ಕಲ್ಯಾಣ ಕರ್ನಾಟಕ ಭಾಗದ ಅಲ್ಪಸಂಖ್ಯಾತ ಸಮುದಾಯಗಳ ಶಿಕ್ಷಣ, ಆರೋಗ್ಯ ಹಾಗೂ ಮೂಲಸೌಕರ್ಯ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ ನೀಡುವಂತೆ ಕೋರಿ ದಾವಣಗೆರೆ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್ ನೇತೃತ್ವದಲ್ಲಿ ಕಲ್ಯಾಣ ಕರ್ನಾಟಕ ಭಾಗದ ಸಂಸದರು ಮಂಗಳವಾರ ನವದೆಹಲಿಯಲ್ಲಿ ಕೇಂದ್ರ ಅಲ್ಪಸಂಖ್ಯಾತ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದ್ದಾರೆ.
ದಾವಣಗೆರೆ: ಕಲ್ಯಾಣ ಕರ್ನಾಟಕ ಭಾಗದ ಅಲ್ಪಸಂಖ್ಯಾತ ಸಮುದಾಯಗಳ ಶಿಕ್ಷಣ, ಆರೋಗ್ಯ ಹಾಗೂ ಮೂಲಸೌಕರ್ಯ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ ನೀಡುವಂತೆ ಕೋರಿ ದಾವಣಗೆರೆ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್ ನೇತೃತ್ವದಲ್ಲಿ ಕಲ್ಯಾಣ ಕರ್ನಾಟಕ ಭಾಗದ ಸಂಸದರು ಮಂಗಳವಾರ ನವದೆಹಲಿಯಲ್ಲಿ ಕೇಂದ್ರ ಅಲ್ಪಸಂಖ್ಯಾತ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದ್ದಾರೆ.
ಪ್ರಧಾನಮಂತ್ರಿ ಜನವಿಕಾಸ ಕಾರ್ಯಕ್ರಮ (ಪಿಎಂಜೆವಿಕೆ) ಅಡಿಯಲ್ಲಿ ಕಲ್ಯಾಣ ಕರ್ನಾಟಕ ವ್ಯಾಪ್ತಿಗೆ ಒಳಪಡುವ ಹರಪನಹಳ್ಳಿ ತಾಲ್ಲೂಕಿನಲ್ಲಿ ಪ್ರಮುಖ ಅಭಿವೃದ್ಧಿ ಯೋಜನೆಗಳನ್ನು ಕೈಗೊಳ್ಳಲು ಅಗತ್ಯ ಅನುದಾನ ಹಾಗೂ ಮಂಜೂರಾತಿ ನೀಡುವಂತೆ ಸಂಸದರು ಈ ಸಂದರ್ಭದಲ್ಲಿ ಮನವಿ ಮಾಡಿದ್ದಾರೆ.ವಿಶೇಷವಾಗಿ ಶಾಲಾ ಕಟ್ಟಡಗಳು, ಹೆಚ್ಚುವರಿ ತರಗತಿ ಕೊಠಡಿಗಳು, ಬಾಲಕ-ಬಾಲಕಿಯರ ವಸತಿ ನಿಲಯಗಳು, ಐಟಿಐ ಮತ್ತು ಪಾಲಿಟೆಕ್ನಿಕ್ ಸಂಸ್ಥೆಗಳು, ಕೌಶಲ್ಯಾಭಿವೃದ್ಧಿ ಕೇಂದ್ರಗಳು, ಪ್ರಾಥಮಿಕ ಹಾಗೂ ಸಮುದಾಯ ಆರೋಗ್ಯ ಕೇಂದ್ರಗಳು ಮತ್ತು ತಾಯಿ-ಮಕ್ಕಳ ಆರೋಗ್ಯ ಸೌಲಭ್ಯಗಳನ್ನು ಅಭಿವೃದ್ಧಿಪಡಿಸಲು ಅಗತ್ಯ ನೆರವು ನೀಡುವಂತೆ ನಿಯೋಗ ಒತ್ತಾಯಿಸಿದೆ.
ಕಲ್ಯಾಣ ಕರ್ನಾಟಕದ ಅಭಿವೃದ್ಧಿ ಅಂತರವನ್ನು ಕಡಿಮೆ ಮಾಡಿ, ಶಿಕ್ಷಣ ಮತ್ತು ಆರೋಗ್ಯ ಮೂಲಸೌಕರ್ಯವನ್ನು ಮತ್ತಷ್ಟು ಬಲಪಡಿಸುವ ಮೂಲಕ ಹರಪನಹಳ್ಳಿ ಸೇರಿದಂತೆ ಈ ಭಾಗದ ಜನರಿಗೆ ಉತ್ತಮ ಸೌಲಭ್ಯ ಮತ್ತು ಅವಕಾಶಗಳನ್ನು ಕಲ್ಪಿಸುವುದು ತಮ್ಮ ಆದ್ಯತೆಯಾಗಿದೆ ಎಂದು ನಿಯೋಗದ ಮುಖಂಡರು ತಿಳಿಸಿದರು.ಈ ಸಂದರ್ಭದಲ್ಲಿ ಸಂಸದರಾದ ರಾಧಾಕೃಷ್ಣ, ಸಾಗರ್ ಖಂಡ್ರೆ, ಜಿ. ಕುಮಾರ್ ನಾಯಕ್, ಕೆ.ರಾಜಶೇಖರ್ ಹಿಟ್ನಾಳ್ ಮತ್ತು ಇ.ತುಕಾರಾಂ ಉಪಸ್ಥಿತರಿದ್ದರು.
- - --11ಕೆಡಿವಿಜಿ31:
ನವದೆಹಲಿಯಲ್ಲಿ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್ ಕಲ್ಯಾಣ ಕರ್ನಾಟಕ ಭಾಗದ ಅಭಿವೃದ್ಧಿಗೆ ಒತ್ತು ನೀಡುವಂತೆ ಕೇಂದ್ರ ಸಚಿವರಿಗೆ ಮನವಿ ಸಲ್ಲಿಸಿದರು.