ಜಿಲ್ಲೆಯಲ್ಲಿ ಪಲ್ಸ್ ಪೋಲಿಯೋ ಅಭಿಯಾನದಡಿ ಡಿ. 21ರಂದು 5 ವರ್ಷದೊಳಗಿನ ಮಕ್ಕಳಿಗೆ ಪಲ್ಸ್ ಪೋಲಿಯೋ ಲಸಿಕೆ ಹಾಕುವ ಕಾರ್ಯಕ್ರಮವಿದ್ದು, ಇದಕ್ಕಾಗಿ ಸಕಲ ವ್ಯವಸ್ಥೆಗಳನ್ನು ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಶಿಲ್ಪಾ ನಾಗ್ ಸೂಚನೆ ನೀಡಿದರು.

ಕನ್ನಡಪ್ರಭ ವಾರ್ತೆ ಚಾಮರಾಜನಗರಜಿಲ್ಲೆಯಲ್ಲಿ ಪಲ್ಸ್ ಪೋಲಿಯೋ ಅಭಿಯಾನದಡಿ ಡಿ. 21ರಂದು 5 ವರ್ಷದೊಳಗಿನ ಮಕ್ಕಳಿಗೆ ಪಲ್ಸ್ ಪೋಲಿಯೋ ಲಸಿಕೆ ಹಾಕುವ ಕಾರ್ಯಕ್ರಮವಿದ್ದು, ಇದಕ್ಕಾಗಿ ಸಕಲ ವ್ಯವಸ್ಥೆಗಳನ್ನು ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಶಿಲ್ಪಾ ನಾಗ್ ಸೂಚನೆ ನೀಡಿದರು.

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜಿಲ್ಲಾ ಮಟ್ಟದ ಪಲ್ಸ್ ಪೋಲಿಯೋ ಸಮನ್ವಯ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಆಗತಾನೆ ಹುಟ್ಟಿದ ಮಗುವಿನಿಂದ 5 ವರ್ಷದೊಳಗಿನ ಪ್ರತಿ ಮಗುವಿಗೂ ಜೀವ ರಕ್ಷಕ ಪೋಲಿಯೋ ಹನಿ ನೀಡುವ ಮಹತ್ತರ ಕಾರ್ಯಕ್ಕೆ ಹೆಚ್ಚು ಮುತುವರ್ಜಿಯಿಂದ ಪೂರಕ ಸಿದ್ದತೆಗಳನ್ನು ಮಾಡಿಕೊಳ್ಳಬೇಕು. ಡಿ. 21ರಂದು ಬೆಳಗ್ಗೆ 8 ರಿಂದ ಸಂಜೆ 5 ಗಂಟೆಯವರೆಗೆ ವಿವಿಧೆಡೆ ಸ್ಥಾಪಿಸಲಾಗುವ ಬೂತ್ ಗಳಲ್ಲಿ (ಲಸಿಕಾ ಕೇಂದ್ರ) ಪೋಲಿಯೋ ಲಸಿಕೆ ನೀಡಲಾಗುತ್ತದೆ. ಡಿ. 22 ರಿಂದ 24ರವರೆಗೆ ಮನೆಮನೆಗೆ ಭೇಟಿ ನೀಡಿ ಲಸಿಕೆ ನೀಡುವ ಕಾರ್ಯ ನಡೆಯಲಿದೆ ಎಂದರು.

ಡಿ. 21ರಂದು ಲಸಿಕಾ ಕಾರ್ಯಕ್ರಮಕ್ಕಾಗಿ ಶಾಲಾ ಕೊಠಡಿ, ಅಂಗನವಾಡಿ ಕೇಂದ್ರಗಳನ್ನು ತೆರೆದು ಸಜ್ಜುಗೊಳಿಸಬೇಕು. ಖಾಸಗಿ ಶಾಲೆಗಳಲ್ಲಿ 5 ವರ್ಷದೊಳಗಿನ ಮಕ್ಕಳಿದ್ದಲ್ಲಿ ಪಲ್ಸ್ ಪೋಲಿಯೋ ಲಸಿಕೆ ಹಾಕಲು ಪೋಷಕರನ್ನು ಪ್ರೇರೇಪಿಸಲು ಸುತ್ತೋಲೆ ಹೊರಡಿಸಬೇಕು. ಶಾಲಾ ಪ್ರಾರ್ಥನಾ ಸಮಯದಲ್ಲಿ ಪಲ್ಸ್ ಪೋಲಿಯೋ ಕಾರ್ಯಕ್ರಮದ ಬಗ್ಗೆ ಶಿಕ್ಷಕರು ಮಕ್ಕಳಿಗೆ ಮಾಹಿತಿ ನೀಡಬೇಕು. ಪೋಲಿಯೋ ದಿನದ ಮುನ್ನ ದಿನದಂದು ಜಾಥಾ ನಡೆಸಿ ಜಾಗೃತಿ ಮೂಡಿಸಬೇಕು ಎಂದು ತಿಳಿಸಿದರು.

ಪಲ್ಸ್ ಪೋಲಿಯೋ ಗುರಿ ಮುಟ್ಟಲು ವಿವಿಧ ಇಲಾಖೆಗಳ ಪಾತ್ರ ಮಹತ್ತರವಾಗಿದೆ. ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿಗಳ ಅಧ್ಯಕ್ಷತೆಯಲ್ಲಿ ತಾಲೂಕು ಮಟ್ಟದ ಪಲ್ಸ್ ಪೋಲಿಯೋ ಕಾರ್ಯಕ್ರಮ ಅನುಷ್ಠಾನ ಸಮಿತಿ ರಚನೆಯಾಗಬೇಕು. ಗ್ರಾಮಗಳಲ್ಲಿ ಲಸಿಕೆ ನೀಡುವ ಸ್ಥಳ ದಿನಾಂಕವನ್ನು ಕರಪತ್ರದಲ್ಲಿ ಮುದ್ರಿಸಿ ವಿತರಿಸಬೇಕು. ಹಾಗೇಯೇ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ ಬ್ಯಾನರ್ ಬಿತ್ತಿಪತ್ರ ಇನ್ನಿತರ ವಿಧಾನಗಳ ಮೂಲಕ ಪೋಲಿಯೋ ಲಸಿಕೆ ಕಾರ್ಯಕ್ರಮದ ಬಗ್ಗೆ ಜಾಗೃತಿ ಮೂಡಿಸಬೇಕು ಎಂದರು. ಅಂಗನವಾಡಿ ಕಾರ್ಯಕರ್ತೆಯರು, ಮೇಲ್ವಿಚಾರಕರು, ಲಸಿಕಾ ಕಾರ್ಯಕ್ರಮದಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳಬೇಕು. ಲಸಿಕೆಯ ಮಹತ್ವದ ಬಗ್ಗೆ ತಿಳಿಸಿಕೊಡಬೇಕು. ಸಾರಿಗೆ ಇಲಾಖೆಯು ವಾಹನಗಳ ವ್ಯವಸ್ಥೆ ಒದಗಿಸುವ ಜವಾಬ್ದಾರಿ ನಿರ್ವಹಿಸಬೇಕಿದೆ. ಕಾರ್ಮಿಕ ಇಲಾಖೆ ಅಧಿಕಾರಿಗಳು ಕಟ್ಟಡ ನಿರ್ಮಾಣ, ಕಾಫಿ ತೋಟ, ಕಬ್ಬು ಕಟಾಯಿಸುವ ಕಾರ್ಮಿಕರ ಮಕ್ಕಳು, ಗಣಿಗಾರಿಕೆ ಇನ್ನಿತರ ವಲಸೆ ಪ್ರದೇಶಗಳಲ್ಲಿ ಇರುವ ೫ ವರ್ಷದೊಳಗಿನ ಮಕ್ಕಳನ್ನು ಗುರುತಿಸಿ ಲಸಿಕೆ ಹಾಕಿಸಲು ಕ್ರಮ ತೆಗೆದುಕೊಳ್ಳಬೇಕು. ಕಾಡಂಚಿನ ಪ್ರದೇಶಗಳಲ್ಲಿಯೂ ಲಸಿಕೆ ಕಾರ್ಯ ನಡೆಯಬೇಕು ಎಂದು ಹೇಳಿದರು.

ಜಿಲ್ಲಾ ವ್ಯಾಪ್ತಿಯಲ್ಲಿ ಬರುವ ಎಲ್ಲಾ ಸ್ವಯಂ ಸೇವಾ ಸಂಸ್ಥೆಗಳು, ನರ್ಸಿಂಗ್ ಶಾಲೆಗಳ ಸಹಕಾರ ಅಗತ್ಯವಿದೆ. ಸರ್ಕಾರಿ, ಖಾಸಗಿ ಬಸ್ ನಿಲ್ದಾಣ, ರೈಲು ನಿಲ್ದಾಣ, ಜನನಿಬಿಡ ಪ್ರದೇಶಗಳಲ್ಲಿ ಸಂಚಾರಿ ಬೂತ್ ಗಳನ್ನು ತೆರೆಯಲಾಗುತ್ತಿದೆ. ಅತ್ಯಂತ ಪ್ರಮುಖವಾದ ಹಾಗೂ ಮಕ್ಕಳ ಆರೋಗ್ಯದ ಕಾಳಜಿಯಿಂದ ಯಾವೊಂದು ಮಗುವು ಲಸಿಕೆಯಿಂದ ವಂಚಿತವಾಗದಂತೆ ನೋಡಿಕೊಳ್ಳಬೇಕು. ಪಲ್ಸ್ ಪೋಲಿಯೋ ರಾಷ್ಟ್ರೀಯ ಕಾರ್ಯಕ್ರಮ ಯಶಸ್ವಿಗೆ ವಿಶೇಷ ಶ್ರಮವಹಿಸುವಂತೆ ತಿಳಿಸಿದರು.

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಎಸ್. ಚಿದಂಬರ, ಆರ್.ಸಿ.ಹೆಚ್. ಅಧಿಕಾರಿ ಡಾ. ರಾಜೇಶ್ ಕುಮಾರ್, ಕುಟುಂಬ ಕಲ್ಯಾಣಾಧಿಕಾರಿ ಡಾ. ಅಂಕಪ್ಪ, ಜಿಲ್ಲಾ ಅಸಾಂಕ್ರಾಮಿಕ ರೋಗಗಳ ನಿರ್ಮೂಲನಾಧಿಕಾರಿ ಡಾ. ಚಂದ್ರಶೇಖರ್, ಜಿಲ್ಲಾ ಸರ್ವಲೆನ್ಸ್ ಅಧಿಕಾರಿ ಡಾ. ಸುಂದರೇಶ್, ಜಿಲ್ಲಾ ನಗರಾಭಿವೃದ್ದಿ ಕೋಶದ ಯೋಜನಾ ನಿರ್ದೇಶಕರಾದ ಎಂ.ವಿ. ಸುಧಾ, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಯ ಜಿಲ್ಲಾ ನಿರೂಪಣಾಧಿಕಾರಿ ಬಿ. ಮಂಜುಳಾ, ಜಿಲ್ಲಾ ಪ್ರಾದೇಶಿಕ ಸಾರಿಗೆ ಅಧಿಕಾರಿ ಗಾಯತ್ರಿ, ಜಿಲ್ಲಾ ಸಮಾಲೋಚಕರಾದ ರಕ್ಷಿತಾ, ವಿವಿಧ ಇಲಾಖೆಗಳ ಅಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.