ಸಾರಾಂಶ
ಕನ್ನಡಪ್ರಭ ವಾರ್ತೆ ಕುಶಾಲನಗರ ಕುಶಾಲನಗರ ತಾಲೂಕಿನ ಕೂಡುಮಂಗಳೂರು ಸರ್ಕಾರಿ ಪ್ರೌಢಶಾಲೆಯಲ್ಲಿ ಸೋಮವಾರ ನಮ್ಮ ನಡೆ ಹಸಿರೆಡೆಗೆ ಗ್ರೋ ಗ್ರೀನ್ ಅಭಿಯಾನದಡಿ ಗೌರಿ-ಗಣೇಶೋತ್ಸವ ಹಬ್ಬ ಆಚರಣೆ ಸಂದರ್ಭದಲ್ಲಿ ಪರಿಸರಕ್ಕೆ ಯಾವುದೇ ಧಕ್ಕೆಯಾಗದಂತೆ ಪರಿಸರ ಸ್ನೇಹಿ ನೈಸರ್ಗಿಕ ಜೇಡಿಮಣ್ಣಿನ ಗಣೇಶ ಮೂರ್ತಿಯನ್ನು ಸ್ಥಾಪಿಸುವ ಕುರಿತು ಶಾಲೆಯ ಇಕೋ ಕ್ಲಬ್, ಎನ್.ಎಸ್.ಎಸ್. ವತಿಯಿಂದ ಜನ ಜಾಗೃತಿ ಮೂಡಿಸಲಾಯಿತು.
ಪರಿಸರ ಸ್ನೇಹಿ ಗಣೇಶೋತ್ಸವ ಜನಜಾಗೃತಿ ಆಂದೋಲನ -2025 ಅಂಗವಾಗಿ ಮಣ್ಣಿನ ಗಣೇಶ ಮೂರ್ತಿ ತಯಾರಿಕೆಯ ಮಹತ್ವ ಕುರಿತು ಜಾಗೃತಿ ನಡೆಸಲಾಯಿತು.ಪರಿಸರ ಸ್ನೇಹಿ ಗಣೇಶೋತ್ಸವ ಆಚರಣೆಯ ಮಹತ್ವ ಕುರಿತು ಮಾಹಿತಿ ನೀಡಿ ಪರಿಸರ ಪ್ರತಿಜ್ಞಾ ವಿಧಿ ಬೋಧಿಸಿದ ಪ್ರೌಢಶಾಲಾ ಮುಖ್ಯ ಶಿಕ್ಷಕರೂ ಆದ ಪರಿಸರ ಕಾರ್ಯಕ್ರಮದ ಸಂಘಟಕ ಟಿ.ಜಿ. ಪ್ರೇಮಕುಮಾರ್, ನೈಸರ್ಗಿಕವಾದ ಮಣ್ಣಿನ ಗಣೇಶ ಮೂರ್ತಿಗಳನ್ನು ಪ್ರತಿಷ್ಠಾಪಿಸುವ ಮೂಲಕ ಮಾಲಿನ್ಯ ತಡೆಗಟ್ಟುವ ಮೂಲಕ ಪರಿಸರ ಸಂರಕ್ಷಣೆಗೆ ಮುಂದಾಗಬೇಕು ಎಂದರು.
ಗಣೇಶೋತ್ಸವ ಸಂದರ್ಭದಲ್ಲಿ ಮಾಲಿನ್ಯಕಾರಿ ರಾಸಾಯನಿಕ ಬಣ್ಣ ಬಳಸಿ ತಯಾರು ಮಾಡಿದ ಗಣೇಶ ಮೂರ್ತಿ ಹಾಗೂ ಪಿ.ಓ.ಪಿ. ಗಣೇಶ ಮೂರ್ತಿ ತಯಾರಿಕೆ ಪ್ರತಿಷ್ಠಾಪಿಸದೆ ಪ್ರತಿಯೊಬ್ಬರೂ ಪರಿಸರ ಸ್ನೇಹಿ ಗಣೇಶ ಮೂರ್ತಿ ಪ್ರತಿಷ್ಠಾಪಿಸುವ ಮೂಲಕ ಮಾಲಿನ್ಯ ತಡೆಗಟ್ಟಿ ಸುಸ್ಥಿರ ಪರಿಸರ ಸಂರಕ್ಷಣೆಗೆ ಸಹಕರಿಸಬೇಕು ಎಂದು ಮನವಿ ಮಾಡಿದರು.ರಾಸಾಯನಿಕ ಬಣ್ಣದ ಗಣೇಶ ಮೂರ್ತಿಗಳನ್ನು ನದಿ ಕೆರೆ ಮತ್ತಿತರ ಜಲಮೂಲಗಳಿಗೆ ವಿಸರ್ಜಿಸುವುದರಿಂದ ಜಲಚರಗಳು ಸೇರಿದಂತೆ ಜಲ ಮಾಲಿನ್ಯ ಉಂಟಾಗುವುದನ್ನು ತಡೆಗಟ್ಟುವ ದಿಸೆಯಲ್ಲಿ ಪರಿಸರ ಸ್ನೇಹಿ ಗಣೇಶ ಮೂರ್ತಿಗಳನ್ನು ತಯಾರಿಸಿ ಪ್ರತಿಷ್ಠಾಪಿಸಲು ಜನಜಾಗೃತಿ ಮೂಡಿಸಲಾಗುತ್ತಿದೆ ಎಂದು ಪ್ರೇಮಕುಮಾರ್ ಹೇಳಿದರು.ಶಾಲೆಯ ಇಕೋ ಕ್ಲಬ್ ಉಸ್ತುವಾರಿ ಶಿಕ್ಷಕಿ ಬಿ.ಡಿ.ರಮ್ಯಾ ಮಾತನಾಡಿ, ರಾಸಾಯನಿಕ ಬಣ್ಣ ಲೇಪಿತ ಹಾಗೂ ಪಿ.ಓ.ಪಿ.ಗಣೇಶ ಮೂರ್ತಿಯ ಬಳಕೆಯಿಂದ ಪರಿಸರಕ್ಕೆ ಉಂಟಾಗುವ ದುಷ್ಪರಿಣಾಮಗಳ ಕುರಿತು ಮಾಹಿತಿ ನೀಡಿದರು.
ವಿದ್ಯಾರ್ಥಿಗಳು ಪರಿಸರ ಸ್ನೇಹಿ ಗಣೇಶೋತ್ಸವ ಆಚರಣೆ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸಬೇಕು ಎಂದರು.ಜಿಲ್ಲಾ ಪ್ರೌಢಶಾಲಾ ಸಹ ಶಿಕ್ಷಕರ ಸಂಘದ ಸಂಘಟನಾ ಕಾರ್ಯದರ್ಶಿ ಎಂ.ಟಿ.ದಯಾನಂದ ಪ್ರಕಾಶ್, ಶಾಲೆಯ ಶಿಕ್ಷಕರು ವಿದ್ಯಾರ್ಥಿಗಳು ಇದ್ದರು.ಜಾಗೃತಿ ಅಭಿಯಾನದಲ್ಲಿ ವಿದ್ಯಾರ್ಥಿ ಅಜಯ್ ಮಣ್ಣಿನಿಂದ ತಯಾರಿಸಿದ ಪರಿಸರ ಸ್ನೇಹಿ ಗಣೇಶ ಮೂರ್ತಿ ಗಮನ ಸೆಳೆಯಿತು.ನಂತರ ಕೂಡ್ಲೂರು ಗ್ರಾಮದಲ್ಲಿ ಜನಜಾಗೃತಿ ನಡೆಸಿದ ವಿದ್ಯಾರ್ಥಿಗಳು ಜನರಲ್ಲಿ ಪರಿಸರ ಸ್ನೇಹಿ ಗಣೇಶ ಮೂರ್ತಿಗಳನ್ನು ತಯಾರಿಸಿ ಪ್ರತಿಷ್ಠಾಪಿಸಲು ಜನಜಾಗೃತಿ ಮೂಡಿಸಲಾಯಿತು.