ನೂತನವಾಗಿ ಜವಾಬ್ದಾರಿ ವಹಿಸಿಕೊಂಡಿರುವ ಸದಸ್ಯರು ಸಂಸ್ಥೆಯ ಆಶಯ ಮತ್ತು ಉದ್ದೇಶಗಳನ್ನು ಸಾಕಾರಗೊಳಿಸುವ ನಿಟ್ಟಿನಲ್ಲಿ ಒಗ್ಗಟ್ಟಿನಿಂದ ಕಾರ್ಯನಿರ್ವಹಿಸಬೇಕು.

ಅಂಜುಮನ್-ಎ-ಇಸ್ಲಾಂ ನಾಮನಿರ್ದೇಶಿತ ಸದಸ್ಯರ ಪದಗ್ರಹಣ ಸಮಾರಂಭ ಹಾಗೂ ರಕ್ತದಾನ ಶಿಬಿರ

ಕನ್ನಡಪ್ರಭ ವಾರ್ತೆ ಗದಗ

ಶಿಕ್ಷಣಕ್ಕೆ ಆದ್ಯತೆ ನೀಡಿ ಸಮಾಜದ ಸರ್ವತೋಮುಖ ಅಭಿವೃದ್ಧಿಗೆ ಶ್ರಮಿಸುವಂತೆ ಸಭಾಪತಿ ಸಲೀಂ ಅಹ್ಮದ್ ಕರೆ ನೀಡಿದರು.

ಗುರುವಾರ ಗದಗ-ಬೆಟಗೇರಿಯ ಅಂಜುಮನ್‌-ಎ-ಇಸ್ಲಾಂ ಸಂಸ್ಥೆಯಿಂದ ಬೆಟಗೇರಿ ಈದ್ಗಾ ಮಹಲ್‌ನಲ್ಲಿ ಆಯೋಜಿಸಲಾಗಿದ್ದ ನಾಮನಿರ್ದೇಶಿತ ಸದಸ್ಯರ ಪದಗ್ರಹಣ ಸಮಾರಂಭ ಹಾಗೂ ರಕ್ತದಾನ ಶಿಬಿರದ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಅವರು ಮಾತನಾಡಿದರು.

ಈ ಸಂದರ್ಭ ಸಂಸ್ಥೆಯ ನೂತನ ಪದಾಧಿಕಾರಿಗಳಿಗೆ ಶುಭಾಶಯ ತಿಳಿಸಿದ ಸಭಾಪತಿಗಳು, ಸಮಾಜದ ಶೈಕ್ಷಣಿಕ, ಸಾಮಾಜಿಕ ಹಾಗೂ ಆರ್ಥಿಕ ಅಭಿವೃದ್ಧಿಗೆ ಅಂಜುಮನ್-ಎ-ಇಸ್ಲಾಂ ಸಂಸ್ಥೆಯು ಸಹಕಾರಿಯಾಗಲಿ ಎಂದರು.

ನೂತನವಾಗಿ ಜವಾಬ್ದಾರಿ ವಹಿಸಿಕೊಂಡಿರುವ ಸದಸ್ಯರು ಸಂಸ್ಥೆಯ ಆಶಯ ಮತ್ತು ಉದ್ದೇಶಗಳನ್ನು ಸಾಕಾರಗೊಳಿಸುವ ನಿಟ್ಟಿನಲ್ಲಿ ಒಗ್ಗಟ್ಟಿನಿಂದ ಕಾರ್ಯನಿರ್ವಹಿಸಬೇಕು. ವಿಶೇಷವಾಗಿ ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ ನೀಡಿ, ಬಡ ಮತ್ತು ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಉತ್ತಮ ಅವಕಾಶಗಳನ್ನು ಕಲ್ಪಿಸುವ ಮೂಲಕ ಸಮಾಜದ ಸರ್ವತೋಮುಖ ಅಭಿವೃದ್ಧಿಗೆ ಶ್ರಮಿಸಬೇಕು ಎಂದು ಆಶಿಸಿದರು.

ರಕ್ತದಾನವು ಅತ್ಯಂತ ಶ್ರೇಷ್ಠವಾದ ಮಾನವೀಯ ಸೇವೆಯಾಗಿದ್ದು, ನಾವು ನೀಡುವ ಒಂದು ಯೂನಿಟ್ ರಕ್ತ ಮತ್ತೊಬ್ಬರ ಜೀವ ಉಳಿಸಲು ಸಹಕಾರಿಯಾಗಬಹುದು. ಜಾತಿ, ಧರ್ಮ, ಭಾಷೆಯ ಭೇದವಿಲ್ಲದೆ ಮಾನವೀಯತೆಯ ನೆಲೆಯಲ್ಲಿ ನಡೆಯುವ ಇಂತಹ ಸೇವಾ ಕಾರ್ಯಗಳು ಸಮಾಜದಲ್ಲಿ ಪರಸ್ಪರ ಸಹಕಾರ, ಸಹೋದರತ್ವ ಹಾಗೂ ಸೇವಾ ಮನೋಭಾವವನ್ನು ಬೆಳೆಸುತ್ತವೆ ಎಂದು ತಿಳಿಸಿದರು.

ಸಮಾಜದ ಅಭಿವೃದ್ಧಿ ಕೇವಲ ಸರ್ಕಾರದ ಜವಾಬ್ದಾರಿಯಲ್ಲ. ಶಿಕ್ಷಣ ಸಂಸ್ಥೆಗಳು, ಸಂಘ-ಸಂಸ್ಥೆಗಳು ಹಾಗೂ ಸಾರ್ವಜನಿಕರು ಕೈಜೋಡಿಸಿದಾಗ ಮಾತ್ರ ಸಮಗ್ರ ಬದಲಾವಣೆ ಸಾಧ್ಯ. ಈ ನಿಟ್ಟಿನಲ್ಲಿ ಅಂಜುಮನ್-ಎ-ಇಸ್ಲಾಂ ಸಂಸ್ಥೆಯು ಜನಪರ ಹಾಗೂ ಸಮಾಜಮುಖಿ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಮಾದರಿ ಸಂಸ್ಥೆಯಾಗಿ ಬೆಳೆಯಲಿ ಎಂದು ಹಾರೈಸಿದರು.

ಈ ಸಂದರ್ಭ ಮಾಜಿ ಸಚಿವ ಹಾಗೂ ಶಾಸಕ ಎಚ್.ಕೆ. ಪಾಟೀಲ್, ಸಂಸ್ಥೆಯ ಅಧ್ಯಕ್ಷ ಅನ್ವರ್ ಬಾಗೇವಾಡಿ, ಸೇರಿದಂತೆ ಸ್ಥಳೀಯ ಮುಖಂಡರು, ಸಂಸ್ಥೆಯ ಪದಾಧಿಕಾರಿಗಳು ಮತ್ತಿತರರಿದ್ದರು.