ಸಾರಾಂಶ
ಪ್ರಧಾನಿ ನರೇಂದ್ರ ಮೋದಿ ಅವರು ಶುಕ್ರವಾರ ರಾಜ್ಯಕ್ಕೆ ಆಗಮಿಸಲಿದ್ದು, ನಗರದಲ್ಲಿನ ಬೋಯಿಂಗ್ ಇಂಡಿಯಾ ಎಂಜಿನಿಯರಿಂಗ್ ಮತ್ತು ತಂತ್ರಜ್ಞಾನ ಕೇಂದ್ರ ಉದ್ಘಾಟಿಸಲಿದ್ದಾರೆ.
ಕನ್ನಡಪ್ರಭ ವಾರ್ತೆ ಬೆಂಗಳೂರು ಪ್ರಧಾನಿ ನರೇಂದ್ರ ಮೋದಿ ಅವರು ಶುಕ್ರವಾರ ರಾಜ್ಯಕ್ಕೆ ಆಗಮಿಸಲಿದ್ದು, ನಗರದಲ್ಲಿನ ಬೋಯಿಂಗ್ ಇಂಡಿಯಾ ಎಂಜಿನಿಯರಿಂಗ್ ಮತ್ತು ತಂತ್ರಜ್ಞಾನ ಕೇಂದ್ರ (ಬಿಐಇಟಿಸಿ) ಉದ್ಘಾಟಿಸಲಿದ್ದಾರೆ. ದೇವನಹಳ್ಳಿ ಬಳಿಯ ಭಟ್ಟರಮಾರನಹಳ್ಳಿಯಲ್ಲಿನ ಕೇಂದ್ರಕ್ಕೆ ಹಸಿರು ನಿಶಾನೆ ತೋರಲಿದ್ದಾರೆ. ಭಾರತೀಯ ವಾಯುಯಾನ ಕ್ಷೇತ್ರದಲ್ಲಿ ಎಲ್ಲಾ ವರ್ಗಗಳ ಹಾಗೂ ಭಾರತೀಯ ಮಹಿಳೆಯರ ಹೆಚ್ಚಿನ ಭಾಗವಹಿಸುವಿಕೆಗೆ ಪ್ರೋತ್ಸಾಹ ನೀಡುವ ನಿಟ್ಟಿನಲ್ಲಿ ಇದು ಪ್ರಮುಖವಾಗಿದೆ.ಶುಕ್ರವಾರ ಬೆಳಗ್ಗೆ 9.35ಕ್ಕೆ ದೆಹಲಿಯಿಂದ ಕಲಬುರಗಿ ವಿಮಾನನಿಲ್ದಾಣಕ್ಕೆ ಆಗಮಿಸುವ ಪ್ರಧಾನಿ ನರೇಂದ್ರ ಮೋದಿ, ಹೆಲಿಕಾಪ್ಟರ್ ಮೂಲಕ ಮಹಾರಾಷ್ಟ್ರದ ಸೊಲ್ಲಾಪುರಕ್ಕೆ ಪ್ರಯಾಣ ಬೆಳೆಸಲಿದ್ದಾರೆ. ಅಲ್ಲಿ ಕಾರ್ಯಕ್ರಮವೊಂದರಲ್ಲಿ ಭಾಗಿಯಾಗಿ ಮಧ್ಯಾಹ್ನ 12.10ರ ಸುಮಾರಿಗೆ ಸೊಲ್ಲಾಪುರದಿಂದ ಕಲಬುರಗಿಗೆ ಹಿಂತಿರುಗಲಿದ್ದಾರೆ. ಮಧ್ಯಾಹ್ನ 1 ಗಂಟೆಗೆ ವಿಶೇಷ ವಿಮಾನ ಮೂಲಕ ಬೆಂಗಳೂರಿಗೆ ಪ್ರಯಾಣಿಸಲಿದ್ದಾರೆ.
ಮಧ್ಯಾಹ್ನ 2.10ಕ್ಕೆ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಲಿದ್ದು, ಅಲ್ಲಿಂದ ದೇವನಹಳ್ಳಿ ತಾಲೂಕಿನ ಭಟ್ಟರಮಾರನಹಳ್ಳಿಗೆ ಪ್ರಯಾಣಿಸಲಿದ್ದಾರೆ. ಅಲ್ಲಿ ಬಿಐಇಟಿಸಿ ಉದ್ಘಾಟನೆ ಮಾಡಲಿದ್ದಾರೆ. ಕಾರ್ಯಕ್ರಮ ಮುಗಿಸಿ ಮಧ್ಯಾಹ್ನ 3.45ಕ್ಕೆ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ತಲುಪಲಿದ್ದಾರೆ. ಸಂಜೆ 4 ಗಂಟೆಗೆ ಚೆನ್ನೈಗೆ ಪ್ರಯಾಣಿಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ.