ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಲೈಂಗಿಕ ಕಿರುಕುಳ ನೀಡುವಂತಹ ವರ್ತನೆಗಳು, ಅಸಭ್ಯ ಮಾತುಗಳು, ದ್ವಂದ್ವಾರ್ಥದ ಸಂಭಾಷಣೆ, ಸಾಮಾಜಿಕ ಜಾಲತಾಣಗಳಲ್ಲಿ ಅನಗತ್ಯ ಸಂದೇಶ ಕಳುಹಿಸುವುದು ಸೇರಿದಂತೆ ವಿವಿಧ ರೀತಿಯ ಕಿರುಕುಳಗಳನ್ನು ತಡೆಗಟ್ಟಲು ಜಾಗೃತಿ ಮೂಡಿಸುವುದು ಅಗತ್ಯ ಎಂದು ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶೆ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷೆ ಜಿ.ಪ್ರಭಾವತಿ ತಿಳಿಸಿದರು.

ಕನ್ನಡಪ್ರಭ ವಾರ್ತೆ ಚಾಮರಾಜನಗರ

ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಲೈಂಗಿಕ ಕಿರುಕುಳ ನೀಡುವಂತಹ ವರ್ತನೆಗಳು, ಅಸಭ್ಯ ಮಾತುಗಳು, ದ್ವಂದ್ವಾರ್ಥದ ಸಂಭಾಷಣೆ, ಸಾಮಾಜಿಕ ಜಾಲತಾಣಗಳಲ್ಲಿ ಅನಗತ್ಯ ಸಂದೇಶ ಕಳುಹಿಸುವುದು ಸೇರಿದಂತೆ ವಿವಿಧ ರೀತಿಯ ಕಿರುಕುಳಗಳನ್ನು ತಡೆಗಟ್ಟಲು ಜಾಗೃತಿ ಮೂಡಿಸುವುದು ಅಗತ್ಯ ಎಂದು ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶೆ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷೆ ಜಿ.ಪ್ರಭಾವತಿ ತಿಳಿಸಿದರು.

ನಗರದ ಜಿಲ್ಲಾ ನ್ಯಾಯಾಲಯದ ಆವರಣದಲ್ಲಿರುವ ಎಡಿಆರ್ ಕಟ್ಟಡದಲ್ಲಿ ರಾಜ್ಯ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ನ್ಯಾಯಾಂಗ ಇಲಾಖೆ ಹಾಗೂ ಜಿಲ್ಲಾ ವಕೀಲರ ಸಂಘದ ಸಹಯೋಗದಲ್ಲಿ ಆಯೋಜಿಸಲಾಗಿದ್ದ ಅಂತಾರಾಷ್ಟ್ರೀಯ ಮಹಿಳೆಯರ ಮೇಲಿನ ದೌರ್ಜನ್ಯ ನಿರ್ಮೂಲನೆ ದಿನ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಕೆಲಸದ ಸ್ಥಳಗಳಲ್ಲಿ ಮಹಿಳೆಯರು ಎದುರಿಸುವ ಲೈಂಗಿಕ ಕಿರುಕುಳ ಹಲವು ಸ್ವರೂಪಗಳಲ್ಲಿ ಕಂಡುಬರುತ್ತದೆ. ಒತ್ತಾಯಪೂರ್ವಕವಾಗಿ ವೈಯಕ್ತಿಕವಾಗಿ ಮಾತನಾಡಲು ಪ್ರಯತ್ನಿಸುವುದು, ಸಾಮಾಜಿಕ ಜಾಲತಾಣಗಳ ಮೂಲಕ ಅನಗತ್ಯ ಸಂದೇಶಗಳು, ಫೋಟೋ, ವಿಡಿಯೋ ಹಾಗೂ ರೀಲ್ಸ್ ಕಳುಹಿಸುವುದು ಕೂಡ ಕಿರುಕುಳದ ಸ್ವರೂಪಗಳಾಗಿವೆ ಎಂದು ವಿವರಿಸಿದರು.

ಕೆಲಸದ ಸ್ಥಳದಲ್ಲಿ ಅಸಭ್ಯ ಪೋಸ್ಟರ್‌ಗಳನ್ನು ಹಾಕುವುದು, ಮಹಿಳೆಯರಿಗೆ ಕಿರಿಕಿರಿ ಉಂಟುಮಾಡುವ ವಾತಾವರಣ ನಿರ್ಮಿಸುವುದು, ಮಹಿಳೆಯರ ಬಗ್ಗೆ ಸುಳ್ಳು ವದಂತಿಗಳನ್ನು ಹರಡುವುದು ಕೂಡ ಮಾನಸಿಕ ಹಿಂಸೆಗೆ ಕಾರಣವಾಗುತ್ತದೆ. ಇಂತಹ ವರ್ತನೆಗಳಿಂದ ಮಹಿಳೆಯರು ನೆಮ್ಮದಿಯಿಂದ ಕೆಲಸ ಮಾಡಲು ಸಾಧ್ಯವಾಗುವುದಿಲ್ಲ. ಸ್ವಚ್ಛ ಮನಸ್ಸು ಹಾಗೂ ಉತ್ತಮ ಆಲೋಚನೆಗಳನ್ನು ಬೆಳೆಸಿಕೊಂಡು ಪರಸ್ಪರ ಗೌರವದಿಂದ ನಡೆದುಕೊಳ್ಳಬೇಕು ಎಂದರು.

ಹಿರಿಯ ಸಿವಿಲ್ ನ್ಯಾಯಾಧೀಶ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಈಶ್ವರ್ ಅವರು ಮಾತನಾಡಿ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಲೈಂಗಿಕ ಕಿರುಕುಳ ತಡೆಗಟ್ಟುವ, ದೂರುಗಳನ್ನು ಪರಿಹರಿಸುವ ಹಾಗೂ ಮಹಿಳೆಯರಿಗೆ ಸುರಕ್ಷಿತ ವಾತಾವರಣ ಕಲ್ಪಿಸುವ ಉದ್ದೇಶದಿಂದ ೨೦೧೩ರ ಡಿಸೆಂಬರ್ ೯ರಂದು ಕೆಲಸದ ಸ್ಥಳದಲ್ಲಿ ಮಹಿಳೆಯರಿಗೆ ಲೈಂಗಿಕ ಕಿರುಕುಳ ಪ್ರತಿಬಂಧ, ನಿವಾರಣೆ ಮತ್ತು ಪರಿಹಾರ ಅಧಿನಿಯಮ ಜಾರಿಗೆ ಬಂದಿದೆ. ಈ ಕಾಯ್ದೆ ದೇಶಾದ್ಯಂತ ಅನ್ವಯಿಸುತ್ತದೆ ಎಂದರು.

ಮಹಿಳೆಯರು ಯಾವುದೇ ವೃತ್ತಿ, ಉದ್ಯೋಗ, ವ್ಯಾಪಾರ ಅಥವಾ ವ್ಯವಹಾರದಲ್ಲಿ ಸುರಕ್ಷಿತವಾಗಿ ತೊಡಗಿಸಿಕೊಳ್ಳಲು ಲೈಂಗಿಕ ಕಿರುಕುಳ ಮುಕ್ತ ವಾತಾವರಣ ಕಲ್ಪಿಸುವುದು ಕಾಯ್ದೆಯ ಮುಖ್ಯ ಉದ್ದೇಶವಾಗಿದೆ. ಪ್ರಕರಣಗಳನ್ನು ತಡೆಗಟ್ಟಲು ಪ್ರತಿಯೊಂದು ಕೆಲಸದ ಸ್ಥಳದಲ್ಲೂ ಆಂತರಿಕ ದೂರು ಸಮಿತಿ ರಚನೆ ಕಡ್ಡಾಯವಾಗಿದ್ದು, ಉದ್ಯೋಗದಾತರು ಸಮಿತಿ ರಚಿಸಿ ದೂರುಗಳ ಪರಿಹಾರಕ್ಕೆ ಕ್ರಮವಹಿಸಬೇಕು ಎಂದು ತಿಳಿಸಿದರು.

ಅಪರ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶ ಎಸ್.ಜೆ.ಕೃಷ್ಣ, ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ಪುಟ್ಟಸ್ವಾಮಿ ರಾಮಸಮುದ್ರ, ಒಂದನೇ ಅಪರ ಹಿರಿಯ ಸಿವಿಲ್ ನ್ಯಾಯಾಧೀಶರಾದ ಆರ್. ಸುನೀಲ್, ಪ್ರಧಾನ ಸಿವಿಲ್ ನ್ಯಾಯಾಧೀಶೆ ಸ್ಮಿತಾ ನಾಗಲಾಪುರ್, ಜಿಲ್ಲಾ ವಕೀಲರ ಸಂಘದ ಪ್ರಧಾನ ಕಾರ್ಯದರ್ಶಿ ಎಂ.ಶಿವರಾಮು, ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯದ ಮುಖ್ಯ ಆಡಳಿತಾಧಿಕಾರಿ ಜೆ.ಪಿ.ಸುರೇಶ್, ಮಹಿಳಾ ಸ್ನೇಹ ನ್ಯಾಯಾಲಯದ ವಿಶೇಷ ಸರ್ಕಾರಿ ಅಭಿಯೋಜಕ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಆಂತರಿಕ ದೂರು ಸಮಿತಿ ಸದಸ್ಯ ಕೆ.ಯೋಗೇಶ್, ಹಿರಿಯ ವಕೀಲೆ, ಸಮಿತಿ ಸದಸ್ಯೆ ರೂಪಶ್ರೀ, ಮಕ್ಕಳ ಕಲ್ಯಾಣ ಸಮಿತಿ ಅಧ್ಯಕ್ಷೆ, ಸಮಿತಿ ಸದಸ್ಯೆ ಲತಾ ಇತರರು ಹಾಜರಿದ್ದರು.