ಸಾರಾಂಶ
ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ ತಡೆ, ಬಾಲ್ಯವಿವಾಹ ನಿಷೇಧ ಕಾಯ್ದೆ ಕುರಿತು ಅರಿವು ಕಾರ್ಯಕ್ರಮ
ಕನ್ನಡಪ್ರಭ ವಾರ್ತೆ ಚಿಕ್ಕಮಗಳೂರುದೇಶದಲ್ಲಿ ಕಟ್ಟು ನಿಟ್ಟಿನ ಕಾಯ್ದೆ ಕಾನೂನುಗಳನ್ನು ಜಾರಿ ಮಾಡಿದಲ್ಲಿ ಮಹಿಳೆಯರ ಮೇಲಿನ ದೌರ್ಜನ್ಯವನ್ನು ತಡೆಗಟ್ಟಬಹುದು ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಯಾಗಿರುವ ಹಿರಿಯ ಸಿವಿಲ್ ನ್ಯಾಯಾಧೀಶರಾದ ವಿ. ಹನುಮಂತಪ್ಪ ಹೇಳಿದರು.ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಮಕ್ಕಳ ಸಹಾಯವಾಣಿ-1098, ಡಿಎಸಿಜಿ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜು ಹಾಗೂ ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ವತಿಯಿಂದ ಮಂಗಳವಾರ ನಗರದ ಡಿಎಸಿಜಿ ಸರ್ಕಾರಿ ಪಾಲಿಟ್ನೆಕಿಕ್ ಕಾಲೇಜು ಸಭಾಂಗಣದಲ್ಲಿ ಆಯೋಜಿಸಿದ್ದ ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ ತಡೆ ಮತ್ತು ಬಾಲ್ಯವಿವಾಹ ನಿಷೇಧ ಕಾಯ್ದೆಯ ಕುರಿತು ಅರಿವು ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ದೇಶದ ಎಲ್ಲಾ ಕಾಯ್ದೆ ಕಾನೂನುಗಳ ಮಾತೃ ಸ್ಥಾ ನ ಸಂವಿಧಾನವಾಗಿದೆ. ಭಾರತದ ಸಂವಿಧಾನದಲ್ಲಿ ಪ್ರತಿಯೊಬ್ಬ ನಾಗರೀಕರಿಗೆ ಮೂಲಭೂತ ಹಕ್ಕು ಹಾಗೂ ಕರ್ತವ್ಯಗಳ ಬಗ್ಗೆ ಉಲ್ಲೇಖವಿದೆ. ಸಮಾಜದಲ್ಲಿ ಮಹಿಳೆಯರನ್ನು ಭಿನ್ನವಾಗಿ ಕಾಣುವ ವಿಪರ್ಯಾಸ ಇಂದಿಗೂ ಕಾಣಬಹುದು. ಹೆಣ್ಣು ಗಂಡು ಎಂಬ ಭೇದಭಾವವಿಲ್ಲದೆ ಎಲ್ಲರನ್ನು ಸಮಾನವಾಗಿ ಕಾಣಬೇಕು ಎಂದರು.ಮಹಿಳೆಯರು ಪುರುಷರಿಗಿಂತ ಯಾವುದರಲ್ಲೂ ಕಡಿಮೆ ಇಲ್ಲದಂತೆ ಧೈರ್ಯದಿಂದ ಸ್ಪರ್ಧಿಸುತ್ತಿದ್ದಾರೆ. ಆದಾಗ್ಯೂ ಮಹಿಳೆಯರ ಮೇಲಿನ ದೌರ್ಜನ್ಯ ಪ್ರಕರಣಗಳು ಹೆಚ್ಚುತ್ತಲೆ ಇವೆ. ಇವುಗಳನ್ನು ತಡೆಗಟ್ಟಲು ಕಟ್ಟು ನಿಟ್ಟಾದ ಕಾನೂನುಗಳ ಜಾರಿಗೆ ತರುವುದು ಅವಶ್ಯಕ. ಮಹಿಳೆಯ ರಕ್ಷಣೆ ಮಾಡುವುದು ಪ್ರತಿಯೊಬ್ಬರ ಜವಾಬ್ದಾರಿ, ವರದಕ್ಷಿಣೆ, ಭ್ರೂಣ ಹತ್ಯೆ, ಬಾಲ್ಯ ವಿವಾಹದಂತಹ ಸಾಮಾಜಿಕ ಪಿಡುಗುಗಳನ್ನು ಸಮಾಜದಿಂದ ಕಿತ್ತೊಗೆದು ಹೆಣ್ಣಿನ ರಕ್ಷಣೆಗೆ ಮುಂದಾಗಿ ಎಂದು ತಿಳಿಸಿದರು.
ಜಿಲ್ಲಾ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕ ಹಾಗೂ ಮಕ್ಕಳ ರಕ್ಷಣಾಧಿಕಾರಿ ಸಿ. ಲೋಕೇಶ್ವರಪ್ಪ ಮಾತನಾಡಿ, ತಾಯಿಯ ಗರ್ಭದಲ್ಲಿರುವಾಗಲೇ ಪ್ರತಿ ಮಗುವಿನ ಹಕ್ಕು ಮತ್ತು ರಕ್ಷಣೆ ಪ್ರಾರಂಭವಾಗುತ್ತದೆ. ಮಕ್ಕಳ ರಕ್ಷಣೆಗಾಗಿ ಸರ್ಕಾರವು ಅನೇಕ ಕಾಯ್ದೆ ಕಾನೂನುಗಳೊಂದಿಗೆ ಅವರ ಅಭಿವೃದ್ಧಿಗಾಗಿ ವಿವಿಧ ಯೋಜನೆಗಳಾದ ಬೇಟಿ ಬಚಾವೋ, ಬೇಟಿ ಪಡವೋ, ಸುಕನ್ಯ ಸಮೃದ್ಧಿ ಯೋಜನೆ, ನಾರಿ ಶಕ್ತಿ ಪುರಸ್ಕಾರ, ಸ್ವಿಪ್ ಹಾಗೂ ಮಹಿಳಾ ಶಕ್ತಿ ಕೇಂದ್ರಗಳಂತೆ ಹಲವಾರು ಯೋಜನೆಗಳನ್ನು ಜಾರಿಗೆ ತಂದಿದೆ. ದೌರ್ಜನ್ಯಕ್ಕೆ ಒಳಗಾದ ಮಹಿಳೆಯರಿಗೆ ಒಂದೇ ಸೂರಿನಡಿ ಸಮಗ್ರ ಸೌಲಭ್ಯ ನೀಡಲು ಸಖಿ ಒನ್ ಸ್ಟಾಪ್ ಸೆಂಟರ್ ಯೋಜನೆ ಜಾರಿ ಮಾಡಿದೆ. ಪ್ರತಿಯೊಬ್ಬರು ಇವುಗಳ ಬಗ್ಗೆ ಅರಿತು ವಿಚಾರವಂತರಾಗಿ ಸಮಾಜದಲ್ಲಿ ಮಹಿಳೆಯರ ಸ್ಥಾನಮಾನವನ್ನು ಮತ್ತಷ್ಟು ಉತ್ತುಂಗಕ್ಕೇರಿಸಬೇಕೆಂದು ತಿಳಿಸಿದರು.ಶಿಶು ಅಭಿವೃದ್ಧಿ ಅಧಿಕಾರಿ ಸಿ.ರಂಗನಾಥ್ ಅವರು ಪೋಕ್ಸೋ ಹಾಗೂ ಇನ್ನಿತರೆ ಕಾಯ್ದೆಗಳ ಕುರಿತು ಉಪನ್ಯಾಸ ನೀಡಿದರು. ಪಾಲಿಟೆಕ್ನಿಕ್ ಕಾಲೇಜಿನ ಎಲೆಕ್ಟ್ರಿಕಲ್ ಆ್ಯಂಡ್ ಎಲೆಕ್ಟ್ರಾನಿಕ್ ಇಂಜಿನಿಯರಿಂಗ್ ವಿಭಾಗಾಧಿಕಾರಿ ಎಚ್.ಆರ್. ಶ್ರೀಧರ್ ಅಧ್ಯಕ್ಷತೆ ವಹಿಸಿದ್ದರು.
ಕಾರ್ಯಕ್ರಮದಲ್ಲಿ ಡಿಎಸಿಜಿ ಕಾಲೇಜಿನ ಉಪನ್ಯಾಸಕರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಹಾಜರಿದ್ದರು.