ಸಾರಾಂಶ
ಕನ್ನಡಪ್ರಭ ವಾರ್ತೆ ಹಾವೇರಿ
ಗ್ರಾಮೀಣ ಪ್ರದೇಶದ ಜನರಿಗೆ ಬರ ಪರಿಸ್ಥಿತಿಯಲ್ಲಿ ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸಲು ಯಾವುದೇ ಲೋಪವಾಗದಂತೆ ಮುಂಜಾಗ್ರತಾ ಕ್ರಮಕೈಗೊಳ್ಳಬೇಕು. ಆದ್ಯತೆ ಮೇಲೆ ನೀರು ಪೂರೈಕೆ ಕೆಲಸ ನಿರ್ವಹಿಸಬೇಕು ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಅಕ್ಷಯ್ ಶ್ರೀಧರ್ ಸೂಚನೆ ನೀಡಿದರು.ಗ್ರಾಮೀಣ ಪ್ರದೇಶದ ಜನರಿಗೆ ಬರ ಪರಿಸ್ಥಿತಿಯಲ್ಲಿ ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸಲು ಕೈಕೊಳ್ಳಬೇಕಾದ ಕ್ರಮಗಳ ಕುರಿತು ತಾಪಂ ಕಾರ್ಯನಿರ್ವಾಹಕ ಅಧಿಕಾರಿಗಳು ಹಾಗೂ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳೊಂದಿಗೆ ವಿಡಿಯೋ ಸಂವಾದ ಮೂಲಕ ಸಭೆ ನಡೆಸಿದ ಅವರು, ಜಿಲ್ಲೆಯಲ್ಲಿ ಬರದ ಪರಿಸ್ಥಿತಿ ಇರುವುದರಿಂದ ಸಾರ್ವಜನಿಕರ ಹಾಗೂ ಜನಪ್ರತಿನಿಧಿಗಳ ಕರೆಗಳನ್ನು ತಪ್ಪದೇ ಸ್ವೀಕರಿಸಿ ಅವರ ಅಹವಾಲು ಆಲಿಸಿ ಸಮಸ್ಯೆ ಪರಿಹರಿಸಬೇಕು. ಈ ಬಗ್ಗೆ ನಿರ್ಲಕ್ಷ್ಯವಹಿಸುವವರ ವಿರುದ್ಧ ಶಿಸ್ತು ಕ್ರಮಕೈಗೊಳ್ಳಲಾಗುವುದು ಎಂದು ಎಚ್ಚರಿಸಿದರು.
ಪಿಡಿಒಗಳು ಸರ್ಕಾರದಿಂದ ನೀಡಲಾದ ಮೊಬೈಲ್ ಸಂಖ್ಯೆಯನ್ನು ಚಾಲನೆಯಲ್ಲಿಟ್ಟುಕೊಳ್ಳಬೇಕು ಹಾಗೂ ಸಾರ್ವಜನಿಕರ ಕರೆಗಳನ್ನು ಕಡ್ಡಾಯವಾಗಿ ಸ್ವೀಕರಿಸಿ, ಸೂಕ್ತ ಕ್ರಮಕೈಗೊಳ್ಳಬೇಕು. ಸಾರ್ವಜನಿಕರಿಗೆ ಕುಡಿಯುವ ನೀರಿನ ನಿರಂತರ ಪೂರೈಕೆಗಾಗಿ ಪ್ರಸ್ತುತ ಚಾಲ್ತಿಯಲ್ಲಿರುವ ಬೋರವೆಲ್‌ಗಳು ಶಾಶ್ವತವಾಗಿ ಬಂದ್ ಆಗಿದ್ದರೆ ಹಾಗೂ ನೀರಿನ ಮಟ್ಟದ ಕಡಿಮೆಯಾಗಿದ್ದರೆ ತಾಲೂಕು ಟಾಸ್ಕ್‌ಪೋರ್ಸ್ ಕಮೀಟಿಗೆ ಲಿಖಿತವಾಗಿ ಮಾಹಿತಿ ಸಲ್ಲಿಸಿ ಬಾಡಿಗೆ ಬೋರವೆಲ್ ಪಡೆಯಲು ಹಾಗೂ ರಿ-ಡ್ರಿಲ್ ಹಾಗೂ ಫ್ಲೆಷಿಂಗ್ ಮಾಡಿಸಲು ಅನುಮೋದನೆ ಪಡೆಯಬೇಕು. ಬಾಡಿಗೆ ಕರಾರುಪತ್ರಮಾಡಿಸಿಕೊಂಡು ಕುಡಿಯುವ ನೀರಿನ ಸರಬರಾಜು ಕಾರ್ಯನಿರ್ವಹಿಸಬೇಕು. ನೀರು ಪೂರೈಕೆಯಲ್ಲಿ ವ್ಯತ್ಯಯವಾದರೆ ಟ್ಯಾಂಕರ್ ಮೂಲಕ ಸರಬರಾಜು ಮಾಡಲು ಅಗತ್ಯ ಕ್ರಮಕೈಗೊಳ್ಳಬೇಕು ಎಂದು ಸೂಚನೆ ನೀಡಿದರು.ಜಲಜೀವನ್ ಮಿಷನ್ ಯೋಜನೆಯಡಿ ಗ್ರಾಮ ಪಂಚಾಯಿತಿ ವತಿಯಿಂದ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಗೆ ಸಲ್ಲಿಸಿದ ವಂತಿಕೆಯನ್ನು ಆಯಾ ಗ್ರಾಪಂಗಳಿಗೆ ಹಿಂದಿರುಗಿಸಲಾಗಿದೆ. ಆ ಅನುದಾವನ್ನು ಸಂಪೂರ್ಣವಾಗಿ ಕುಡಿಯುವ ನೀರು ಪೂರೈಕೆಗೆ ಮಾತ್ರ ಬಳಸಿಕೊಳ್ಳಬೇಕು. ಗ್ರಾಮೀಣ ಪ್ರದೇಶಗಳಲ್ಲಿನ ಕುಡಿಯುವ ನೀರಿನ ಸಮಸ್ಯಾತ್ಮಕ ಹಳ್ಳಿಗಳ ವಿವರ ಟ್ಯಾಂಕರ್ ಮೂಲಕ ನೀರು ಸರಬರಾಜು, ಖಾಸಗಿ ಕೊಳವೆಬಾವಿಗಳ ವಿವರ, ಕುಡಿಯುವ ನೀರಿನ ಪೂರೈಕೆ ಮೂಲಗಳು, ಗ್ರಾಪಂವಾರು ಕೊಳವೆಬಾವಿಗಳ ಸಂಖ್ಯೆಗಳ ಕುರಿತಂತೆ ಸಂಪೂರ್ಣ ಮಾಹಿತಿಯನ್ನು ಪ್ರತಿ ಮಂಗಳವಾರ ಮತ್ತು ಶುಕ್ರವಾರ ಕಾರ್ಯನಿರ್ವಾಹಕ ಅಧಿಕಾರಿ ಮತ್ತು ಸಹಾಯಕ ಕಾರ್ಯಪಾಲಕ ಅಭಿಯಂತರರು ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಜಂಟಿ ರುಜುವಿನೊಂದಿಗೆ ಜಿಪಂ ಕಚೇರಿಗೆ ಸಲ್ಲಿಸಬೇಕು ಎಂದು ಸೂಚಿಸಿದರು.
ಸಹಾಯವಾಣಿ:ಗ್ರಾಮೀಣ ಪ್ರದೇಶದ ಜನರಿಗೆ ಬರ ಪರಿಸ್ಥಿತಿಯಲ್ಲಿ ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸಲು ಜಿಲ್ಲಾ ಮಟ್ಟದಲ್ಲಿ ಸಹಾಯವಾಣಿ ೯೪೮೩೭೩೭೧೨೯ ಆರಂಭಿಸಲಾಗಿದೆ. ಕುಡಿಯುವ ನೀರು ವ್ಯತ್ಯಯಕ್ಕೆ ಸಂಬಂಧಿಸಿದಂತೆ ಸಹಾಯವಾಣಿ ಕುರಿತು ಸಾರ್ವಜನಿಕರಿಗೆ ವ್ಯಾಪಕ ಪ್ರಚಾರ ಕೈಗೊಳ್ಳಬೇಕು. ಸ್ವೀಕೃತವಾದ ಸಾರ್ವಜನಿಕ ಕುಡಿಯುವ ನೀರಿನ ಸಮಸ್ಯೆಗಳಿಗೆ ತ್ವರಿತವಾಗಿ ಕ್ರಮಕೈಗೊಳ್ಳಬೇಕು ಎಂದು ಸೂಚಿಸಿದರು.
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಕಾರ್ಯಪಾಲಕ ಅಭಿಯಂತರರ ಮೇಲ್ವಿಚಾರಣೆಯಲ್ಲಿ ಮತ್ತು ತಾಪಂ ಕಾರ್ಯನಿರ್ವಾಹಕ ಅಧಿಕಾರಿಗಳ ಅಧ್ಯಕ್ಷತೆಯಲ್ಲಿ ತಾಲೂಕು ಮಟ್ಟದ ಟಾಸ್ಕ್‌ಫೋರ್ಸ್ ಸಮಿತಿ ರಚಿಸಲಾಗಿದೆ. ಈ ಸಮಿತಿಯು ಗ್ರಾಮೀಣ ಪ್ರದೇಶದ ಜನರಿಗ ಬರದ ಪರಿಸ್ಥಿತಿಯಲ್ಲಿ ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸುವ ನಿಟ್ಟಿನಲ್ಲಿ ತುರ್ತಾಗಿ ಕುಡಿಯುವ ನೀರಿನ ಕಾಮಗಾರಿಗಳನ್ನು ಕೊಳ್ಳಗಳು ಮತ್ತು ಆಯಾ ತಾಲೂಕಿನ ಕುಡಿಯುವ ನೀರಿನ ಅಭಾವವನ್ನು ಕೂಲಂಕುಷವಾಗಿ ಗಮಿಸಿ ಕೊಳವೆಬಾವಿಗಳು ಬತ್ತಿ ಹೋದಲ್ಲಿ ಪ್ರಥಮ ಆದ್ಯತೆ ಮೇರೆಗೆ ಬಾಡಿಗೆ ಆಧಾರದ ಮೇಲೆ ಪಡೆಯಲು ಅಥವಾ ಕೊಳವೆ ಬಾವಿಗಳನ್ನು ಫ್ಲೆಷಿಂಗ್ ಮಾಡಿ ಆಳಗೊಳಿಸಿ ನೀರಿನ ಸಮಸ್ಯೆ ಬಗೆಹರಿಸಲು ಮತ್ತು ಬಾಡಿಗೆ ಟ್ಯಾಂಕರ್ ಮೂಲಕ ಕುಡಿಯುವ ನೀರು ಪೂರೈಕೆಗೆ ಅಗತ್ಯ ಕ್ರಮಕೈಗೊಳ್ಳಲು ನಿರ್ದೇಶನ ನೀಡಿದರು.ಸಭೆಯಲ್ಲಿ ಜಿಪಂ ಮುಖ್ಯ ಯೋಜನಾಧಿಕಾರಿಗಳು, ಎಲ್ಲ ತಾಪಂಗಳ ಕಾರ್ಯನಿರ್ವಾಹಕ ಅಧಿಕಾರಿಗಳು, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಸಹಾಯಕ ಕಾರ್ಯಪಾಲಕ ಅಭಿಯಂತರರು, ತಾಪಂ ಸಹಾಯಕ ನಿರ್ದೇಶಕರು ಹಾಗೂ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ವಿಡಿಯೋ ಕಾನ್ಫರೆನ್ಸ್ ಮೂಲಕ ಭಾಗವಹಿಸಿದ್ದರು.