ಸಾರಾಂಶ
ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಸೆ.1 ರಂದು ಮೈಸೂರಿನ ಅಖಿಲ ಭಾರತ ವಾಕ್ ಮತ್ತು ಶ್ರವಣ ಸಂಸ್ಥೆಯ (ಆಯಿಷ್) ಡೈಮಂಡ್ ಜೂಬಿಲಿ (ವಜ್ರ ಮಹೋತ್ಸವ) ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಆಗಮಿಸಲಿದ್ದು, ಈ ಸಂಬಂಧ ಅಗತ್ಯ ಸಿದ್ಧತೆ
ಮೈಸೂರು : ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಸೆ.1 ರಂದು ಮೈಸೂರಿನ ಅಖಿಲ ಭಾರತ ವಾಕ್ ಮತ್ತು ಶ್ರವಣ ಸಂಸ್ಥೆಯ (ಆಯಿಷ್) ಡೈಮಂಡ್ ಜೂಬಿಲಿ (ವಜ್ರ ಮಹೋತ್ಸವ) ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಆಗಮಿಸಲಿದ್ದು, ಈ ಸಂಬಂಧ ಅಗತ್ಯ ಸಿದ್ಧತೆಗೆ ಅಧಿಕಾರಿಗಳು ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಜಿ. ಲಕ್ಷ್ಮೀಕಾಂತ ರೆಡ್ಡಿ ಸೂಚಿಸಿದರು.
ನಗರದ ಜಿಪಂ ಸಭಾಂಗಣದಲ್ಲಿ ರಾಷ್ಟ್ರಪತಿಗಳು ಆಗಮನದ ಹಿನ್ನೆಲೆಯಲ್ಲಿ ಗುರುವಾರ ನಡೆದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು, ಶಿಷ್ಟಾಚಾರದಲ್ಲಿ ಯಾವುದೇ ಲೋಪವಾಗದಂತೆ ಸಂಬಂಧಪಟ್ಟ ಅಧಿಕಾರಿಗಳು ಎಚ್ಚರ ವಹಿಸಬೇಕು. ರಾಷ್ಟ್ರಪತಿಗಳು ರಾಡಿಷನ್ ಬ್ಲೂ ನಲ್ಲಿ ವಾಸ್ತವ್ಯ ಮಾಡುವರು. ಈ ಸಂಬಂಧ ಅಧಿಕಾರಿಗಳು ಸೂಕ್ತ ವ್ಯವಸ್ಥೆ ಮಾಡಿಕೊಳ್ಳಬೇಕು ಎಂದರು.
ರಾಷ್ಟ್ರಪತಿಗಳಿಗೆ ಸೂಕ್ತ ಪೊಲೀಸ್ ಭದ್ರತೆ ಒದಗಿಸುವ ಜೊತೆಯಲ್ಲಿ ಯಾವುದೇ ಅಸುರಕ್ಷತಾ ಘಟನೆಗಳಿಗೆ ಅವಕಾಶ ನೀಡಬಾರದು. ರಾಷ್ಟ್ರಪತಿಗಳು ಸಂಚರಿಸುವ ರಸ್ತೆ ಸಂಪೂರ್ಣವಾಗಿ ದುರಸ್ತಿಗೊಳಿಸಬೇಕು. ಹೊರ ವರ್ತುಲ ರಸ್ತೆ, ಆಯಿಷ್ ನಿಂದ ರಾಡಿಷನ್ ಬ್ಲೂ ವರೆಗಿನ ರಸ್ತೆಗಳು ಸ್ವಚ್ಛತೆ ನಗರ ಪಾಲಿಕೆ, ಎಂಡಿಎ ಹಾಗೂ ರಾಷ್ಟ್ರೀಯ ಹೆದ್ದಾರಿ ಸಂಬಂಧಿಸಿದ ಅಧಿಕಾರಿಗಳು ಈ ಜವಾಬ್ದಾರಿ ವಹಿಸಬೇಕು ಎಂದರು.
ರಾಷ್ಟ್ರಪತಿಗಳಿಗೆ ಶಿಷ್ಟಾಚಾರದಂತೆ ವೈದ್ಯಕೀಯ ವ್ಯವಸ್ಥೆ ಒದಗಿಸುವುದು ಆರೋಗ್ಯ ಇಲಾಖೆ ಜವಾಬ್ದಾರಿ. ಸೂಕ್ತ ವ್ಯವಸ್ಥೆಯುಳ್ಳ ಆಂಬ್ಯುಲೆನ್ಸ್, ತಜ್ಞ ವೈದ್ಯರು ಹಾಗೂ ಸಿಬ್ಬಂದಿ ನಿಯೋಜಿಸಬೇಕು ಎಂದರು.
ನಗರ ಪೊಲೀಸ್ ಆಯುಕ್ತೆ ಸೀಮಾ ಲಾಟ್ಕರ್, ಜಿಪಂ ಸಿಇಒ ಎಸ್. ಯುಕೇಶ್ ಕುಮಾರ್, ನಗರ ಪಾಲಿಕೆ ಆಯುಕ್ತ ಶೇಕ್ ತನ್ವೀರ್ ಆಸಿಫ್, ಹೆಚ್ಚುವರಿ ಜಿಲ್ಲಾಧಿಕಾರಿ ಡಾ.ಪಿ. ಶಿವರಾಜು, ಡಿಸಿಪಿ ಕೆ.ಎಸ್. ಸುಂದರ್ ರಾಜ್, ಆಯಿಷ್ ನಿರ್ದೇಶಕಿ ಡಾ. ಪುಪ್ಪಾವತಿ ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳು ಇದ್ದರು.
ಮಾಧ್ಯಮದವರಿಗೆ ಅವಕಾಶ ಇಲ್ಲ:
ರಾಷ್ಟ್ರಪತಿಗಳ ಮೈಸೂರಿನ ಅಖಿಲ ಭಾರತ ವಾಕ್ ಮತ್ತು ಶ್ರವಣ ಸಂಸ್ಥೆಯ ಕಾರ್ಯಕ್ರಮದಲ್ಲಿ ಸ್ಧಳದ ಅವಕಾಶ ಕಡಿಮೆ ಇರುವುದರಿಂದ ಮಾಧ್ಯಮದವರಿಗೆ ಕಾರ್ಯಕ್ರಮಕ್ಕೆ ಅವಕಾಶ ಇರುವುದಿಲ್ಲ. ಕಾರ್ಯಕ್ರಮದ ನೇರ ಪ್ರಸಾರದ ಲೈವ್ ಲಿಂಕ್ ಅನ್ನು ಮಾಧ್ಯಮದವರಿಗೆ ನೀಡಲಾಗುವುದು ಎಂದು ಜಿಲ್ಲಾಡಳಿತ ತಿಳಿಸಿದೆ.