ಮಕ್ಕಳ ಮೇಲಿನ ದೌರ್ಜನ್ಯ ತಡೆ ನಮ್ಮೆಲ್ಲರ ಕರ್ತವ್ಯ

| Published : Dec 19 2023, 01:45 AM IST

ಮಕ್ಕಳ ಮೇಲಿನ ದೌರ್ಜನ್ಯ ತಡೆ ನಮ್ಮೆಲ್ಲರ ಕರ್ತವ್ಯ
Share this Article
  • FB
  • TW
  • Linkdin
  • Email

ಸಾರಾಂಶ

ಧಾರವಾಡದಲ್ಲಿ ಸೋಮವಾರ ವಸತಿ ನಿಲಯದ ನಿಲಯ ಪಾಲಕರು ಹಾಗೂ ಬಿಆರ್‌ಪಿ, ಸಿಆರ್‌ಪಿಗಳಿಗೆ ಬಾಲನ್ಯಾಯ ಕಾಯ್ದೆ, ಪೋಕ್ಸೋ ಕಾಯ್ದೆ, ಬಾಲ್ಯ ವಿವಾಹ ನಿಷೇಧ ಕಾಯ್ದೆ ಹಾಗೂ ಮಕ್ಕಳಿಗೆ ಸಂಬಂಧಿಸಿದ ವಿವಿಧ ಕಾನೂನುಗಳ ಕುರಿತು ತರಬೇತಿ ಕಾರ್ಯಾಗಾರ ನಡೆಯಿತು. ಈ ವೇಳೆ ಮಾತನಾಡಿದ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್‌ ನ್ಯಾಯಾಧೀಶ ಪರಶುರಾಮ ದೊಡ್ಡಮನಿ, ಇಂದಿನ ಮಕ್ಕಳೇ ಮುಂದಿನ ಪ್ರಜೆಗಳು. ಆದ್ದರಿಂದ ಮಕ್ಕಳನ್ನು ಸುಸಂಸ್ಕೃತರನ್ನಾಗಿ ಮಾಡುವುದು ನಮ್ಮೆಲ್ಲರ ಕರ್ತವ್ಯ. ಜತೆಗೆ ಮಕ್ಕಳ ಮೇಲೆ ದೌರ್ಜನ್ಯ ನಡೆಯದಂತೆ ತಡೆಯುವುದು ಎಲ್ಲರ ಕರ್ತವ್ಯ ಎಂದು ಹೇಳಿದರು.

- ಮಕ್ಕಳ ಹಕ್ಕು ರಕ್ಷಣೆ ಕಾಯ್ದೆಗಳ ಕಾರ್ಯಾಗಾರ ಉದ್ಘಾಟಿಸಿ ನ್ಯಾಯಾಧೀಶ ದೊಡ್ಡಮನಿ ಅಭಿಮತಕನ್ನಡಪ್ರಭ ವಾರ್ತೆ ಧಾರವಾಡ

ಇಂದಿನ ಮಕ್ಕಳೇ ಮುಂದಿನ ಪ್ರಜೆಗಳು. ಆದ್ದರಿಂದ ಮಕ್ಕಳನ್ನು ಸುಸಂಸ್ಕೃತರನ್ನಾಗಿ ಮಾಡುವುದು ನಮ್ಮೆಲ್ಲರ ಕರ್ತವ್ಯ. ಜತೆಗೆ ಮಕ್ಕಳ ಮೇಲೆ ದೌರ್ಜನ್ಯ ನಡೆಯದಂತೆ ತಡೆಯುವುದು ಎಲ್ಲರ ಕರ್ತವ್ಯ ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್‌ ನ್ಯಾಯಾಧೀಶ ಪರಶುರಾಮ ದೊಡ್ಡಮನಿ ಹೇಳಿದರು.

ಜಿಲ್ಲಾಡಳಿತ, ಜಿಪಂ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಮಕ್ಕಳ ರಕ್ಷಣಾ ನಿರ್ದೆಶನಾಲಯ ಹಾಗೂ ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಇವುಗಳ ಸಂಯುಕ್ತಾಶ್ರಯದಲ್ಲಿ ನಗರದಲ್ಲಿ ನಡೆದ ವಸತಿ ನಿಲಯದ ನಿಲಯ ಪಾಲಕರು ಹಾಗೂ ಬಿಆರ್‌ಪಿ, ಸಿಆರ್‌ಪಿಗಳಿಗೆ ಬಾಲನ್ಯಾಯ ಕಾಯ್ದೆ, ಪೋಕ್ಸೋ ಕಾಯ್ದೆ, ಬಾಲ್ಯ ವಿವಾಹ ನಿಷೇಧ ಕಾಯ್ದೆ ಹಾಗೂ ಮಕ್ಕಳಿಗೆ ಸಂಬಂಧಿಸಿದ ವಿವಿಧ ಕಾನೂನುಗಳ ಕುರಿತು ತರಬೇತಿ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದರು.

ಮಕ್ಕಳ ಮೇಲಿನ ದೌರ್ಜನ್ಯ ತಡೆಗಟ್ಟಲು ಕಾನೂನಿನ ನೆರವು ಪಡೆಯಬೇಕು. ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಸಾರ್ವಜನಿಕರಿಗಾಗಿಯೇ ಇದೆ. ಇದರ ಸದುಪಯೋಗಪಡೆದುಕೊಳ್ಳಬೇಕು ಎಂದು ನುಡಿದರು.

ಮಕ್ಕಳ ಕಲ್ಯಾಣ ಸಮಿತಿ ಅಧ್ಯಕ್ಷೆ ರಾಜೇಶ್ವರಿ ಸಾಲಗಟ್ಟಿ ಮಾತನಾಡಿ, ಮಕ್ಕಳಿಗಾಗಿ ಹಲವಾರು ಕಾನೂನುಗಳಿವೆ. ಯಾವುದೇ ವಸತಿ ನಿಲಯಗಳಲ್ಲಿ ಮಕ್ಕಳಿಗೆ ಅನ್ಯಾಯವಾದಲ್ಲಿ ತಮ್ಮ ಮಕ್ಕಳೆಂದು ಭಾವಿಸಿ ಮಕ್ಕಳಿಗೆ ನ್ಯಾಯ ಒದಗಿಸಬೇಕು. ಬಾಲನ್ಯಾಯ ಕಾಯ್ದೆಯಡಿ ಬಾಲನ್ಯಾಯ ಮಂಡಳಿ, ಮಕ್ಕಳ ಕಲ್ಯಾಣ ಸಮಿತಿ, ಮಕ್ಕಳ ವಿಶೇಷ ಪೊಲೀಸ್ ಘಟಕ ಹಾಗೂ ಜಿಲ್ಲಾ ಮಕ್ಕಳ ರಕ್ಷಣಾ ಘಟಕಗಳು ಮುಖ್ಯವಾಗಿ 4 ಸ್ತಂಭವಾಗಿ ಕೆಲಸ ನಿರ್ವಹಿಸುತ್ತಿವೆ. ಪ್ರತಿಯೊಂದು ವಿಭಾಗಗಳು ಮಕ್ಕಳ ಹಕ್ಕುಗಳ ರಕ್ಷಣೆಯಲ್ಲಿ ಕೆಲಸ ಮಾಡುತ್ತಿವೆ. ಸಮಾಜ ಕಲ್ಯಾಣ ಇಲಾಖೆ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಹಾಗೂ ಶಾಲೆಗಳಲ್ಲಿ ಯಾವುದೇ ಮಗು ಸಂಕಷ್ಟಕ್ಕೀಡಾದಲ್ಲಿ ತಕ್ಷಣ ಜಿಲ್ಲಾ ಮಕ್ಕಳ ರಕ್ಷಣಾ ಘಟಕಕ್ಕೆ ಅಥವಾ ಮಕ್ಕಳ ಸಹಾಯವಾಣಿ 1098ಗೆ ಕರೆ ಮಾಡುವಂತೆ ತಿಳಿಸಿದರು.

ಅಧ್ಯಕ್ಷತೆ ವಹಿಸಿದ್ದ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ನೀತಾ ವಾಡಕರ ಮಾತನಾಡಿ, ವಸತಿ ನಿಲಯದ ಪಾಲಕರು ಹಾಗೂ ಶಾಲಾ ಶಿಕ್ಷಕರು ಮಕ್ಕಳಿಗೆ ತಂದೆ- ತಾಯಿ ಇದ್ದಂತೆ. ನಿಲಯಗಳಲ್ಲಿ ವಾಸಿಸುತ್ತಿರುವ ಪ್ರತಿಯೊಂದು ಮಗುವಿನ ಹಕ್ಕನ್ನು ರಕ್ಷಿಸುವುದು ನಮ್ಮೆಲ್ಲರ ಕರ್ತವ್ಯ. ಒಂದು ವಾರಕ್ಕಿಂತ ಹೆಚ್ಚು ದಿನ ಮಕ್ಕಳು ಶಾಲೆಗೆ ಗೈರಾದಲ್ಲಿ ಅಂತಹ ಮಗುವಿನ ಮನೆಗೆ ಭೇಟಿ ಮಾಡಿ ವಾಸ್ತವಿಕ ಸ್ಥಿತಿಯನ್ನು ನಾವು ಅರಿತುಕೊಳ್ಳಬೇಕು ಎಂದರು.

ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿದ್ದ ಹುಬ್ಬಳ್ಳಿಯ ಎಂ.ಎಂ. ಜೋಶಿ ಕಣ್ಣಿನ ಆಸ್ಪತ್ರೆಯ ಡಾ. ದೀಪ್ತಿ ಜೋಶಿ, ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಎಲ್‌ಪಿಒ ಆಗಿರುವ ನ್ಯಾಯವಾದಿ ನೂರ್‌ಜಹಾನ್‌ ಕಿಲ್ಲೇದಾರ, ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಅಸಾಂಸ್ಥಿಕ ರಕ್ಷಣಾಧಿಕಾರಿ ಪ್ರಕಾಶ ಕೊಡ್ಲಿವಾಡ, ಮಕ್ಕಳ ಕನೂನುಗಳ ಕುರಿತು ವಿಶೇಷ ಉಪನ್ಯಾಸ ನೀಡಿದರು.

ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಸಾಂಸ್ಥಿಕ ರಕ್ಷಣಾಧಿಕಾರಿ ಅಶ್ವಿನಿ ಉಳ್ಳಿಗೇರಿ ಸ್ವಾಗತಿಸಿದರು. ಶ್ವೇತಾ ಕಿಲ್ಲೇದಾರ ವಂದಿಸಿದರು. ಮಹಮ್ಮದ ಅಲಿ ತಹಶೀಲ್ದಾರ ನಿರೂಪಿಸಿದರು. ಕಾರ್ಯಕ್ರಮದಲ್ಲಿ ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಸಿಬ್ಬಂದಿ, ಜಿಲ್ಲೆಯ ವಿವಿಧ ವಸತಿ ನಿಲಯಗಳ ನಿಲಯ ಪಾಲಕರು, ಬಿಆರ್‌ಪಿ ಮತ್ತು ಸಿಆರ್‌ಪಿ ಅಧಿಕಾರಿಗಳು ಭಾಗವಹಿಸಿದ್ದರು.