ಸಾರಾಂಶ
ಕನ್ನಡಪ್ರಭ ವಾರ್ತೆ ಉಡುಪಿಉಡುಪಿ ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಅಪಘಾತಗಳು, ಪ್ರಾಣ ಕಳೆದುಕೊಳ್ಳುತ್ತಿರುವವರ ಸಂಖ್ಯೆ ಹೆಚ್ಚಾಗುತ್ತಿದೆ. ರಾ.ಹೆ. 66ರಲ್ಲಿ ಕಳೆದ ಎರಡು ತಿಂಗಳಲ್ಲಿ ನಡೆದ ರಸ್ತೆ ಅಪಘಾತದಲ್ಲಿ 8 ಮಂದಿ ಬಲಿಯಾಗಿದ್ದಾರೆ. ಈ ಹೆದ್ದಾರಿಯ ಅಗಲೀಕರಣ ಕಾಮಗಾರಿ ನಡೆಯುತ್ತಿದ್ದು, ಕಳೆದ ಎರಡು ವರ್ಷಗಳಲ್ಲಿ 250ಕ್ಕೂ ಹೆಚ್ಚು ರಸ್ತೆ ಅಪಘಾತಗಳು ಸಂಭವಿಸಿವೆ. ಅಧಿಕಾರಿಗಳು ಕೇವಲ ಟೋಲ್ ಸಂಗ್ರಹಕ್ಕಷ್ಟೇ ಗಮನ ಕೊಟ್ಟರೇ ಸಾಲದು, ರಸ್ತೆ ಸುರಕ್ಷತೆಗೂ ಆದ್ಯತೆ ನೀಡಬೇಕು ಎಂದು ಸಂಸದ ಕೋಟ ಶ್ರೀನಿವಾಸ ಪೂಜಾರಿ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳಿಗೆ ಸೂಚನೆ ನೀಡಿದರು.ಅವರು ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ರಾ.ಹೆ. 66ರ ಕಾಮಗಾರಿಗಳ ಪ್ರಗತಿಯ ಬಗ್ಗೆ ಚರ್ಚಿಸಲು ಆಯೋಜಿಸಲಾದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.ಜನರು ಟೋಲ್ ನೀಡಿ ತಮ್ಮ ವಾಹನಗಳಲ್ಲಿ ಸಂಚರಿಸುತ್ತಾರೆ. ಟೋಲ್ ಶುಲ್ಕ ಪಡೆದ ಗುತ್ತಿಗೆದಾರರು ಹೆದ್ದಾರಿ ನಿರ್ವಹಣೆಯನ್ನು ಉತ್ತಮವಾಗಿ ಮಾಡಿ, ವಾಹನಗಳ ಸುಗಮ ಸಂಚಾರಕ್ಕೆ ಅನುವು ಮಾಡಿಕೊಡುವುದು ಕರ್ತವ್ಯವಾಗಬೇಕು ಎಂದರು.ರಾ.ಹೆ. ದಾರಿದೀಪಗಳ ನಿರ್ವಹಣೆ ಸರಿಯಿಲ್ಲದೇ ಅಪಘಾತಗಳು ಆದಲ್ಲಿ ಸಂಬಂಧಪಟ್ಟ ಎಂಜಿನಿಯರ್ ಹಾಗೂ ಗುತ್ತಿಗೆದಾರರನ್ನು ಸಹ ನಿರ್ಲಕ್ಷ್ಯ ವಹಿಸಿದ ಬಗ್ಗೆ ಪ್ರಕರಣದಲ್ಲಿ ಅರೋಪಿಗಳನ್ನಾಗಿ ಮಾಡಲಾಗುವುದು ಎಂದು ಎಚ್ಚರಿಕೆ ನೀಡಿದರು.
ಶಾಸಕರಾದ ಯಶ್ಪಾಲ್ ಸುವರ್ಣ, ಸುರೇಶ್ ಶೆಟ್ಟಿ ಅವರು ರಾ.ಹೆ.ಗೆ ಸಂಬಂಧಿಸಿದ ಅನೇಕ ಸಮಸ್ಯೆಗಳನ್ನು ಸಭೆಯ ಗಮನಕ್ಕೆ ತಂದರು.ಸಭೆಯಲ್ಲಿ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ., ಜಿಲ್ಲಾ ಪೊಲೀಸ್ ಅಧೀಕ್ಷಕ ಹರಿರಾಮ್ ಶಂಕರ್, ಸಹಾಯಕ ಕಮೀಷನರ್ ರಶ್ಮಿ, ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಯೋಜನಾ ನಿರ್ದೇಶಕ ಅಬ್ದುಲ್ಲಾ ಮೊಹಮ್ಮದ್ ಅಜ್ಮಿ, ಅಧಿಕಾರಿಗಳು, ಗುತ್ತಿಗೆದಾರರುಗಳು ಉಪಸ್ಥಿತರಿದ್ದರು.