ಪ್ರಾಥಮಿಕ ಶಿಕ್ಷಣವೇ ಬದುಕಿಗೆ ಬುನಾದಿ

| Published : Sep 07 2024, 01:33 AM IST

ಸಾರಾಂಶ

ನಮ್ಮ ಶೈಕ್ಷಣಿಕ ಜೀವನದಲ್ಲಿ ಪ್ರಾಥಮಿಕ ಶಾಲಾ ಶಿಕ್ಷಕರನ್ನು ನಾವೆಂದಿಗೂ ಮರೆಯಲು ಸಾಧ್ಯವಿಲ್ಲ. ಬದುಕಿಗೆ ಪ್ರಾಥಮಿಕ ಶಿಕ್ಷಣವೇ ಬುನಾದಿ ಎಂದು ಜಿಲ್ಲಾ ಉಸ್ತುವಾರಿ ಸಚಿವ ಆರ್.ಬಿ.ತಿಮ್ಮಾಪೂರ ಹೇಳಿದರು.

ಕನ್ನಡಪ್ರಭ ವಾರ್ತೆ ಮುಧೋಳ

ನಮ್ಮ ಶೈಕ್ಷಣಿಕ ಜೀವನದಲ್ಲಿ ಪ್ರಾಥಮಿಕ ಶಾಲಾ ಶಿಕ್ಷಕರನ್ನು ನಾವೆಂದಿಗೂ ಮರೆಯಲು ಸಾಧ್ಯವಿಲ್ಲ. ಬದುಕಿಗೆ ಪ್ರಾಥಮಿಕ ಶಿಕ್ಷಣವೇ ಬುನಾದಿ ಎಂದು ಜಿಲ್ಲಾ ಉಸ್ತುವಾರಿ ಸಚಿವ ಆರ್.ಬಿ.ತಿಮ್ಮಾಪೂರ ಹೇಳಿದರು.

ಜಿಪಂ, ಶಾಲಾ ಶಿಕ್ಷಣ ಇಲಾಖೆ, ತಾಲೂಕಾಡಳಿತ, ತಾಪಂ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯ ಹಾಗೂ ಶಿಕ್ಷಕರ ದಿನೋತ್ಸವ ಸಮಿತಿ ಇವುಗಳ ಸಂಯುಕ್ತಾಶ್ರಯದಲ್ಲಿ ಶುಕ್ರವಾರ ಸ್ಥಳೀಯ ಹೇಮರಡ್ಡಿ ಕಲ್ಯಾಣ ಮಂಟಪದಲ್ಲಿ ಹಮ್ಮಿಕೊಂಡಿದ್ದ ಸರ್ವಪಲ್ಲಿ ಡಾ. ರಾಧಾಕೃಷ್ಣನ್ ಅವರ ಜನ್ಮದಿನದ ಪ್ರಯುಕ್ತ ಮುಧೋಳ ತಾಲೂಕು ಮಟ್ಟದ ಶಿಕ್ಷಕರ ದಿನೋತ್ಸವ-2024, ನಿವೃತ್ತ ಶಿಕ್ಷಕರ ಸನ್ಮಾನ ಹಾಗೂ ಶಿಕ್ಷಕರ ಮಕ್ಕಳ ಪ್ರತಿಭಾ ಪುರಸ್ಕಾರ ಸಮಾರಂಭ ಉದ್ಘಾಟಿಸಿ ಮಾತನಾಡಿದ ಅವರು, ನಮ್ಮ ಬದುಕಿಗೆ ದಾರಿ ತೋರಿಸಿರುವ ಪ್ರಾಥಮಿಕ ಶಾಲಾ ಶಿಕ್ಷಕರನ್ನು ನಾವು ಅವರನ್ನು ಪೂಜ್ಯನೀಯ ಭಾವನೆಯಿಂದ ನೋಡಬೇಕು ಮತ್ತು ಗೌರವಿಸಬೇಕೆಂದು ಹೇಳಿದ ಅವರು ತಾವು ಕಲಿತಿರುವ ಉತ್ತೂರ ಗ್ರಾಮದ ಪ್ರಾಥಮಿಕ ಶಾಲಾ ಅಭಿವೃದ್ಧಿಗೆ ಸಿ.ಎಸ್.ಆರ್ ಫಂಡ್‌ದಿಂದ ವಿಶೇಷ ಅನುದಾನ ನೀಡಿದ್ದೇನೆ. ಅದರಂತೆ ಉಳಿದ ಶಾಲೆಗಳ ಅಭಿವೃದ್ಧಿಗೆ ಸರ್ಕಾರದಿಂದ ಅನುದಾನ ಬಿಡುಗಡೆ ಮಾಡಿಸಿದ್ದೇನೆ ಎಂದರು.

ವಿ.ಪ ಸದಸ್ಯ ಹಣಮಂತ ನಿರಾಣಿ ಮುಖ್ಯ ಅತಿಥಿ ಸ್ಥಾನವಹಿಸಿ ಮಾತನಾಡಿ, ಶಿಕ್ಷಕ ವೃತ್ತಿ ಎಲ್ಲ ವೃತ್ತಿಗಳಿಗಿಂತಲೂ ಶ್ರೇಷ್ಠವಾದದು. ಶಿಕ್ಷಣದ ಜೊತೆ ಜೊತೆಗೆ ಸಂಸ್ಕಾರ ಮತ್ತು ಸಂಸ್ಕೃತಿಯನ್ನು ಕಲಿಸಬೇಕು. ದೇಶ ನಿರ್ಮಾಣ ಮಾಡುವಲ್ಲಿ ಶಿಕ್ಷಕರ ಪಾತ್ರ ದೊಡ್ಡದು, ಸರ್ಕಾರ ಬದಲಾದಂತೆ ಶಿಕ್ಷಣದ ಪದ್ಧತಿ ಬದಲಾಗಬಾರದು. ಕೌಶಲ ಆಧಾರಿತ ಶಿಕ್ಷಣ ಜಾರಿಗೊಳ್ಳಬೇಕೆಂದು ಹೇಳಿದರು.

ಬೀಳಗಿ-ಹಲಗಲಿಯ ಶ್ರೀಕಲ್ಮಠದ ಗುರುಪಾದ ಶಿವಾಚಾರ್ಯ ಮಹಾಸ್ವಾಮೀಜಿ ದಿವ್ಯ ಸಾನ್ನಿಧ್ಯವಹಿಸಿ ಆಶೀರ್ವಚನ ನೀಡಿದರು.

ಹುಬ್ಬಳ್ಳಿ ಸರ್ಕಾರಿ ಸ್ವತಂತ್ರ ಪದವಿ ಪೂರ್ವ ವಿದ್ಯಾಲಯದ ಪ್ರಾಚಾರ್ಯ ಎಫ್. ಬಿ. ಸೊರಟೂರ ವಿಶೇಷ ಉಪನ್ಯಾಸ ನೀಡಿದರು. ಇದೇ ಸಂದರ್ಭದಲ್ಲಿ ನಿವೃತ್ತ ಶಿಕ್ಷಕರನ್ನು ಮತ್ತು ಶಿಕ್ಷಕರ ಪ್ರತಿಭಾವಂತ ಮಕ್ಕಳನ್ನು ಸನ್ಮಾನಿಸಿ, ಗೌರವಿಸಲಾಯಿತು.

ಈ ವೇಳೆ ಮುಧೋಳ ನಗರಸಭೆ ಅಧ್ಯಕ್ಷೆ ಸುನಂದಾ ತೇಲಿ, ಉಪಾಧ್ಯಕ್ಷ ಎಂ.ಎಂ.ಬಾಗವಾನ , ಅಶೋಕ ಕಿವಡಿ, ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಬಿ.ಕೆ. ನಂದನೂರ, ತಹಸೀಲ್ದಾರ್‌ ವ್ಹಿ.ಎಲ್. ಹತ್ತಳ್ಳಿ, ಶಿಕ್ಷಕರ ದಿನೋತ್ಸವ ಸಮಿತಿ ಅಧ್ಯಕ್ಷ ತಾ.ಪಂ ಕಾರ್ಯನಿರ್ವಾಹಕ ಅಧಿಕಾರಿ ಸಂಜೀವ ಹಿಪ್ಪರಗಿ, ಸಮಿತಿ ಕಾರ್ಯದರ್ಶಿ, ಕ್ಷೇತ್ರ ಶಿಕ್ಷಣಾಧಿಕಾರಿ ಸಮೀರ ಮುಲ್ಲಾ, ನಗರಸಭೆ ಪೌರಾಯುಕ್ತ ಗೋಪಾಲ ಕಾಸೆ ಸೇರಿದಂತೆ ಇತರರು ವೇದಿಕೆ ಮೇಲೆ ಉಪಸ್ಥಿತರಿದ್ದರು.