ಪ್ರಭುಗೌಡ ಅವರು ಪಕ್ಷಕ್ಕಾಗಿ ಹಲವು ವರ್ಷಗಳಿಂದ ದುಡಿದಿದ್ದು, ಶಹರ ಘಟಕದ ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದಾರೆ. ಅವರ ಸೇವೆಯನ್ನು ಗುರುತಿಸಿ ಸರ್ಕಾರ ಪ್ರಾಧಿಕಾರದ ಅಧ್ಯಕ್ಷರನ್ನಾಗಿ ನೇಮಕ ಮಾಡಿದೆ.

ಹಾವೇರಿ: ಅಧಿಕಾರ ಎಷ್ಟು ದಿನ ಇರುತ್ತದೆ ಎಂಬುದು ಯಾರಿಗೂ ಗೊತ್ತಿಲ್ಲ. ಸಿಕ್ಕಿರುವ ಅವಕಾಶವನ್ನು ಸದ್ಬಳಕೆ ಮಾಡಿಕೊಂಡು ಹಾವೇರಿ ನಗರದ ಅಭಿವೃದ್ಧಿಗೆ ಒತ್ತು ನೀಡಿ, ಉತ್ತಮ ಆಡಳಿತ ನೀಡಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ರುದ್ರಪ್ಪ ಲಮಾಣಿ ಹೇಳಿದರು.

ಸ್ಥಳೀಯ ನಗರಾಭಿವೃದ್ಧಿ ಪ್ರಾಧಿಕಾರದ ಕಚೇರಿಯಲ್ಲಿ ಇತ್ತೀಚೆಗೆ ನಡೆದ ನೂತನ ಅಧ್ಯಕ್ಷರ ಪದಗ್ರಹಣ ಕಾರ್ಯಕ್ರಮದಲ್ಲಿ ಪ್ರಭುಗೌಡ ಬಿಷ್ಟನಗೌಡ್ರ ಅವರಿಗೆ ಸರ್ಕಾರದ ಆದೇಶದ ಪ್ರತಿ ನೀಡಿ ಅವರು ಮಾತನಾಡಿದರು.

ಪ್ರಾಧಿಕಾರದ ಅಧ್ಯಕ್ಷರ ಅವಧಿಯನ್ನು ಎರಡು ವರ್ಷ 18 ತಿಂಗಳು ಎಂದು ನಿಗದಿಪಡಿಸಲಾಗಿತ್ತು. ಇದೀಗ ಅವಧಿಯಲ್ಲಿ ಬದಲಾವಣೆಯಾಗಿದೆ. ಪ್ರಭುಗೌಡ ಅವರು ಪಕ್ಷಕ್ಕಾಗಿ ಹಲವು ವರ್ಷಗಳಿಂದ ದುಡಿದಿದ್ದು, ಶಹರ ಘಟಕದ ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದಾರೆ. ಅವರ ಸೇವೆಯನ್ನು ಗುರುತಿಸಿ ಸರ್ಕಾರ ಪ್ರಾಧಿಕಾರದ ಅಧ್ಯಕ್ಷರನ್ನಾಗಿ ನೇಮಕ ಮಾಡಿದೆ ಎಂದರು.

ಪ್ರಾಧಿಕಾರದ ಅಧ್ಯಕ್ಷರಾಗಿ ದೊರೆತ ಅವಕಾಶವನ್ನು ಸಮರ್ಪಕವಾಗಿ ಬಳಸಿಕೊಂಡು ನಗರದ ಅಭಿವೃದ್ಧಿಗೆ ಹೆಚ್ಚಿನ ಕೊಡುಗೆ ನೀಡಬೇಕು. ಹಾವೇರಿ ನಗರದಲ್ಲಿ ಉದ್ಯಾನಗಳ ಅಭಿವೃದ್ಧಿಗೆ ಒತ್ತು ನೀಡಲಾಗಿದೆ. ಇನ್ನಷ್ಟು ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳುವ ಮೂಲಕ ನಗರದ ಸೌಂದರ್ಯ ಹೆಚ್ಚಿಸಬೇಕು ಎಂದು ಸಲಹೆ ನೀಡಿದರು.

ನಿಕಟಪೂರ್ವ ಅಧ್ಯಕ್ಷ ಎಸ್‌ಎಫ್‌ಎನ್ ಗಾಜಿಗೌಡ್ರ ಅವರು ವಯಸ್ಸಿನಲ್ಲಿ ಹಿರಿಯರು. ಪ್ರಾಧಿಕಾರದ ಅಧ್ಯಕ್ಷರಾಗಿ ಸೇವೆ ಸಲ್ಲಿಸಿ ಹಲವು ಅಭಿವೃದ್ಧಿ ಕಾರ್ಯಗಳನ್ನು ಮಾಡಿದ್ದಾರೆ. ಪ್ರಾಧಿಕಾರವನ್ನು ಸ್ವಂತ ಆಸ್ತಿಯೆಂದು ತಿಳಿದು ನಗರದ ಅಭಿವೃದ್ಧಿಗೆ ಶ್ರಮಿಸಿದ್ದಾರೆ. ಅವರ ಸೇವೆಗೆ ಅಭಿನಂದನೆ ಸಲ್ಲಿಸುತ್ತೇವೆ ಎಂದರು.

ಕೆಸಿಸಿ ಬ್ಯಾಂಕ್ ನಿರ್ದೇಶಕ ಕೊಟ್ರೇಶಪ್ಪ ಬಸೇಗಣ್ಣಿ ಮಾತನಾಡಿ, ಹಾವೇರಿ ನಗರದಲ್ಲಿ 50ಕ್ಕೂ ಹೆಚ್ಚು ಉದ್ಯಾನಗಳನ್ನು ನಿರ್ಮಿಸಿ ಅಭಿವೃದ್ಧಿ ಪಡಿಸಲಾಗಿದ್ದು, ಪ್ರಾಧಿಕಾರವು ಉದ್ಯಾನಗಳ ಅಭಿವೃದ್ಧಿಗೆ ಆದ್ಯತೆ ನೀಡಿದೆ. ಪ್ರಾಧಿಕಾರ ಜನರಿಂದ ಸಂಗ್ರಹವಾಗುವ ಹಣದ ಮೂಲಕ ತನ್ನ ಚಟುವಟಿಕೆ ನಿರ್ವಹಿಸುತ್ತದೆ. ನೂತನ ಅಧ್ಯಕ್ಷರಿಗೆ ಎಲ್ಲರೂ ಅಗತ್ಯ ಸಹಕಾರ ನೀಡಬೇಕು ಎಂದು ಹೇಳಿದರು.

ಹೂಡಾ ನೂತನ ಅಧ್ಯಕ್ಷ ಪ್ರಭುಗೌಡ ಬಿಷ್ಟನಗೌಡ್ರ ಮಾತನಾಡಿ, 2013ರಿಂದ ಇಲ್ಲಿಯವರೆಗೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಿದ ಸಂದರ್ಭದಲ್ಲಿ ತಮ್ಮೊಂದಿಗೆ ದುಡಿದ ಎಲ್ಲ ಯೂತ್ ಕಾಂಗ್ರೆಸ್ ಕಾರ್ಯಕರ್ತರಿಗೆ ಕೃತಜ್ಞತೆ ಸಲ್ಲಿಸಿದರು. ಅಧ್ಯಕ್ಷರಾಗಿ ಪ್ರಾಮಾಣಿಕತೆ ಹಾಗೂ ನಿಷ್ಠೆಯಿಂದ ಕಾರ್ಯನಿರ್ವಹಿಸುವುದಾಗಿ ಭರವಸೆ ನೀಡಿದರು. ಹಾವೇರಿ ನಗರದ ಸಮಗ್ರ ಅಭಿವೃದ್ಧಿಗೆ ಪ್ರಾಮಾಣಿಕವಾಗಿ ಶ್ರಮಿಸುವೆ. ನಿಕಟಪೂರ್ವ ಅಧ್ಯಕ್ಷರು ಕೈಗೊಂಡಿರುವ ಅಭಿವೃದ್ಧಿ ಕಾರ್ಯಗಳನ್ನು ಮುಂದುವರಿಸಿಕೊಂಡು ಹೋಗುವ ಜತೆಗೆ ಜನರಿಗೆ ಉತ್ತಮ ಆಡಳಿತ ನೀಡಲು ಪ್ರಯತ್ನಿಸುವುದಾಗಿ ಹೇಳಿದರು.

ನಂತರ ನೂತನ ಅಧ್ಯಕ್ಷರ ಬೆಂಬಲಿಗರು ಹಾಗೂ ಹಿತೈಷಿಗಳು ಅವರನ್ನು ಸನ್ಮಾನಿಸಿ ಅಭಿನಂದಿಸಿದರು. ಕಾಂಗ್ರೆಸ್ ಜಿಲ್ಲಾಧ್ಯಕ್ಷ ಸಂಜೀವಕುಮಾರ ನೀರಲಗಿ, ಗ್ಯಾರಂಟಿ ಸಮಿತಿ ತಾಲೂಕು ಅಧ್ಯಕ್ಷ ಎಂ.ಎಂ. ಮೈದೂರ, ಮಹದೇವಗೌಡ ಗಾಜಿಗೌಡ್ರ, ಪ್ರಾಧಿಕಾರದ ಸದಸ್ಯರಾದ ಬಸವರಾಜ ಮಾಳಗಿ, ವೀಣಾ ಹಲಗಣ್ಣವರ, ಬಸವರಾಜ ಬಳ್ಳಾರಿ, ಮಹಾಲಿಂಗಯ್ಯ ಹಿರೇಮಠ, ಜಮೀರ್ ಜಿಗರಿ, ಆಶ್ರಯ ಕಮಿಟಿ ಅಧ್ಯಕ್ಷ ಜಗದೀಶ ಬೆಟಗೇರಿ, ಮುಖಂಡರಾದ ಚಂದ್ರಶೇಖರ ಮುದಕಣ್ಣವರ, ಶಾಂತಕ್ಕ ಶಿರೂರ, ಜಯಶ್ರೀ ಶಿವಪುರ ಉಪಸ್ಥಿತರಿದ್ದರು. ಪ್ರಸನ್ನ ಹಿರೇಮಠ ಕಾರ್ಯಕ್ರಮ ನಿರ್ವಹಿಸಿದರು.