ಸಾರಾಂಶ
ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯ ಡಾ.ಕೆ.ಟಿ.ತಿಪ್ಪೇಸ್ವಾಮಿ ಅಭಿಮತಕನ್ನಡಪ್ರಭ ವಾರ್ತೆ ಚಿತ್ರದುರ್ಗ:ಬಾಲ್ಯಾವಸ್ಥೆಯ ಗರ್ಭಧಾರಣೆ ತಡೆಗಟ್ಟುವುದು ನಮ್ಮೆಲ್ಲರ ಜವಾಬ್ದಾರಿಯಾಗಿದೆ. ಈ ನಿಟ್ಟಿನಲ್ಲಿ ಎಲ್ಲಾ ಪ್ರಾಥಮಿಕ ಆರೋಗ್ಯ ಕೇಂದ್ರಗಳ ವೈದ್ಯಾಧಿಕಾರಿ ಹಾಗೂ ಸಿಬ್ಬಂದಿ ಕಾರ್ಯ ಪ್ರವೃತ್ತರಾಗಬೇಕು ಎಂದು ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯ ಡಾ.ಕೆ.ಟಿ.ತಿಪ್ಪೇಸ್ವಾಮಿ ತಿಳಿಸಿದರು.
ನಗರದ ಡಿಹೆಚ್‌ಒ ಕಚೇರಿಯಲ್ಲಿ ಶುಕ್ರವಾರ ಚಿತ್ರದುರ್ಗ ತಾಲೂಕಿನ ಎಲ್ಲಾ ಪ್ರಾಥಮಿಕ ಆರೋಗ್ಯ ಕೇಂದ್ರಗಳ ವೈದ್ಯಾಧಿಕಾರಿ ಮತ್ತು ಕ್ಷೇತ್ರ ಮಟ್ಟದಲ್ಲಿ ಕಾರ್ಯ ನಿರ್ವಹಿಸುವ ಆರೋಗ್ಯ ಸುರಕ್ಷತಾಧಿಕಾರಿ ಮತ್ತು ಆರೋಗ್ಯ ನಿರೀಕ್ಷಣಾಧಿಕಾರಿಗಳ ಪ್ರಗತಿ ಪರಿಶೀಲಾನ ಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿದರು.ಬಾಲ್ಯ ವಿವಾಹ ತಡೆಗಟ್ಟುವಿಕೆ, ಮಕ್ಕಳ ಹಕ್ಕು ರಕ್ಷಣೆ, ಭ್ರೂಣ ಲಿಂಗ ಪತ್ತೆ ತಡೆ, ಬಾಲ ಕಾರ್ಮಿಕ ಪದ್ದತಿ ನಿಷೇಧ ಕಾಯ್ದೆಗಳು ತುಂಬಾ ಕಠಿಣವಾಗಿವೆ. ಇವುಗಳನ್ನು ಸರಿಯಾದ ರೀತಿಯಲ್ಲಿ ಅನುಷ್ಠಾನಕ್ಕೆ ತಂದರೆ, ಮಕ್ಕಳಿಗೆ ಸೂಕ್ತ ರಕ್ಷಣೆ ದೊರಕುವುದರೊಂದಿಗೆ ಅವರ ಭವಿಷ್ಯ ಉಜ್ವಲವಾಗುತ್ತದೆ. ಈ ಕಾಯ್ದೆಗಳನ್ನು ಸರಿಯಾದ ರೀತಿಯಲ್ಲಿ ಅರ್ಥಮಾಡಿಕೊಂಡು ಅಧಿಕಾರಿಗಳು ಅನುಷ್ಠಾನ ಮಾಡುಬೇಕು ಎಂದರು.
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಅಧಿಕಾರಿ ಡಾ.ಜಿ.ಪಿ.ರೇಣುಪ್ರಸಾದ್ ಮಾತನಾಡಿ, ಬಾಲ ಕಾರ್ಮಿಕ ಪದ್ಧತಿ ತಡೆದು ಮಕ್ಕಳನ್ನು ಶಾಲೆಗೆ ಸೇರಿಸಿ ವಿದ್ಯೆ ಕೊಡಿಸಿ, ಇದಕ್ಕಾಗಿ ಸರ್ಕಾರದ ಹಲವಾರು ಯೋಜನೆಗಳ ಉಪಯೋಗ ಪಡೆಯಬಹುದಾಗಿದೆ ಎಂದರು.ಜಿಲ್ಲಾ ಆರ್‌ಸಿಹೆಚ್ ಅಧಿಕಾರಿ ಡಾ.ಅಭಿನವ್ ಮಾತನಾಡಿ, ಇತ್ತೀಚಿನ ದಿನಗಳಲ್ಲಿ ಬಾಲಕಿಯರ ಗರ್ಭಧಾರಣೆಯ ಕಂಡು ಬರುತ್ತಿದ್ದು, ಗ್ರಾಮ ಗ್ರಾಮಗಳಲ್ಲಿ ತಾಯಂದಿರ ಸಭೆ ಗ್ರಾಮಸಭೆ ಮತ್ತು ಗ್ರಾಮ ಆರೋಗ್ಯ ನೈರ್ಮಲ್ಯ ಪೌಷ್ಟಿಕ ಸಮಿತಿ ಸಭೆಗಳಲ್ಲಿ ಮಕ್ಕಳ ಹಕ್ಕು ರಕ್ಷಣೆ ಬಗ್ಗೆ ಸಾರ್ವಜನಿಕರಿಗೆ ಅರಿವು ಮೂಡಿಸಿಲಾಗುತ್ತಿದೆ ಎಂದರು.
ಕಾರ್ಯಕ್ರಮದ ನಂತರ ಮಕ್ಕಳ ಆಯೋಗದ ಸದಸ್ಯ ಕೆ.ಟಿ.ತಿಪ್ಪೇಸ್ವಾಮಿ ಸಾಯಿ ನಾರಾಯಣ ಖಾಸಗಿ ಆಸ್ಪತ್ರೆ ಭೇಟಿ ನೀಡಿ ಸದಸ್ಯರು ಭ್ರೂಣ ಲಿಂಗ ಪತ್ತೆ ಕಾಯ್ದೆ ಅನುಷ್ಠಾನದ ಪರಿಶೀಲನೆ ನಡೆಸಿ ಮಾರ್ಗದರ್ಶನ ನೀಡಿದರು. ಈ ಸಂದರ್ಭದಲ್ಲಿ ಜಿಲ್ಲಾ ಮಕ್ಕಳ ಹಕ್ಕುಗಳ ರಕ್ಷಣಾಧಿಕಾರಿ ಸವಿತ, ಜಿಲ್ಲಾ ಕುಟುಂಬ ಕಲ್ಯಾಣಾಧಿಕಾರಿ ಡಾ.ರೇಖಾ, ಹನುಮಂತ ಗೌಡ ಪೂಜಾರ್, ಪುನೀತ್ ಉಪಸ್ಥಿತರಿದ್ದರು.