ಸಾರಾಂಶ
ಪೃಕೃತಿಯ ಮೇಲೆ ಮಾನವನ ಹಸ್ತಕ್ಷೇಪ ಮಿತಿಮೀರಿದೆ. ಅಭಿವೃದ್ಧಿ ಕಾರ್ಯಕ್ಕೆ ನಿರಂತರವಾಗಿ ಪರಿಸರ ನಾಶವಾಗುತ್ತಿದೆ. ಇದಕ್ಕೆ ರಾಜ್ಯದ ಶಿರೂರು ಗುಡ್ಡ ಕುಸಿತ, ಕೇರಳದ ವಯನಾಡು ದುರಂತಗಳೇ ಸಾಕ್ಷಿಯಾಗಿವೆ. ಆದ್ದರಿಂದ ಅರಣ್ಯ ನಾಶ ತಡೆಗಟ್ಟಬೇಕು. ಅರಣ್ಯ ಬೆಳೆಸುವವರಿಗೆ ಪ್ರೋತ್ಸಾಹ ನೀಡಬೇಕು.
ಕನ್ನಡಪ್ರಭ ವಾರ್ತೆ ಬೆಂಗಳೂರು
ಅಭಿವೃದ್ಧಿ ಹೆಸರಿನಲ್ಲಿ ಅರಣ್ಯ ನಾಶ ತಡೆಗಟ್ಟಬೇಕು. ಅರಣ್ಯ ಬೆಳೆಸಲು ಪ್ರೋತ್ಸಾಹ ನೀಡಬೇಕು ಎಂದು ವಿಧಾನ ಪರಿಷತ್ ಸದಸ್ಯ ದಿನೇಶ್ ಗೂಳಿಗೌಡ ಸರ್ಕಾರಕ್ಕೆ ಮನವಿ ಮಾಡಿದ್ದಾರೆ.ಈ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮತ್ತು ಅರಣ್ಯ ಸಚಿವ ಈಶ್ವರ ಖಂಡ್ರೆ ಅವರಿಗೆ ಪತ್ರ ಬರೆದಿರುವ ಅವರು, ಪೃಕೃತಿಯ ಮೇಲೆ ಮಾನವನ ಹಸ್ತಕ್ಷೇಪ ಮಿತಿಮೀರಿದೆ. ಅಭಿವೃದ್ಧಿ ಕಾರ್ಯಕ್ಕೆ ನಿರಂತರವಾಗಿ ಪರಿಸರ ನಾಶವಾಗುತ್ತಿದೆ. ಇದಕ್ಕೆ ರಾಜ್ಯದ ಶಿರೂರು ಗುಡ್ಡ ಕುಸಿತ, ಕೇರಳದ ವಯನಾಡು ದುರಂತಗಳೇ ಸಾಕ್ಷಿಯಾಗಿವೆ. ಆದ್ದರಿಂದ ಅರಣ್ಯ ನಾಶ ತಡೆಗಟ್ಟಬೇಕು. ಅರಣ್ಯ ಬೆಳೆಸುವವರಿಗೆ ಪ್ರೋತ್ಸಾಹ ನೀಡಬೇಕು ಎಂದು ಕೋರಿದ್ದಾರೆ.
ಅರಣ್ಯ ಪ್ರದೇಶಗಳ ಅಭಿವೃದ್ಧಿ ಜತೆಗೆ ಸಸ್ಯಗಳನ್ನು ಹೆಚ್ಚಿನ ಸಂಖ್ಯೆಯಲ್ಲಿ ನೆಡುವ ಮೂಲಕ ಸಸ್ಯ, ಪ್ರಾಣಿ, ಪಕ್ಷಿಗಳ ಸುರಕ್ಷತೆಗಾಗಿ ಸಾರ್ವಜನಿಕರು ಹಾಗೂ ಸರ್ಕಾರ ಎಚ್ಚೆತ್ತುಕೊಳ್ಳಬೇಕು. ಅಭಿವೃದ್ಧಿ ಹೆಸರಿನಲ್ಲಿ ನಿಸರ್ಗ ವಿರೋಧಿ ಚಟುವಟಿಕೆ ನಡೆಸುತ್ತಿರುವುದು ಆತಂಕ ಉಂಟು ಮಾಡಿದ್ದು ಇದಕ್ಕೆ ಕಡಿವಾಣ ಹಾಕಬೇಕು. ಅರಣ್ಯ ನಾಶ ಮಾಡುವವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಂಡರೆ ಪ್ರಕೃತಿ ವಿಕೋಪದಂತಹ ಅನಾಹುತ ತಡೆಯಬಹುದು ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.ಅರಣ್ಯ ಒತ್ತುವರಿ, ನಾಶ, ಅಭಿವೃದ್ಧಿಯ ಹೆಸರಿನಲ್ಲಿ ನಡೆಯುತ್ತಿರುವ ಬೆಳವಣಿಗೆಗೆ ಕಡಿವಾಣ ಹಾಕಬೇಕು. ಕೃಷಿಯ ಜತೆ ಅರಣ್ಯ ಬೆಳೆಸಲು ರೈತರಿಗೆ ಪ್ರೋತ್ಸಾಹಧನ ನೀಡಬೇಕು. ಕಲ್ಲು ಗಣಿಗಾರಿಕೆ ಮತ್ತಿತರ ಕಾರ್ಯಗಳಿಗೆ ಅನುಮತಿ ನೀಡಿದಾಗ ಪರ್ಯಾಯವಾಗಿ ಅರಣ್ಯ ಬೆಳೆಸಲು ಇನ್ನಷ್ಟು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.