ಸಾರಾಂಶ
ಶಿವಮೊಗ್ಗ: ಕರ್ನಾಟಕ ಲೋಕಸೇವಾ ಆಯೋಗವು ವಿವಿಧ ಇಲಾಖೆಗಳ ಗ್ರೂಪ್ ‘ಬಿ’ ವೃಂದದ ಹುದ್ದೆಗಳ ನೇಮಕಾತಿ ಸಂಬಂಧ ಜ.19 ಮತ್ತು 25 ರಂದು ಪರೀಕ್ಷೆಗಳನ್ನು ನಡೆಸಲಿದ್ದು, ಪರೀಕ್ಷೆಗಳು ಶಾಂತಿಯುತವಾಗಿ ಮತ್ತು ಯಶಸ್ವಿಯಾಗಿ ನಡೆಯಲು ಅಗತ್ಯವಾದ ಸಕಲ ಸಿದ್ಧತೆಗಳನ್ನು ಮಾಡಿಕೊಳ್ಳುವಂತೆ ಅಪರ ಜಿಲ್ಲಾಧಿಕಾರಿ ಸಿದ್ದಲಿಂಗ ರೆಡ್ಡಿ ಅಧಿಕಾರಿಗಳಿಗೆ ಸೂಚನೆ ನೀಡಿದರು. ಜಿಲ್ಲಾಡಳಿತ ಕಚೇರಿ ಸಭಾಂಗಣದಲ್ಲಿ ಕೆಪಿಎಸ್‌ಸಿ ವತಿಯಿಂದ ವಿವಿಧ ಇಲಾಖೆಗಳ ಗ್ರೂಪ್ ಬಿ ವೃಂದದ ಹುದ್ದೆಗಳ ನೇಮಕಾತಿ ಸಂಬಂಧ ನಡೆಸಲಾಗುತ್ತಿರುವ ಪರೀಕ್ಷೆಗಳ ಕುರಿತು ಪರೀಕ್ಷಾ ನಿಯೋಜಿತ ಅಧಿಕಾರಿಗಳೊಂದಿಗೆ ಏರ್ಪಡಿಸಿದ್ದ ಸಭೆಯಲ್ಲಿ ಮಾತನಾಡಿದರು.
ಜ.19 ರಂದು ಬೆಳಗ್ಗೆ 10 ರಿಂದ 11.30 ರವರೆಗೆ ಸಾಮಾನ್ಯ ಪತ್ರಿಕೆ ಪರೀಕ್ಷೆಯು ಶಿವಮೊಗ್ಗ ನಗರದ ಒಟ್ಟು 25 ಪರೀಕ್ಷಾ ಕೇಂದ್ರಗಳಲ್ಲಿ ಹಾಗೂ ಜ.25ರಂದು ಮಧ್ಯಾಹ್ನ 3 ರಿಂದ ಸಂಜೆ 5ಗಂಟೆವರೆಗೆ ನಿರ್ದಿಷ್ಟ ಪತ್ರಿಕೆ ಪರೀಕ್ಷೆಯು ನಗರದ 23 ಪರೀಕ್ಷಾ ಕೇಂದ್ರಗಳಲ್ಲಿ ನಡೆಯಲಿದೆ ಎಂದರು.ಜ.19 ರಂದು ನಡೆಯುವ ಸಾಮಾನ್ಯ ಪತ್ರಿಕೆ ಪರೀಕ್ಷೆಗೆ ನಗರದಲ್ಲಿ ಒಟ್ಟು 7182 ಅಭ್ಯರ್ಥಿಗಳು ಹಾಗೂ ಜ.25 ರಂದು ನಡೆಯುವ ನಿರ್ದಿಷ್ಟ ಪತ್ರಿಕೆಗೆ 6414 ಅಭ್ಯರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ಈಗಾಗಲೇ ಪರೀಕ್ಷಾ ಕೇಂದ್ರಗಳಿಗೆ ಸ್ಥಳೀಯ ನಿರೀಕ್ಷಣಾಧಿಕಾರಿಗಳು, ಮಾರ್ಗಾಧಿಕಾರಿಗಳು, ವೀಕ್ಷಕರು ಮತ್ತು ಇತರೆ ಸಿಬ್ಬಂದಿಗಳನ್ನು ನಿಯೋಜಿಸಿ, ಸೂಕ್ತ ನಿರ್ದೇಶನ ಮತ್ತು ಸೂಚನೆಗಳನ್ನು ನೀಡಲಾಗಿದೆ ಎಂದರು. ಪರೀಕ್ಷಾ ಕೇಂದ್ರಗಳಲ್ಲಿ ವಿಡಿಯೋಗ್ರಫಿ ಮಾಡಲಾಗುವುದು. ಎಲ್ಲ ಕೇಂದ್ರಗಳಲ್ಲಿ ಸಿಸಿ ಟಿವಿ ಇರುತ್ತದೆ. ಜೊತೆಗೆ ಜಾಮರ್‌ಗಳನ್ನು ಅಳವಡಿಸಲಾಗುವುದು. ಪರೀಕ್ಷಾ ಕೇಂದ್ರದೊಳಗೆ ಯಾವುದೇ ಎಲೆಕ್ಟ್ರಾನಿಕ್ ವಸ್ತುಗಳಿಗೆ ಅವಕಾಶ ಇರುವುದಿಲ್ಲ ಎಂದು ತಿಳಿಸಿದರು. ನಿಯೋಜಿತ ಪೊಲೀಸರಿಂದ ಅಭ್ಯರ್ಥಿಗಳ ತಪಾಸಣೆ ನಡೆಸಿ ಕೇಂದ್ರಗಳ ಒಳಗೆ ಬಿಡಲಾಗುವುದು. ಅಂಗವಿಕಲ ಅಭ್ಯರ್ಥಿಗಳಿಗೆ ಲಿಪಿಕಾರರ ಸೇವೆಯನ್ನು ಹಾಗೂ ಚಲನವಲನ ವೈಕಲ್ಯವುಳ್ಳ ವಿಕಲಚೇತನ ಅಭ್ಯರ್ಥಿಗಳಿಗೆ ವೀಲ್ಹ್‌ಚೇರ್ ಒದಗಿಸಲಾಗುವುದು ಎಂದರು.ಪರೀಕ್ಷಾ ದಿನದಂದು ಎಲ್ಲ ಪರೀಕ್ಷಾ ಕೇಂದ್ರಗಳ ಸುತ್ತಮುತ್ತ 200 ಮೀ.ಫಾಸಲೆಯಲ್ಲಿ ಸಾರ್ವಜನಿಕ ಪ್ರವೇಶ ನಿಷೇಧಿಸಿ ಆದೇಶಿಸಲಾಗಿದೆ ಎಂದ ಅವರು, ಪರೀಕ್ಷಾ ಕೇಂದ್ರಗಳಲ್ಲಿ ಪೀಠೋಪಕರಣ ವ್ಯವಸ್ಥೆ, ಕುಡಿಯುವ ನೀರು ಮತ್ತು ಮೂಲಭೂತ ಸೌಕರ್ಯಗಳನ್ನು ವ್ಯವಸ್ಥಿತವಾಗಿ ಮಾಡಬೇಕು. ನಿಯೋಜಿತ ಅಧಿಕಾರಿಗಳು ಪರೀಕ್ಷಾ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಪಾಲಿಸುವ ಮೂಲಕ ಪರೀಕ್ಷೆಗಳನ್ನು ಶಾಂತಿಯುತವಾಗಿ, ಯಾವುದೇ ಗೊಂದಲಗಳಿಗೆ ಆಸ್ಪದವಾಗದಂತೆ ಯಶಸ್ವಿಯಾಗಿ ನಡೆಸಬೇಕೆಂದು ಸೂಚನೆ ನೀಡಿದರು.ಸಭೆಯಲ್ಲಿ ಡಿಡಿಪಿಐ ಮಂಜುನಾಥ್, ಜಿಲ್ಲಾ ಖಜಾನಾಧಿಕಾರಿ ಸಾವಿತ್ರಿ, ಪರೀಕ್ಷೆಗೆ ನಿಯೋಜಿಸಲಾದ ಅಧಿಕಾರಿಗಳು, ಸಿಬ್ಬಂದಿಗಳು ಪಾಲ್ಗೊಂಡಿದ್ದರು.
;Resize=(128,128))
;Resize=(128,128))