ಸಾರಾಂಶ
ಹುಬ್ಬಳ್ಳಿ: ಹಳೇ ಬಸ್ ನಿಲ್ದಾಣವನ್ನು ಅಚ್ಚುಕಟ್ಟಾಗಿ, ನೂತನವಾಗಿ ನಿರ್ಮಿಸಲಾಗಿದೆ. ಅಧಿಕಾರಿಗಳು ಸಮರ್ಪಕ ನಿರ್ವಹಣೆ ಮಾಡಬೇಕು ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಹೇಳಿದರು.
ಅವರು ಇಲ್ಲಿನ ಹಳೇ ಬಸ್ ನಿಲ್ದಾಣದ ಆವರಣದಲ್ಲಿ ಹು-ಧಾ ಸ್ಮಾರ್ಟ್ ಸಿಟಿ ಲಿಮಿಟೆಡ್ ಅನುದಾದಡಿಯಲ್ಲಿ ಭಾನುವಾರ ಹಳೇ ಬಸ್ ನಿಲ್ದಾಣ ಅಭಿವೃದ್ಧಿ ಕಾಮಗಾರಿ ಲೋಕಾರ್ಪಣೆ ಕಾರ್ಯಕ್ರಮದಲ್ಲಿ ಮಾತನಾಡಿದರು.ಅಭಿವೃದ್ಧಿ ದೃಷ್ಟಿಕೋನವನ್ನು ಮುಂದಿಟ್ಟುಕೊಂಡು ಯೋಜನೆಗಳನ್ನು ಕಾರ್ಯರೂಪಕ್ಕೆ ತರಬೇಕಾಗುತ್ತದೆ. ಇದೇ ತಿಂಗಳಲ್ಲಿ ಹೊಸೂರು ವೃತ್ತದ ಅಭಿವೃದ್ಧಿ ಕಾಮಗಾರಿಯ ಹಿನ್ನೆಲೆಯಲ್ಲಿ ನಿವಾಸಿಗಳನ್ನು ಬೇರೆಡೆಗೆ ಸ್ಥಳಾಂತರಿಸಲಾಗುವುದು. 2051ಕ್ಕೆ ಶೇ. 50ರಷ್ಟು ನಗರಗಳು ಅಭಿವೃದ್ಧಿ ಹೊಂದಬೇಕು ಎಂಬ ಯೋಜನೆ ಹಾಕಿಕೊಳ್ಳಲಾಗುತ್ತಿದೆ. ನಗರ ಸಾರಿಗೆ, ಕುಡಿಯುವ ನೀರು, ಸ್ಥಳೀಯ ಸಾರಿಗೆ ಹಾಗೂ ವಿದ್ಯುತ್ ಸೌಲಭ್ಯಕ್ಕೆ ಹೆಚ್ಚಿನ ಆದ್ಯತೆ ನೀಡಬೇಕು ಎಂದರು.
ಸಮಗ್ರ ಅಭಿವೃದ್ಧಿಗೆ ಒತ್ತು:ಕಾರ್ಯಕ್ರಮ ಉದ್ಘಾಟಿಸಿದ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ಮಾತನಾಡಿ, ಪಕ್ಷಾತೀತವಾಗಿ ನಾವು ಕೆಲಸ ಮಾಡಬೇಕಿದೆ. ಬೆಂಗಳೂರು ನಗರಗಳಂತೆ ಮಂಗಳೂರು, ಬೆಳಗಾವಿ, ಹುಬ್ಬಳ್ಳಿ- ಧಾರವಾಡ ನಗರಗಳು ಬೆಳೆಯುತ್ತಿವೆ. ಸಮಗ್ರ ಅಭಿವೃದ್ಧಿಗೆ ಒತ್ತು ನೀಡಬೇಕಾಗಿದೆ. ಕೇಂದ್ರ ಸರ್ಕಾರ 10 ವರ್ಷಕ್ಕೆ ನೀಡುವ ₹2 ಸಾವಿರ ಕೋಟಿ ಅನುದಾನವನ್ನು ಒಂದೇ ಬಾರಿ ನೀಡಿದರೆ ಅಭಿವೃದ್ಧಿ ಸಾಧನೆಗೆ ಪೂರಕವಾಗಲಿದೆ. ಹು-ಧಾ ನಗರಗಳು ಸಹ ಅಭಿವೃದ್ಧಿ ಹೊಂದಲಿವೆ ಎಂದರು.
ಯೋಜನೆಗಳನ್ನು ಉದ್ಘಾಟಿಸಿದ ಬಳಿಕ ಏಜೆನ್ಸಿಗಳು ಅವುಗಳನ್ನು ಸಂಪೂರ್ಣವಾಗಿ ನಿರ್ವಹಣೆ ಮಾಡಲು ಅವಕಾಶ ಒದಗಿಸಬೇಕು. ಗುರಿ, ಉದ್ದೇಶಗಳನ್ನು ಇಟ್ಟುಕೊಂಡು ಯೋಜನೆಗಳನ್ನು ರೂಪಿಸಬೇಕಾಗುತ್ತದೆ. ಅಭಿವೃದ್ಧಿಯಲ್ಲಿ ಸಾರಿಗೆ ವ್ಯವಸ್ಥೆ ಬಹಳ ಪ್ರಮುಖ ಪಾತ್ರ ವಹಿಸುತ್ತದೆ ಎಂದರು.ಬೇರೆ ರಾಜ್ಯಕ್ಕಿಂತ ಕಡಿಮೆ ದರ:
ಕೆಲವು ದಿನಗಳ ಹಿಂದೆ ಬಸ್ ದರವನ್ನು ಶೇ. 15 ರಷ್ಟು ಏರಿಕೆ ಮಾಡಲಾಯಿತು. ಆದರೆ, ಕರ್ನಾಟಕ ರಾಜ್ಯವು ಅತೀ ಹೆಚ್ಚು ಸರ್ಕಾರಿ ಬಸ್ ಗಳನ್ನು ಹೊಂದಿದ ರಾಜ್ಯವಾಗಿದೆ. 25 ಸಾವಿರಕ್ಕೂ ಹೆಚ್ಚು ಸರ್ಕಾರಿ ಬಸ್‌ಗಳನ್ನು ಕರ್ನಾಟಕ ರಾಜ್ಯ ಹೊಂದಿದೆ. ಇದು ಎಲ್ಲ ಕನ್ನಡಿಗರೂ ಹೆಮ್ಮೆ ಪಡಬೇಕಾದ ವಿಷಯ. 1 ಲಕ್ಷಕ್ಕೂ ಹೆಚ್ಚು ಉದ್ಯೋಗಿಗಳಿದ್ದಾರೆ. ಒಂದು ದಿನಕ್ಕೆ ಲಕ್ಷಕ್ಕೂ ಹೆಚ್ಚು ಟ್ರಿಪ್ ಮಾಡಲಾಗುತ್ತಿದೆ. ದಿನನಿತ್ಯ ಸುಮಾರು 1.16 ಕೋಟಿ ಜನರು ಬಸ್‌ಗಳಲ್ಲಿ ಪ್ರಯಾಣಿಸುತ್ತಾರೆ. 5300 ಹೊಸ ಬಸ್‌ಗಳನ್ನು ಖರೀದಿಸಲಾಗಿದೆ. 4 ಸಾವಿರ ಜನರನ್ನು ನೇಮಕಾತಿ ಮಾಡಿಕೊಳ್ಳಲಾಗಿದೆ. ಡೀಸೆಲ್ ದರ ಹೆಚ್ಚಳವಿರುವುದರಿಂದ ಬಸ್ ದರವನ್ನು ಹೆಚ್ಚಿಸಲಾಗಿದೆ. ಮಹಾರಾಷ್ಟ್ರ, ತೆಲಂಗಾಣ ಹೋಲಿಸಿದರೆ ಬಸ್ ದರ ಕಡಿಮೆಯಿದೆ. ಸಾರ್ವಜನಿಕರ ಸಹಭಾಗಿತ್ವ ತೆಗೆದುಕೊಂಡು ಯೋಜನೆಗಳನ್ನು ರೂಪಿಸಬೇಕಾಗುತ್ತದೆ. ಸರ್ಕಾರ ಸರ್ವತೋಮುಖ ಅಭಿವೃದ್ಧಿಗೆ ಒತ್ತು ನೀಡುತ್ತಿದೆ. ಹು-ಧಾ ನಗರಗಳನ್ನು ಮುಂದಿನ ದಿನಗಳಲ್ಲಿ ಅಭಿವೃದ್ಧಿಯೆಡೆಗೆ ಕೊಂಡ್ಯೊಯಲಾಗುವುದು ಎಂದರು.ಅಧ್ಯಕ್ಷತೆ ವಹಿಸಿದ್ದ ಶಾಸಕ ಮಹೇಶ ಟೆಂಗಿನಕಾಯಿ ಮಾತನಾಡಿದರು. ಇದೇ ಸಂದರ್ಭದಲ್ಲಿ ಹು-ಧಾ ಸ್ಮಾರ್ಟ್ ಸಿಟಿ ಕಾಮಗಾರಿಗಳ ಪುಸ್ತಕ ಬಿಡುಗಡೆ ಮಾಡಲಾಯಿತು. ಶಾಸಕ ಅರವಿಂದ ಬೆಲ್ಲದ, ವಿಪ ಸದಸ್ಯ ಪ್ರದೀಪ ಶೆಟ್ಟರ, ಮಾಜಿ ಸಂಸದ ಐ.ಜಿ. ಸನದಿ, ಹೆಸ್ಕಾಂ ಅಧ್ಯಕ್ಷ ಸೈಯದ್ ಅಜೀಮಪೀರ್ ಖಾದ್ರಿ, ಪಾಲಿಕೆ ಮೇಯರ್ ರಾಮಪ್ಪ ಬಡಿಗೇರ, ಹುಡಾ ಅಧ್ಯಕ್ಷ ಶಾಕೀರ ಸನದಿ, ಅಪರ ಜಿಲ್ಲಾಧಿಕಾರಿ ಗೀತಾ ಸಿ.ಡಿ., ಎಸ್ಪಿ ಡಾ. ಗೋಪಾಲ ಬ್ಯಾಕೋಡ, ಬಿಆರ್‌ಟಿಎಸ್ ವ್ಯವಸ್ಥಾಪಕ ನಿರ್ದೇಶಕಿ ಸಾವಿತ್ರಿ ಕಡಿ, ಪಾಲಿಕೆ ಆಯುಕ್ತ ಡಾ. ಈಶ್ವರ ಉಳ್ಳಾಗಡ್ಡಿ, ಹುಡು ಆಯುಕ್ತ ಡಾ. ಸಂತೋಷಕುಮಾರ ಬಿರಾದಾರ, ಡಿಸಿಪಿ ಮಹಾನಿಂಗ ನಂದಗಾವಿ ಸೇರಿದಂತೆ ಪಾಲಿಕೆ ಸದಸ್ಯರಿದ್ದರು. ಹು-ಧಾ ಸ್ಮಾರ್ಟ್ ಸಿಟಿ ಯೋಜನೆಯ ವ್ಯವಸ್ಥಾಪಕ ನಿರ್ದೇಶಕ ಡಾ. ರುದ್ರೇಶ ಘಾಳಿ ಸ್ವಾಗತಿಸಿದರು. ಪ್ರಧಾನ ವ್ಯವಸ್ಥಾಪಕ ಶ್ರೀನಿವಾಸ ಪಾಟೀಲ ವಂದಿಸಿದರು.