ಗದಗ: ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಉಷ್ಣಾಂಶದ ಹಿನ್ನೆಲೆ ಜನ ಹಾಗೂ ಜಾನುವಾರುಗಳಿಗೆ ಸಮರ್ಪಕ ಕುಡಿಯುವ ನೀರು ಪೂರೈಕೆ ಮಾಡಲು ಪ್ರಥಮ ಆದ್ಯತೆ ನೀಡಬೇಕು ಎಂದು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ, ಜಿಪಂ ಆಡಳಿತಾಧಿಕಾರಿ ಡಾ. ಎಂ.ವಿ. ವೆಂಕಟೇಶ್ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.ನಗರದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಮಂಗಳವಾರ ಜರುಗಿದ ಜಿಲ್ಲಾ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಕಳೆದ ವರ್ಷಕ್ಕಿಂತ ಈ ಬಾರಿ ಜಿಲ್ಲೆಯಲ್ಲಿ ಅಧಿಕ ಉಷ್ಣಾಂಶ ದಾಖಲಾಗುತ್ತಿರುವ ಹಿನ್ನೆಲೆ ನೀರಿನ ಸಮಸ್ಯೆ ಉಂಟಾಗದಂತೆ ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳಬೇಕು. ಎಲ್ಲ ತಾಲೂಕು ಪಂಚಾಯತಿ ಇಒಗಳು ತಮ್ಮ ವ್ಯಾಪ್ತಿಯ ಗ್ರಾಮಗಳಲ್ಲಿ ಸಮರ್ಪಕ ಕುಡಿಯುವ ನೀರು ಪೂರೈಕೆ ಆಗುತ್ತಿರುವ ಬಗ್ಗೆ ಖಚಿತಪಡಿಸಿಕೊಳ್ಳಬೇಕು. ಅನಗತ್ಯ ನೀರಿನ ಪೋಲು ಹಾಗೂ ಅಪವ್ಯಯ ತಡೆಗಟ್ಟಿ ವರ್ಷಪೂರ್ತಿ ಸಮರ್ಪಕ ನೀರು ನಿರ್ವಹಣೆಗೆ ಕ್ರಮ ಕೈಗೊಳ್ಳಬೇಕು ಎಂದರು.ತಿಮ್ಮಾಪುರ ಗ್ರಾಮ ಸೇರಿದಂತೆ ನೀರು ಸರಬರಾಜಿನಲ್ಲಿ ಸಮಸ್ಯೆ ಇರುವ ಪ್ರದೇಶಗಳನ್ನು ಗುರುತಿಸಿ ತಕ್ಷಣ ಕ್ರಮ ಕೈಗೊಳ್ಳಬೇಕು. ಜಿಲ್ಲೆಯಲ್ಲಿ ನೀರಿನ ಸಮಸ್ಯೆ ಎದುರಾಗುವ ಸಾಧ್ಯತೆ ಇರುವ ಗ್ರಾಮಗಳು ಹಾಗೂ ವಾರ್ಡುಗಳನ್ನು ಗುರುತಿಸಿ ಖಾಸಗಿ ಬೋರ್‌ವೆಲ್ ಮೂಲಕ ನೀರು ಪೂರೈಸಲು ಸಿದ್ಧತೆ ಮಾಡಿಕೊಳ್ಳುವಂತೆ ಸೂಚಿಸಿದರು.

ಜಿಲ್ಲೆಯಲ್ಲಿ ಇರುವ ಕೆರೆಗಳಲ್ಲಿ ನೀರು ಸಂಗ್ರಹಕ್ಕೆ ಆದ್ಯತೆ ನೀಡಬೇಕು. ಜಿಲ್ಲೆಯಲ್ಲಿರುವ ಆರ್‌ಒ ಘಟಕಗಳ ಸಮರ್ಪಕ ನಿರ್ವಹಣೆ ಕುರಿತು ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿಗಳು ಪರಿಶೀಲನೆ ನಡೆಸಿ ವರದಿ ಸಲ್ಲಿಸಬೇಕು ಎಂದು ಸೂಚಿಸಿದರು.ಮುಂಗಾರು ಹಂಗಾಮು ಸಮೀಪಿಸುತ್ತಿರುವ ಹಿನ್ನೆಲೆ ರೈತರಿಗೆ ಬಿತ್ತನೆ ಬೀಜ ಹಾಗೂ ರಸಗೊಬ್ಬರ ಪೂರೈಕೆ ಸಮರ್ಪಕವಾಗಿ ನಡೆಯಬೇಕು. ಯಾವುದೇ ಕಾರಣಕ್ಕೂ ಬೀಜ ಹಾಗೂ ಗೊಬ್ಬರ ವಿತರಣೆಯಲ್ಲಿ ಅವ್ಯವಸ್ಥೆ ನಡೆಯಬಾರದು ಎಂದು ಎಚ್ಚರಿಸಿದರು. ಎಸ್‌ಎಸ್‌ಎಲ್‌ಸಿ ಫಲಿತಾಂಶದಲ್ಲಿ ಜಿಲ್ಲೆ 16ನೇ ಸ್ಥಾನದಲ್ಲಿರುವ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ ಅವರು, ಫಲಿತಾಂಶ ಸುಧಾರಣೆಗೆ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದರು. ಶಿಕ್ಷಕರ ಕೊರತೆ ಇರುವ ಕಡೆ ಅತಿಥಿ ಶಿಕ್ಷಕರ ಸೇವೆ ಪಡೆಯುವಂತೆ ಸೂಚಿಸಿದರು. ಪಿಯುಸಿ ಫಲಿತಾಂಶ ಅತ್ಯಂತ ಕಳಪೆ ಮಟ್ಟದಲ್ಲಿದ್ದು, ಅಧಿಕಾರಿಗಳ ಪ್ರಯತ್ನ ಸಮರ್ಪಕವಾಗಿ ಕಾಣುತ್ತಿಲ್ಲ ಎಂದರು.

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕಿ ಪದ್ಮಾವತಿ ಜಿ. ಮಾತನಾಡಿ, ಜಿಲ್ಲೆಯಲ್ಲಿ ಸದ್ಯ 123 ಅಪೌಷ್ಟಿಕ ಮಕ್ಕಳು ಗುರುತಿಸಲ್ಪಟ್ಟಿದ್ದಾರೆ. ಅಪೌಷ್ಟಿಕ ಮಕ್ಕಳ ಆರೋಗ್ಯ ಸುಧಾರಣೆಗೆ ಅಗತ್ಯ ಪೌಷ್ಟಿಕ ಆಹಾರ ಹಾಗೂ ಆರೈಕೆ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ ಎಂದರು.

ನಗರಾಭಿವೃದ್ಧಿ ಯೋಜನಾ ಕೋಶದ ಯೋಜನಾ ನಿರ್ದೇಶಕ ಬಸನಗೌಡ ಕೊಟೂರ ಮಾತನಾಡಿ, ಜಿಲ್ಲೆಯಲ್ಲಿ ಒಟ್ಟು 9 ನಗರ ಸ್ಥಳೀಯ ಸಂಸ್ಥೆಗಳಿದ್ದು, ಗದಗ- ಬೆಟಗೇರಿ ನಗರಕ್ಕೆ ಪ್ರತಿ 8 ದಿನಕ್ಕೊಮ್ಮೆ ಕುಡಿಯುವ ನೀರು ಪೂರೈಕೆ ಮಾಡಲಾಗುತ್ತಿದೆ ಎಂದರು.

ಪಶುಸಂಗೋಪನೆ ಇಲಾಖೆ ಡಿಡಿ ಡಾ. ಎಚ್.ಬಿ. ಹುಲಗಣ್ಣನವರ, ಜಿಲ್ಲೆಯಲ್ಲಿ ಸದ್ಯ ಜಾನುವಾರುಗಳಿಗೆ ಮೇವಿನ ಕೊರತೆ ಇಲ್ಲ. ಮುಂದಿನ ದಿನಗಳಲ್ಲಿ ಸಮಸ್ಯೆ ಎದುರಾದಲ್ಲಿ 31 ಕಡೆ ಮೇವು ಬ್ಯಾಂಕ್ ಆರಂಭಿಸಲು ಸ್ಥಳಗಳನ್ನು ಗುರುತಿಸಲಾಗಿದೆ ಎಂದರು.ಕೃಷಿ ಜಂಟಿ ನಿರ್ದೇಶಕಿ ಚೇತನಾ ಪಾಟೀಲ ಮಾತನಾಡಿ, ಜಿಲ್ಲೆಯಲ್ಲಿ ಹೆಸರು, ಮುಸುಕಿನಜೋಳ ಹಾಗೂ ಸೂರ್ಯಕಾಂತಿ ಪ್ರಮುಖ ಬೆಳೆಗಳಾಗಿವೆ. ಮುಂಗಾರು ಹಂಗಾಮಿನಲ್ಲಿ 3.14 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಬಿತ್ತನೆ ಗುರಿ ಹೊಂದಲಾಗಿದೆ. ಮುಂಗಾರು ಹಂಗಾಮಿಗೆ ಅಗತ್ಯವಿರುವ ಯೂರಿಯಾ, ಡಿಎಪಿ ಹಾಗೂ ಕಾಂಪ್ಲೆಕ್ಸ್ ಗೊಬ್ಬರಗಳ ಲಭ್ಯತೆ ಕುರಿತು ಮಾಹಿತಿ ನೀಡಿದರು.


ಸದ್ಯ 7,468 ಮೆಟ್ರಿಕ್ ಟನ್ ಗೊಬ್ಬರ ಮಾರಾಟವಾಗಿದ್ದು, 15,948 ಮೆಟ್ರಿಕ್ ಟನ್ ಗೊಬ್ಬರ ದಾಸ್ತಾನು ಉಳಿದಿದೆ ಎಂದರು. ರೈತರಿಗೆ ಗೊಬ್ಬರ ಹಾಗೂ ಬೀಜ ಕೊರತೆ ಉಂಟಾಗದಂತೆ ಅಗತ್ಯ ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳಲಾಗಿದೆ ಎಂದರು.ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಡಾ. ದುರಗೇಶ್ ಕೆ.ಆರ್., ಎಸಿ ಗಂಗಪ್ಪ ಎಂ. ಇತರರು ಇದ್ದರು.