳಿಗೆ ಸೂಚಿಸಿದರು.

ಕನ್ನಡಪ್ರಭ ವಾರ್ತೆ ಚಾಮರಾಜನಗರ

ಜಿಲ್ಲೆಯಲ್ಲಿ ಲಿಂಗತ್ವ ಅಲ್ಪಸಂಖ್ಯಾತರನ್ನು ಗುರುತಿಸಿ ಅವರಿಗೆ ಮೂಲಸೌಲಭ್ಯ ಕಲ್ಪಿಸಲು ಜಿಲ್ಲಾಮಟ್ಟದ ಸಮೀಕ್ಷಾ ಕಾರ್ಯಕ್ಕೆ ಅಗತ್ಯ ಸಿದ್ದತೆಗಳನ್ನು ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಶಿಲ್ಪಾನಾಗ್ ಅಧಿಕಾರಿಗಳಿಗೆ ಸೂಚಿಸಿದರು.

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಲಿಂಗತ್ವ ಅಲ್ಪಸಂಖ್ಯಾತರ ಮೂಲ ಹಂತದ ಸಮೀಕ್ಷೆಗೆ ಸಂಬಂಧಿಸಿದ ಜಿಲ್ಲಾಮಟ್ಟದ ಮೇಲ್ವಚಾರಣಾ ಹಾಗೂ ಮೌಲ್ಯಮಾಪನಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಸರ್ಕಾರದ ನಿರ್ದೇಶನದನ್ವಯ ಲಿಂಗತ್ವ ಅಲ್ಪಸಂಖ್ಯಾತರನ್ನು ಗುರುತಿಸಿ ಅವಶ್ಯವಾಗಿರುವ ಮೂಲಸೌಕರ್ಯಗಳನ್ನು ಒದಗಿಸಿ ಅವರನ್ನು ಮುಖ್ಯವಾಹಿನಿಗೆ ತರುವ ಉದ್ದೇಶದಿಂದ ಜಿಲ್ಲೆಯಲ್ಲಿರುವ ಲಿಂಗತ್ವ ಅಲ್ಪಸಂಖ್ಯಾತರ ಮೂಲಹಂತದ ಸಮೀಕ್ಷಾ ಕಾರ್ಯವನ್ನು ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮ ಅನುಷ್ಠಾನಗೊಳಿಸುತ್ತಿದೆ. ಈ ನಿಟ್ಟಿನಲ್ಲಿ ಸಮೀಕ್ಷಾ ಕಾರ್ಯ ಹಮ್ಮಿಕೊಳ್ಳಲು ಅಗತ್ಯ ಸಿದ್ದತೆ ಮಾಡಿಕೊಳ್ಳುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಲಿಂಗತ್ವ ಅಲ್ಪಸಂಖ್ಯಾತರ ಸಮೀಕ್ಷಾ ಕಾರ್ಯಕ್ಕೆ ವಿವಿಧ ಇಲಾಖೆಗಳ ಜಿಲ್ಲಾಮಟ್ಟದ ಅಧಿಕಾರಿಗಳನ್ನೊಳಗೊಂಡ ಮೇಲ್ವಿಚಾರಣಾ ಹಾಗೂ ಮೌಲ್ಯಮಾಪನಾ ಸಮಿತಿಯನ್ನು ರಚಿಸಲಾಗಿದೆ. ಯಾವುದೇ ಲಿಂಗತ್ವ ಅಲ್ಪಸಂಖ್ಯಾತರು ಸಮೀಕ್ಷೆಯಿಂದ ವಂಚಿತರಾಗದಂತೆ ಸಮಿತಿಯು ಉಸ್ತುವಾರಿ ವಹಿಸಲಿದೆ. ಈ ಕಾರ್ಯಕ್ಕೆ ವಿವಿಧ ಇಲಾಖೆಗಳು ಸಮನ್ವಯದಿಂದ ಕೆಲಸ ಮಾಡಿ ಸಮೀಕ್ಷಾ ಕಾರ್ಯವನ್ನು ಯಶಸ್ವಿಗೊಳಿಸಬೇಕು ಎಂದು ತಿಳಿಸಿದರು.

ಜಿಲ್ಲೆಯಲ್ಲಿರುವ ದಮನಿತ ಮಹಿಳೆಯರು, ಎಚ್.ಐ.ವಿ ಬಾಧಿತ ಮಹಿಳೆಯರು ಹಾಗೂ ಲಿಂಗತ್ವ ಅಲ್ಪಸಂಖ್ಯಾತರನ್ನು ಗುರುತಿಸಿ ವಿಶೇಷ ಕಾರ್ಯಕ್ರಮಗಳನ್ನು ರೂಪಿಸಬೇಕು. ಕೌಶಲ್ಯಾಭಿವೃದ್ಧಿ ತರಬೇತಿ ನೀಡಿ ಜೀವನ ಭದ್ರತೆಗೆ ಅವಕಾಶ ಮಾಡಿಕೊಡಬೇಕು. ಲಿಂಗತ್ವ ಅಲ್ಪಸಂಖ್ಯಾತರಿಗೆ ಎಲ್ಲಾ ಬ್ಯಾಂಕುಗಳು ಸಾಲಸೌಲಭ್ಯಗಳನ್ನು ನೀಡುವಲ್ಲಿ ಯಾವುದೇ ಸಮಸ್ಯೆಗಳಾಗದಂತೆ ನೋಡಿಕೊಳ್ಳಬೇಕು. ಸರ್ಕಾರದ ವಿವಿಧ ವಸತಿ ಯೋಜನೆಗಳಡಿ ಮನೆ ಮಂಜೂರು ಮಾಡಬೇಕು ಎಂದು ಜಿಲ್ಲಾಧಿಕಾರಿ ಶಿಲ್ಪಾ ನಾಗ್ ಅವರು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ಮಾತನಾಡಿದ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮೋನಾ ರೋತ್ ಅವರು, ವಸತಿ ಯೋಜನೆಗಳಡಿ ಎಚ್.ಐ.ವಿ ಸೋಂಕಿತರಿಗೆ ಮನೆ ಮಂಜೂರು ಮಾಡುವ ಸಂಬಂಧ ಮಂಜೂರಾತಿ ಆದೇಶದಲ್ಲಿ ಎಚ್.ಐ.ವಿ ಬಾಧಿತರು ಎಂದು ನಮೂದಿಸುವ ಬದಲಾಗಿ ವಿಶೇಷ ಯೋಜನೆಯ ವರ್ಗ ಎಂದು ನಮೂದಿಸಲು ಸೂಕ್ತ ಕ್ರಮ ವಹಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ತಿಳಿಸಿದರು.

ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಎಂ.ಎನ್. ಶಶಿಧರ್, ಮಹಿಳಾ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರಾದ ಸುರೇಶ್, ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕರಾದ ರಾಮಚಂದ್ರರಾಜೇ ಅರಸ್, ಜಿಲ್ಲಾ ಅರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಎಸ್. ಚಿದಂಬರ, ಜಿಲ್ಲಾ ಕೌಶಲ್ಯಾಭಿವೃದ್ಧಿ ಅಧಿಕಾರಿ ಮಹಮದ್ ಅಕ್ಬರ್, ಲೀಡ್ ಬ್ಯಾಂಕ್ ವ್ಯವಸ್ಥಾಪಕರಾದ ಸುರೇಖಾ, ಜಿಲ್ಲಾಮಟ್ಟದ ಅಧಿಕಾರಿಗಳು, ಸ್ನೇಹಜ್ಯೋತಿ ಹಾಗೂ ಸಮತಾ ಸೊಸೈಟಿ ಸೇರಿದಂತೆ ವಿವಿಧ ಸಂಘಸಂಸ್ಥೆಗಳ ಪದಾಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.