ಚುನಾವಣಾ ಕೆಲಸಗಳಿಗೆ ಆದ್ಯತೆ ನೀಡಿ: ಡಾ.ಅವಿನಾಶ್

| Published : Feb 27 2024, 01:32 AM IST

ಚುನಾವಣಾ ಕೆಲಸಗಳಿಗೆ ಆದ್ಯತೆ ನೀಡಿ: ಡಾ.ಅವಿನಾಶ್
Share this Article
  • FB
  • TW
  • Linkdin
  • Email

ಸಾರಾಂಶ

ರಾಮನಗರ: ಲೋಕಸಭಾ ಚುನಾವಣೆಯ ಪೂರ್ವ ಸಿದ್ಧತಾ ಕರ್ತವ್ಯಗಳಿಗೆ ನಿಯೋಜನೆಗೊಂಡಿರುವ ಅಧಿಕಾರಿಗಳು ಮತ್ತು ಸಿಬ್ಬಂದಿ ತಮ್ಮ ದೈನಂದಿನ ಕಚೇರಿ ಕಾರ್ಯಗಳ ಜೊತೆಗೆ ಚುನಾವಣಾ ಕಾರ್ಯಗಳಿಗೆ ಮೊದಲ ಆದ್ಯತೆ ನೀಡಿ ಕೆಲಸ ಮಾಡುವಂತೆ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಚುನಾವಣಾಧಿಕಾರಿಗಳಾದ ಡಾ. ಅವಿನಾಶ್ ಮೆನನ್ ರಾಜೇಂದ್ರನ್ ಅಧಿಕಾರಿಗಳಿಗೆ ಸೂಚನೆ ನೀಡಿದರು.

ರಾಮನಗರ: ಲೋಕಸಭಾ ಚುನಾವಣೆಯ ಪೂರ್ವ ಸಿದ್ಧತಾ ಕರ್ತವ್ಯಗಳಿಗೆ ನಿಯೋಜನೆಗೊಂಡಿರುವ ಅಧಿಕಾರಿಗಳು ಮತ್ತು ಸಿಬ್ಬಂದಿ ತಮ್ಮ ದೈನಂದಿನ ಕಚೇರಿ ಕಾರ್ಯಗಳ ಜೊತೆಗೆ ಚುನಾವಣಾ ಕಾರ್ಯಗಳಿಗೆ ಮೊದಲ ಆದ್ಯತೆ ನೀಡಿ ಕೆಲಸ ಮಾಡುವಂತೆ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಚುನಾವಣಾಧಿಕಾರಿಗಳಾದ ಡಾ. ಅವಿನಾಶ್ ಮೆನನ್ ರಾಜೇಂದ್ರನ್ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆದ ಲೋಕಸಭಾ ಚುನಾವಣೆಯ ಪೂರ್ವ ಸಿದ್ದತಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಲೋಕಸಭಾ ಚುನಾವಣೆಗೆ ಯಾವುದೇ ಸಂದರ್ಭದಲ್ಲಿ ಮಾದರಿ ನೀತಿ ಸಂಹಿತೆ ಜಾರಿಯಾಗಬಹುದು. ಆ ಹಿನ್ನೆಲೆಯಲ್ಲಿ ನೀತಿ ಸಂಹಿತೆ ಜಾರಿಯಾದ 24 ಗಂಟೆಯೊಳಗೆ ಕೈಗೊಳ್ಳಬೇಕಾದ ಕಾರ್ಯಗಳ ಕುರಿತು ಪೂರ್ವ ಸಿದ್ಧತೆಗಳನ್ನು ಇಂದಿನಿಂದಲೇ ಮಾಡಿಕೊಳ್ಳುವುದು. ಚುನಾವಣಾ ಆಯೋಗದ ನಿರ್ದೇಶನದಂತೆ ಪೂರ್ವ ತಯಾರಿ ಕಾರ್ಯಗಳನ್ನು ಚಾಚು ತಪ್ಪದೆ ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುವುದು. ಅಧಿಕಾರಿ ಮತ್ತು ಸಿಬ್ಬಂದಿ ನಿಯೋಜನೆ, ಎಲ್ಲಾ ಮತಗಟ್ಟೆಗಳಿಗೆ ಮೂಲ ಸೌಕರ್ಯಗಳ ವ್ಯವಸ್ಥೆ, ರ‍್ಯಾಂಪ್ ನಿರ್ಮಾಣ, ಭದ್ರತೆ, ಪೊಲೀಸ್ ಬಂದೋಬಸ್ತ್, ಚೆಕ್ ಪೋಸ್ಟ್ ನಿರ್ಮಾಣ, ಚುನಾವಣಾ ಲಿಪಿಕ ಪರಿಕರಗಳು ಹಾಗೂ ಇತರ ವಸ್ತುಗಳ ಖರೀದಿ, ಸಾರಿಗೆ ವ್ಯವಸ್ಥೆ, ಚುನಾವಣಾ ಕರ್ತವ್ಯಕ್ಕೆ ನಿಯೋಜನೆಗೊಳ್ಳುವವರಿಗೆ ಒಂದು ಸುತ್ತಿನ ತರಬೇತಿ, ಕ್ಲಿಷ್ಟ/ಸೂಕ್ಷ್ಮ ಮತಗಟ್ಟೆ ಕ್ಷೇತ್ರಗಳ ಗುರುತಿಸುವಿಕೆ ಸೇರಿದಂತೆ ಇನ್ನಿತರ ಸಕಲ ತಯಾರಿಗಳನ್ನು ಮಾಡಿಕೊಳ್ಳಲು ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳಿಗೆ ಕಾರ್ಯಭಾರ ಹಂಚಿಕೆ ಮಾಡಿ ಕಟ್ಟುನಿಟ್ಟಿನ ಸೂಚನೆಗಳನ್ನು ನೀಡಿದರು.

ಚುನಾವಣಾ ಕರ್ತವ್ಯಕ್ಕಾಗಿ ನೋಡಲ್ ಅಧಿಕಾರಿಗಳನ್ನು ನೇಮಕ ಮಾಡಲಾಗಿದೆ. ಚುನಾವಣಾ ಆಯೋಗದ ಪ್ರಸ್ತುತದ ನಿರ್ದೇಶನಗಳನ್ವಯ ಕರಾರುವಕ್ಕಾಗಿ ಕಾರ್ಯನಿರ್ವಹಿಸಬೇಕು. ಮಾದರಿ ನೀತಿ ಸಂಹಿತೆಯ ಅಧಿಸೂಚನೆ ಪ್ರಕಟದ ದಿನಾಂಕದಿಂದ ಚುನಾವಣೆ ಫಲಿತಾಂಶದ ನಂತರವೂ ಜಾರಿಯಲ್ಲಿರುತ್ತದೆ. ಈ ಸಮಯದಲ್ಲಿ ಅಧಿಕಾರಿಗಳು ಜಿಲ್ಲೆಯಾದ್ಯಂತ ಅವಶ್ಯಕತೆ ಇರುವ ಸ್ಥಳಗಳಲ್ಲಿ ಚೆಕ್ ಪೋಸ್ಟ್ ಗಳಲ್ಲಿ ಕಾರ್ಯನಿರ್ವಹಿಸಬೇಕು. ಅನುಮತಿ ಇಲ್ಲದೆ ಯಾವುದೇ ರೀತಿಯ ಸಾರ್ವಜನಿಕ ಸಭೆ, ಸಮಾರಂಭಗಳು ಏರ್ಪಡದಂತೆ ನೋಡಿಕೊಳ್ಳಬೇಕು. ಅನಿವಾರ್ಯತೆ ಎಂಬ ಕಾರ್ಯಕ್ರಮಗಳಿಗೆ ಪೊಲೀಸ್ ಅಧಿಕಾರಿಗಳ ಅನುಮತಿ ಕಡ್ಡಾಯವಾಗಿರಬೇಕು. ಚುನಾವಣಾ ಪ್ರಚಾರದ ಸಂದರ್ಭದಲ್ಲಿ ರಾಜಕೀಯ ಪಕ್ಷಗಳ ಜಾಹೀರಾತು ಪ್ರಕಟಿಸಲು ಸರ್ಕಾರಿ ಮತ್ತು ಅನುದಾನಿತ ಕಟ್ಟಡಗಳನ್ನು ಬಳಸಿಕೊಳ್ಳದಂತೆ ನಿಗಾವಹಿಸಬೇಕು. ನೀತಿ ಸಂಹಿತೆ ಜಾರಿಯಾದ 24 ಗಂಟೆಯೊಳಗೆ ಸರ್ಕಾರದ ಅಧೀನದಲ್ಲಿರುವ ಕಚೇರಿಗಳು ಮತ್ತು ಸಾರ್ವಜನಿಕ ಸ್ಥಳಗಳಲ್ಲಿ ಎಲ್ಲಾ ರೀತಿಯ ಪ್ರಚಾರ ಫಲಕಗಳಲ್ಲಿನ ಸರ್ಕಾರಿ ಜಾಹೀರಾತುಗಳನ್ನು ತೆರವುಗೊಳಿಸಬೇಕು. ಚುನಾವಣಾ ಸಭೆಗಳಿಗೆ ಸಂಬಂಧಿಸಿದಂತೆ ಸಂಬಂಧಪಟ್ಟ ಸಕ್ಷಮದ ಅಧಿಕಾರಿಗಳ ಅನುಮತಿಯನ್ನು ಪಡೆಯಬೇಕು. ಸಾಮಾನ್ಯ ಜನರಿಗೆ ಯಾವುದೇ ರೀತಿಯ ತೊಂದರೆಯಾಗದಂತೆ ಎಚ್ಚರವಹಿಸಿ ಪ್ರಚಾರ ಕೈಗೊಳ್ಳಬೇಕು ಎಂದು ಅವಿನಾಶ್ ತಿಳಿಸಿದರು.

ಸಿದ್ದಲಿಂಗಸ್ವಾಮಿ ಅವರು ಲೋಕಸಭಾ ಚುನಾವಣೆ ನಡೆಸುವ ಬಗ್ಗೆ ಪ್ರಾತ್ಯಕ್ಷಿಕೆ ನೀಡಿದರು. ಅಪರ ಜಿಲ್ಲಾಧಿಕಾರಿ ಶಿವಾನಂದ ಮೂರ್ತಿ, ಜಿಪಂ ಉಪಕಾರ್ಯದರ್ಶಿ ರಾಘವೇಂದ್ರ, ಉಪ ವಿಭಾಗಾಧಿಕಾರಿ ಬೀನೊಯ್, ತಹಶೀಲ್ದಾರುಗಳು, ವಿವಿಧ ಇಲಾಖೆಗಳ ಜಿಲ್ಲಾ ಮತ್ತು ತಾಲೂಕು ಮಟ್ಟದ ಅಧಿಕಾರಿಗಳು, ಸಿಬ್ಬಂದಿ ಉಪಸ್ಥಿತರಿದ್ದರು.

26ಕೆಆರ್ ಎಂಎನ್ 3,4.ಜೆಪಿಜಿ

ರಾಮನಗರ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಸೋಮವಾರ ಲೋಕಸಭಾ ಚುನಾವಣೆಯ ಪೂರ್ವ ಸಿದ್ಧತಾ ಸಭೆ ನಡೆಯಿತು.