ವಿವಿಧ ಸೂಕ್ಷ್ಮಾಣು ಜೀವಿಗಳಿಂದ ಉಂಟಾಗುವ ಸಾಂಕ್ರಾಮಿಕ ರೋಗಗಳನ್ನು ತಡೆಗಟ್ಟಲು ಇಲಾಖೆಗಳು ಸಮನ್ವಯದಿಂದ ಕಾರ್ಯನಿರ್ವಹಿಸುವಂತೆ ಜಿಲ್ಲಾಧಿಕಾರಿ ಶ್ರೀರೂಪ ಅಧಿಕಾರಿಗಳಿಗೆ ಸೂಚಿಸಿದರು.
ಕನ್ನಡಪ್ರಭ ವಾರ್ತೆ ಚಾಮರಾಜನಗರ
ವಿವಿಧ ಸೂಕ್ಷ್ಮಾಣು ಜೀವಿಗಳಿಂದ ಉಂಟಾಗುವ ಸಾಂಕ್ರಾಮಿಕ ರೋಗಗಳನ್ನು ತಡೆಗಟ್ಟಲು ಇಲಾಖೆಗಳು ಸಮನ್ವಯದಿಂದ ಕಾರ್ಯನಿರ್ವಹಿಸುವಂತೆ ಜಿಲ್ಲಾಧಿಕಾರಿ ಶ್ರೀರೂಪ ಅಧಿಕಾರಿಗಳಿಗೆ ಸೂಚಿಸಿದರು.ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಬುಧವಾರ ನಡೆದ ಜಿಲ್ಲಾಮಟ್ಟದ ಸರ್ವೇಲೆನ್ಸ್ ಸಮನ್ವಯ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಕಲುಷಿತ ಕುಡಿಯುವ ನೀರು, ಇತರೆ ಆಹಾರ ಪದಾರ್ಥಗಳ ಸೇವನೆಯಿಂದ ಮನುಷ್ಯನಿಗೆ ಸಾಂಕ್ರಾಮಿಕ ರೋಗಗಳನ್ನು ಹರಡುವ ಬ್ಯಾಕ್ಟೀರಿಯಾ, ಕಾಲರ, ಪ್ಲೇಗ್, ಫಂಗಸ್, ಪ್ಯಾರಾಸೈಟ್ ಸೇರಿದಂತೆ ವಿವಿಧ ಸೂಕ್ಷ್ಮಾಣು ಜೀವಿಗಳ ನಿಯಂತ್ರಣಕ್ಕಾಗಿ ಆರೋಗ್ಯ ಇಲಾಖೆಯು ವಿವಿಧ ಇಲಾಖೆಗಳ ಜತೆ ಸಮನ್ವಯ ಸಾಧಿಸಬೇಕು. ಮನೆಗಳು ಹಾಗೂ ಶಾಲೆಗಳಲ್ಲಿ ನೀರಿನ ಟ್ಯಾಂಕ್, ತೊಟ್ಟಿ ಹಾಗೂ ಸಂಪ್ಗಳಲ್ಲಿ ನೀರು ಕಲುಷಿತವಾಗದಂತೆ ಮುನ್ನೆಚ್ಚರಿಕೆ ಕ್ರಮಗಳ ಬಗ್ಗೆ ಸಾರ್ವಜನಿಕರಿಗೆ ತಿಳಿಹೇಳಬೇಕು ಎಂದರು.ನಿತ್ಯದ ಬಳಕೆಗಾಗಿ ಅವಶ್ಯವಿರುವ ನೀರನ್ನು ಸಂಗ್ರಹಿಸಿಟ್ಟುಕೊಳ್ಳುವುದು ಸಾಮಾನ್ಯವಾಗಿದ್ದು, ನೀರಿನಲ್ಲಿ ಸೂಕ್ಷ್ಮಾಣು ಜೀವಿಗಳು ಸೇರದಂತೆ ಎಚ್ಚರ ವಹಿಸಬೇಕು. ಆಗಾಗ್ಗೆ ನೀರನ್ನು ಬದಲಾಯಿಸುತ್ತಿರಬೇಕು. ಸಾಂಕ್ರಾಮಿಕ ರೋಗಗಳ ತಡೆಗಟ್ಟುವಿಕೆ ಹಾಗೂ ನಿಯಂತ್ರಣ ಕ್ರಮಗಳ ವಿಧಾನಗಳನ್ನು ಜನರಿಗೆ ತಿಳಿಸಿಕೊಡಬೇಕು. ಎಲ್ಲಾ ಪ್ರಾಥಮಿಕ ಆರೋಗ್ಯ ಕೇಂದ್ರಗಳು ಹಾಗೂ ಸಮುದಾಯ ಆರೋಗ್ಯ ಕೇಂದ್ರಗಳ ವ್ಯಾಪ್ತಿಯಲ್ಲಿ ಪ್ರತಿ ತಿಂಗಳು ಆರೋಗ್ಯ ಕಾರ್ಯಕರ್ತರು ನೀರಿನ ಶುದ್ಧತೆಯ ಬಗ್ಗೆ ತಪಾಸಣೆ ನಡೆಸಬೇಕು ಎಂದು ತಿಳಿಸಿದರು.
ಸಾಂಕ್ರಾಮಿಕ ರೋಗಗಳ ಬಗ್ಗೆ ಸಾಮುದಾಯಿಕವಾಗಿ ಅರಿವು ಮೂಡಿಸಲು ಸಾರ್ವಜನಿಕರಿಗೆ ಕರಪತ್ರಗಳು ಹಾಗೂ ಧ್ವನಿವರ್ಧಕದ ಮೂಲಕ ಜಾಗೃತಿ ಉಂಟುಮಾಡಬೇಕು. ಕುಡಿಯುವ ನೀರಿನ ಮೂಲಗಳಿಗೆ ಕಲುಷಿತ ನೀರು ಸೇರದಂತೆ ನಿಗಾ ವಹಿಸಬೇಕು. ಕೆಟ್ಟಿರುವ ಪೈಪ್ಲೈನ್ಗಳನ್ನು ದುರಸ್ಥಿಪಡಿಸುವುದು ಹಾಗೂ ನಿರಂತರವಾಗಿ ನೀರು ಸರಬರಾಜು ಆಗುವಂತೆ ನೋಡಿಕೊಳ್ಳಬೇಕು. ಒಳಚರಂಡಿಗಳಲ್ಲಿ ಕೊಳಚೆ ನೀರು ಸರಾಗವಾಗಿ ಹೋಗುವಂತಿರಬೇಕು. ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ನಡೆಯುವ ಸ್ಥಳೀಯ ಸಭೆಯಲ್ಲಿ ಆಯಾ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಭಾಗವಹಿಸಿ ಸಾಂಕ್ರಾಮಿಕ ರೋಗಗಳ ತಡೆಗಟ್ಟಲು ಮುಂದಾಗಬೇಕು ಎಂದರು.ಜಿಲ್ಲೆಯಲ್ಲಿ ಕಾಡುಪ್ರಾಣಿಗಳ ಹಾವಳಿ ಮಾತ್ರವಲ್ಲ, ಕೆಲಬಾರಿ ವಿಷಪೂರಿತ ಹಾವುಗಳಿಂದಲೂ ಸಮಸ್ಯೆ ಎದುರಾಗಲಿದೆ. ಜನವರಿ ೨೦೨೬ರಿಂದ ಈವರೆಗೆ ಜಿಲ್ಲೆಯಲ್ಲಿ ೬ ಮಂದಿ ಹಾವು ಕಡಿತದಿಂದ ಮೃತಪಟ್ಟಿದ್ದಾರೆ. ಹಾವು ಕಚ್ಚಿದಾಗ ಅರ್ಧಮಂದಿ ಭಯದಿಂದಲೇ ಮೃತಪಡುವ ಸಂಭವಗಳೇ ಹೆಚ್ಚು. ಹಾವು ಕಚ್ಚಿದ ಸಂದರ್ಭದಲ್ಲಿ ಸಾರ್ವಜನಿಕರಿಗೆ ಭಯ ಪಡದೇ, ನಾಟಿ ಔಷಧಿಗಳ ಮೊರೆಹೋಗದೇ ಹತ್ತಿರದ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುವಂತೆ ಎಲ್ಲಾ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಹೆಚ್ಚಿನ ಅರಿವು ಮೂಡಿಸಬೇಕು. ಎಲ್ಲಾ ಆರೋಗ್ಯ ಕೇಂದ್ರಗಳಲ್ಲಿ ಸ್ನೇಕ್ಬೈಟ್ ಔಷಧಿ ದಾಸ್ತಾನು ಜನರಿಗೆ ಲಭ್ಯವಾಗುವಂತೆ ನೋಡಿಕೊಳ್ಳಬೇಕು ಎಂದು ತಿಳಿಸಿದರು.
ಹಿರಿಯ ಸಿವಿಲ್ ನ್ಯಾಯಾಧೀಶ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಈಶ್ವರ, ಜಿಲ್ಲಾ ಆರೋಗ್ಯ ಮತ್ತು ಕಲ್ಯಾಣಾಧಿಕಾರಿ ಡಾ.ನೀಲಾಂಬಿಕ, ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ಸಂದರೇಶ್, ಜಿಲ್ಲಾ ಮಾನಸಿಕ ಆರೋಗ್ಯ ಕಾರ್ಯಕ್ರಮ ಅಧಿಕಾರಿ ಡಾ.ಚಂದ್ರಶೇಖರ್, ಜಿಲ್ಲಾ ಆರ್.ಸಿ.ಎಚ್ ಅಧಿಕಾರಿ ಡಾ.ರೇಣುಕಾದೇವಿ, ಜಿಲ್ಲಾ ಏಡ್ಸ್ ನಿಯಂತ್ರಣಾಧಿಕಾರಿ ಡಾ.ರವಿಕುಮಾರ್, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ಉಪನಿರ್ದೇಶಕಿ ಸುಭದ್ರಾದೇವಿ, ತಾಲೂಕು ಆರೋಗ್ಯಾಧಿಕಾರಿಗಳು ಹಾಜರಿದ್ದರು.