ಸಾರಾಂಶ
ಕನ್ನಡಪ್ರಭ ವಾರ್ತೆ ದಾವಣಗೆರೆ
ಹರಿಹರ ತಾಲೂಕಿನ ರಾಜನಹಳ್ಳಿಯ ಶ್ರೀ ಮಹರ್ಷಿ ವಾಲ್ಮೀಕಿ ಗುರುಪೀಠದಲ್ಲಿ ಫೆ.8 ಮತ್ತು 9 ರಂದು ವಾಲ್ಮೀಕಿ ಜಾತ್ರೆ ವ್ಯವಸ್ಥಿತವಾಗಿ ನಡೆಸಲು ಎಲ್ಲಾ ಇಲಾಖೆ ಅಧಿಕಾರಿಗಳು ಜವಾಬ್ದಾರಿಯಿಂದ ಕೆಲಸ ಮಾಡಬೇಕೆಂದು ಜಿಲ್ಲಾಧಿಕಾರಿ ಡಾ.ಎಂ.ವಿ.ವೆಂಕಟೇಶ್ ತಿಳಿಸಿದರು.ರಾಜನಹಳ್ಳಿಯ ಮಹರ್ಷಿ ವಾಲ್ಮೀಕಿ ಗುರುಪೀಠದಲ್ಲಿ ಶುಕ್ರವಾರ ನಡೆದ ಜಾತ್ರಾ ಪೂರ್ವಭಾವಿ ಸಿದ್ಧತಾ ಸಭೆಯಲ್ಲಿ ಮಾತನಾಡಿ ಜಾತ್ರಾ ಮಹೋತ್ಸವದಲ್ಲಿ ಮುಖ್ಯಮಂತ್ರಿಯವರು ಸೇರಿ ಸಚಿವರು ಮತ್ತು ವಿವಿಧ ಗಣ್ಯರು ಭಾಗವಹಿಸಲಿದ್ದಾರೆ. ಜಾತ್ರಾ ಸಂದರ್ಭದಲ್ಲಿ 3 ಲಕ್ಷಕ್ಕಿಂತಲೂ ಹೆಚ್ಚಿನ ಜನರು ಸೇರುವುದರಿಂದ ಅಹಿತಕರ ಘಟನೆಗಳು ನಡೆಯದಂತೆ ಮುನ್ನೆಚ್ಚರಿಕೆ ವಹಿಸಿ ಅಗತ್ಯವಿರುವ ಮೂಲಭೂತ ಸೌಕರ್ಯಗಳ ಕಲ್ಪಿಸಬೇಕಾಗಿದೆ.
ಶ್ರೀ ಮಠದಲ್ಲಿ ನಾಲ್ಕು ಕೊಳವೆಬಾವಿಗಳಿದ್ದು ಇದರೊಂದಿಗೆ ಹೆಚ್ಚುವರಿಯಾಗಿ ಟ್ಯಾಂಕರ್‌ಗಳ ಒದಗಿಸಿ ನಿರಂತರ ನೀರು ಪೂರೈಕೆಗೆ ಗ್ರಾಮೀಣ ಕುಡಿಯುವ ನೀರು ಪೂರೈಕೆ ವಿಭಾಗದಿಂದ ವ್ಯವಸ್ಥೆ ಮಾಡಬೇಕು ಎಂದು ಸೂಚನೆ ನೀಡಿದರು.ಜಾತ್ರಾ ಪೂರ್ವ ಮತ್ತು ಸಂದರ್ಭದಲ್ಲಿ ಬೆಸ್ಕಾಂನಿಂದ ನಿರಂತರ ವಿದ್ಯುತ್ ಪೂರೈಕೆಗೆ ಕ್ರಮ ಕೈಗೊಳ್ಳಬೇಕು. ಭಕ್ತಾಧಿಗಳು ಇಲ್ಲಿಗೆ ರಾತ್ರಿ ಸಮಯದಲ್ಲಿಯು ಬರುವುದರಿಂದ ನಿರಂತರ ವಿದ್ಯುತ್ ಪೂರೈಸಲು ಬೆಸ್ಕಾಂ ಇಂಜಿನಿಯರ್‌ಗೆ ತಿಳಿಸಿದರು.
ಆರೋಗ್ಯ ಶಿಬಿರದ ಜೊತೆಗೆ ಸ್ಟಾಲ್‌ಗಳ ಹಾಕಿ ತುರ್ತು ಚಿಕಿತ್ಸೆ ಜೊತೆಗೆ ಆಗಮಿಸುವ ಜನರಿಗೆ ಆರೋಗ್ಯದ ಶಿಕ್ಷಣ ನೀಡಿ ಕ್ರಮ ಕೈಗೊಳ್ಳಲು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗೆ ತಿಳಿಸಿದರು. ರಾಜನಹಳ್ಳಿಗೆ ಆಗಮಿಸುವ ಭಕ್ತರಿಗೆ ತೊಂದರೆಯಾಗದಂತೆ ಹೆಚ್ಚುವರಿಯಾಗಿ ಹರಿಹರದಿಂದ ಕೆ.ಎಸ್.ಆರ್.ಟಿ.ಸಿ. ಬಸ್ ವ್ಯವಸ್ಥೆ ಕಲ್ಪಿಸಲು ನಿಗಮದ ಅಧಿಕಾರಿಗಳಿಗೆ ಸೂಚನೆ ನೀಡಿದರು.ಪ್ರಸಾದ ವ್ಯವಸ್ಥೆ: ಜಾತ್ರೆಗೆ ಆಗಮಿಸುವ ಭಕ್ತಾಧಿಗಳಿಗೆ ಇಲಾಖೆಯಿಂದ ಪ್ರಸಾದ ವ್ಯವಸ್ಥೆ ಕೈಗೊಳ್ಳಲಾಗುತ್ತಿದ್ದು ಆಗಮಿಸುವ ಎಲ್ಲಾ ಭಕ್ತರಿಗೆ ಸಕಾಲದಲ್ಲಿ ಪ್ರಸಾದ ವ್ಯವಸ್ಥೆ ಮಾಡಲು ಮತ್ತು ಹೆಚ್ಚುವರಿಯಾಗಿ ತಟ್ಟೆಗಳನ್ನಿಟ್ಟುಕೊಂಡು ಊಟದಲ್ಲಿ ವ್ಯತ್ಯಯವಾಗದಂತೆ ನೋಡಿಕೊಳ್ಳಲು ಮತ್ತು ಪ್ರಸಾದ ವಿತರಣೆಗಿಂತ ಮೊದಲು ಆರೋಗ್ಯ ಇಲಾಖೆಯಿಂದ ಸಂಪೂರ್ಣ ತಪಾಸಣೆ ಮಾಡಲು ಸೂಚನೆ ನೀಡಿದರು.
ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಸುರೇಶ್ ಇಟ್ನಾಳ್ ಮಾತನಾಡಿ, ಕುಡಿಯುವ ನೀರು ಪೂರೈಕೆ ಮತ್ತು ನಿರ್ವಹಣೆ ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿಯವರು ಹಾಗೂ ಗ್ರಾಮೀಣ ಕುಡಿಯುವ ನೀರು ವಿಭಾಗದ ಇಂಜಿನಿಯರ್ ಜೊತೆಗೆ ವಿವಿಧ ಪಂಚಾಯಿತಿಗಳಿಂದ ಇಲ್ಲಿಗೆ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ ಉಸ್ತುವಾರಿಗಾಗಿ ನೇಮಿಸಲು ಸೂಚನೆ ನೀಡಿದರು.ಈ ಸಂದರ್ಭದಲ್ಲಿ ಅಪರ ಜಿಲ್ಲಾಧಿಕಾರಿ ಪಿ.ಎನ್.ಲೋಕೇಶ್, ಹೆಚ್ಚುವರಿ ಪೊಲೀಸ್ ಅಧೀಕ್ಷಕ ಮಂಜುನಾಥ್, ಉಪವಿಭಾಗಾಧಿಕಾರಿ ದುರ್ಗಾಶ್ರೀ ಭಾಗವಹಿಸಿದ್ದರು. ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕ ನಾಗರಾಜ್ ಜಾತ್ರಾ ವೇಳೆ ಕೈಗೊಳ್ಳಬೇಕಾದ ಸಿದ್ಧತೆಗಳ ವಿವರ ನೀಡಿದರು.
....