ರಾಜ್ಯದ ಜನರಿಗೆ ಬೆಲೆ ಏರಿಕೆ ಬರೆ: ಇಂದ್ರೇಶ್

| Published : Jun 17 2024, 01:35 AM IST

ರಾಜ್ಯದ ಜನರಿಗೆ ಬೆಲೆ ಏರಿಕೆ ಬರೆ: ಇಂದ್ರೇಶ್
Share this Article
  • FB
  • TW
  • Linkdin
  • Email

ಸಾರಾಂಶ

ರಾಜ್ಯ ಸರ್ಕಾರ ಪೆಟ್ರೋಲ್-ಡೀಸೆಲ್ ಬೆಲೆ ಏರಿಕೆ ಮಾಡುವುದರೊಂದಿಗೆ ರಾಜ್ಯದ ಜನರಿಗೆ ಬೆಲೆ ಏರಿಕೆ ಬರೆ ಎಳೆದಿದೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಎನ್. ಇಂದ್ರೇಶ್ ಆರೋಪಿಸಿದ್ದಾರೆ.

ಕನ್ನಡಪ್ರಭ ವಾರ್ತೆ ಮಂಡ್ಯ

ರಾಜ್ಯ ಸರ್ಕಾರ ಪೆಟ್ರೋಲ್-ಡೀಸೆಲ್ ಬೆಲೆ ಏರಿಕೆ ಮಾಡುವುದರೊಂದಿಗೆ ರಾಜ್ಯದ ಜನರಿಗೆ ಬೆಲೆ ಏರಿಕೆ ಬರೆ ಎಳೆದಿದೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಎನ್. ಇಂದ್ರೇಶ್ ಆರೋಪಿಸಿದ್ದಾರೆ.ರಾಜ್ಯದ ಹಣಕಾಸು ಪರಿಸ್ಥಿತಿ ಹದಗೆಟ್ಟಿರುವುದಕ್ಕೆ ಪೆಟ್ರೋಲ್-ಡೀಸೆಲ್ ಬೆಲೆ ಏರಿಕೆಯೇ ಸಾಕ್ಷಿಯಾಗಿದೆ. ಗ್ಯಾರಂಟಿ ಯೋಜನೆಗಳಿಗೆ ಹಣ ಹೊಂದಿಸುವುದಕ್ಕಾಗಿ ತೈಲ ಬೆಲೆಗಳನ್ನು ಏರಿಕೆ ಮಾಡಿರುವುದಾಗಿ ಪತ್ರಿಕಾ ಹೇಳಿಕೆಯಲ್ಲಿ ದೂರಿದ್ದಾರೆ.ಲೋಕಸಭೆ ಚುನಾವಣೆ ಸೋಲಿನ ಹತಾಶೆ, ಹದಗೆಟ್ಟಿರುವ ಆರ್ಥಿಕ ಪರಿಸ್ಥಿತಿಯಿಂದ ಆಡಳಿತವನ್ನು ಸಮರ್ಥವಾಗಿ ನಿಭಾಯಿಸಲಾಗುತ್ತಿಲ್ಲ. ರಾಜ್ಯದ ಆರ್ಥಿಕ ಪರಿಸ್ಥಿತಿ ಸದೃಢವಾಗಿದೆ ಎಂದು ಭಂಡತನದಿಂದ ಮಾತನಾಡುವ ರಾಜ್ಯಸರ್ಕಾರ, ಅಭಿವೃದ್ಧಿ ಯೋಜನೆಗಳಿಗೆ ಹಣ ನೀಡಲಾಗದಂತಹ ಕಠಿಣ ಪರಿಸ್ಥಿತಿಯನ್ನು ಎದುರಿಸುತ್ತಿದೆ ಎಂದು ದೂರಿದ್ದಾರೆ.ಗ್ಯಾರಂಟಿ ಯೋಜನೆಗಳಿಂದ ೧೮-೨೦ ಸಂಸತ್ ಸ್ಥಾನಗಳನ್ನು ಗೆಲ್ಲುವ ಭ್ರಮೆಯಲ್ಲಿದ್ದ ಕಾಂಗ್ರೆಸ್‌ಗೆ ಈಗ ನಿರಾಸೆಯಾಗಿದೆ. ದೇಶ ಮತ್ತು ರಾಜ್ಯದಲ್ಲಿ ಕಾಂಗ್ರೆಸ್‌ಗೆ ಹಿನ್ನಡೆಯಾಗಿದ್ದು, ಆ ಸಿಟ್ಟನ್ನು ಈಗ ಜನರ ಮೇಲೆ ತೋರಿಸುತ್ತಿದ್ದಾರೆ. ಹಿಂದೆ ಸ್ಟ್ಯಾಂಪ್ ಡ್ಯೂಟಿ ಹೆಚ್ಚಿಸಿದ್ದರು. ವಿದ್ಯುತ್ ದರವನ್ನು ಏರಿಸಲಾಗಿದೆ. ಇವರಿಂದ ಉತ್ತಮ ಆಡಳಿತ ನಿರೀಕ್ಷಿಸಲಾಗುವುದಿಲ್ಲ ಎಂದು ಹೇಳಿದ್ದಾರೆ.ಕಾಂಗ್ರೆಸ್ ಪಕ್ಷ ಹತಾಶ ಸ್ಥಿತಿಯಲ್ಲಿದೆ. ಲೋಕಸಭಾ ಚುನಾವಣೆಯಲ್ಲಿ ಆಗಿರುವ ಹಿನ್ನಡೆಯ ಪರಿಣಾಮ ಬೇರೆ ಬೇರೆ ಜಿಲ್ಲೆಗಳಲ್ಲಿ ನಮ್ಮ ಕಾರ್ಯಕರ್ತರ ಮೇಲೆ ಹಲ್ಲೆ, ದಬ್ಬಾಳಿಕೆ, ವಿನಾಕಾರಣ ಎಫ್‌ಐಆರ್, ಪೊಲೀಸರಿಂದ ಕಿರುಕುಳ ದಿನೇ ದಿನೇ ಹೆಚ್ಚಾಗುತ್ತಿದೆ. ಕಾರ್ಯಕರ್ತರಿಗೆ ಧೈರ್ಯ ತುಂಬುವುದು, ಕಾನೂನು ಪ್ರಕೋಷ್ಠವನ್ನು ಸದೃಢಗೊಳಿಸಲು ವಕೀಲರ ಸಭೆ ನಡೆಸಲಾಗಿದೆ. ಯಾರೂ ಧೈರ್ಯಗೆಡದಂತೆ ಸಲಹೆ ನೀಡಿದ್ದಾರೆ.ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಾಗಿರುವ ಭ್ರಷ್ಟಾಚಾರ ಪ್ರಕರಣವನ್ನು ತಾರ್ಕಿಕ ಅಂತ್ಯಕ್ಕೆ ತೆಗೆದುಕೊಂಡು ಹೋಗಲಾಗುವುದು. ಸರ್ಕಾರ ಪ್ರಕರಣವನ್ನು ಮುಚ್ಚಿಹಾಕುವುದಕ್ಕೆ ಯತ್ನಿಸುತ್ತಿದೆ. ಪರಿಶಿಷ್ಟ ಪಂಗಡಕ್ಕೆ ಮೀಸಲಿಟ್ಟ ಹಣವನ್ನು ದೋಚಲಾಗಿದೆ. ಭ್ರಷ್ಟ ಕಾಂಗ್ರೆಸ್‌ನಿಂದ ಆಗಿರುವ ಅನ್ಯಾಯವನ್ನು ಹೋರಾಟದ ಮೂಲಕ ಸರಿಪಡಿಸಿ ಸಂಫೂರ್ಣ ಹಣ ಹೊರಬರುವಂತೆ ಮಾಡಬೇಕು. ಹಣಕಾಸು ಇಲಾಖೆಗೆ ಮಾಹಿತಿ ಇಲ್ಲದೆ ಇಷ್ಟೊಂದು ದೊಡ್ಡ ಹಗರಣ ನಡೆಯಲು ಸಾಧ್ಯವಿಲ್ಲ ಎಂದಿದ್ದಾರೆ.ಈ ಹಗರಣದ ವಿರುದ್ಧ ಹೋರಾಟ ಹಮ್ಮಿಕೊಳ್ಳುವ ಸಲುವಾಗಿ ಜೂ.೧೮ರಂದು ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಸಭೆ ನಡೆಸಲಾಗುವುದು. ಜೂ.೨೮ರಂದು ಜಿಲ್ಲಾಧಿಕಾರಿ ಕಚೇರಿಗೆ ಮುತ್ತಿಗೆ ಹಾಕಲಾಗುವುದು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.