ಕನ್ನಡಪ್ರಭ ವಾರ್ತೆ ಬಾಗಲಕೋಟೆಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ–2026ರ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ನಡೆಯುತ್ತಿರುವ ವಿಶೇಷ ಮತದಾರರ ನೋಂದಣಿ ಅಭಿಯಾನದ ಕಾರ್ಯಚಟುವಟಿಕೆಗಳನ್ನು ಮತದಾರರ ಪಟ್ಟಿಯ ವೀಕ್ಷಕ ಕ್ಯಾಪ್ಟನ್ ಡಾ.ಕೆ.ರಾಜೇಂದ್ರ ಪರಿಶೀಲಿಸಿದರು.

ಕನ್ನಡಪ್ರಭ ವಾರ್ತೆ ಬಾಗಲಕೋಟೆ

ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ–2026ರ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ನಡೆಯುತ್ತಿರುವ ವಿಶೇಷ ಮತದಾರರ ನೋಂದಣಿ ಅಭಿಯಾನದ ಕಾರ್ಯಚಟುವಟಿಕೆಗಳನ್ನು ಮತದಾರರ ಪಟ್ಟಿಯ ವೀಕ್ಷಕ ಕ್ಯಾಪ್ಟನ್ ಡಾ.ಕೆ.ರಾಜೇಂದ್ರ ಪರಿಶೀಲಿಸಿದರು.ನಗರದ ವಿದ್ಯಾಗಿರಿಯ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಸ್ಥಾಪಿಸಲಾಗಿರುವ ಮತಗಟ್ಟೆ ಸಂಖ್ಯೆ 92ಕ್ಕೆ ಭೇಟಿ ನೀಡಿದ ಅವರು, ಮತದಾರರ ಪಟ್ಟಿ ಪರಿಷ್ಕರಣೆ ಹಾಗೂ ವಿಶೇಷ ನೋಂದಣಿ ಅಭಿಯಾನದಡಿ ಕೈಗೊಳ್ಳಲಾಗುತ್ತಿರುವ ಕಾರ್ಯಗಳ ಕುರಿತು ಮತಗಟ್ಟೆ ಮಟ್ಟದ ಅಧಿಕಾರಿಗಳಿಂದ ಮಾಹಿತಿ ಪಡೆದರು.

ಅರ್ಹ ಮತದಾರರ ಹೆಸರು ಸೇರ್ಪಡೆ, ಹೆಸರು ಹಾಗೂ ವಿಳಾಸ ಸೇರಿದಂತೆ ವಿವರಗಳ ತಿದ್ದುಪಡಿ, ಅರ್ಹವಲ್ಲದ ಅಥವಾ ಸ್ಥಳಾಂತರಗೊಂಡ ಮತದಾರರ ವಿವರಗಳ ಪರಿಶೀಲನೆ ಸೇರಿದಂತೆ ವಿವಿಧ ಪ್ರಕ್ರಿಯೆಗಳ ಪ್ರಗತಿಯನ್ನು ಅವರು ಪರಿಶೀಲಿಸಿದರು.

18 ವರ್ಷ ಪೂರ್ಣಗೊಂಡಿರುವ ಅರ್ಹ ಯುವ ಮತದಾರರನ್ನು ಮತದಾರರ ಪಟ್ಟಿಗೆ ಸೇರ್ಪಡೆಗೊಳಿಸುವ ಕಾರ್ಯಕ್ಕೆ ಆದ್ಯತೆ ನೀಡಬೇಕು. ಯಾವುದೇ ಅರ್ಹ ಮತದಾರರು ಪಟ್ಟಿಯಿಂದ ಹೊರಗುಳಿಯದಂತೆ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.

ಮತದಾರರು ತಮ್ಮ ಹೆಸರು ಮತದಾರರ ಪಟ್ಟಿಯಲ್ಲಿ ಇರುವುದನ್ನು ಖಚಿತಪಡಿಸಿಕೊಳ್ಳಬೇಕು. ಹೆಸರು ಸೇರ್ಪಡೆ ಅಥವಾ ವಿವರಗಳ ತಿದ್ದುಪಡಿ ಅಗತ್ಯವಿದ್ದಲ್ಲಿ ನಿಗದಿತ ನಮೂನೆಯಲ್ಲಿ ಅರ್ಜಿ ಸಲ್ಲಿಸುವ ಕುರಿತು ಸಾರ್ವಜನಿಕರಲ್ಲಿ ಹೆಚ್ಚಿನ ಜಾಗೃತಿ ಮೂಡಿಸಬೇಕು ಎಂದರು.

ಸಭೆಯಲ್ಲಿ ವಿವಿಧ ರಾಜಕೀಯ ಪಕ್ಷಗಳ ಪ್ರತಿನಿಧಿಗಳು ಮತದಾರರ ಪಟ್ಟಿ ಪರಿಷ್ಕರಣೆಗೆ ಸಂಬಂಧಿಸಿದಂತೆ ತಮ್ಮ ಅಭಿಪ್ರಾಯಗಳು, ಸಲಹೆಗಳು ಹಾಗೂ ಗಮನಕ್ಕೆ ಬಂದಿರುವ ವಿಷಯಗಳನ್ನು ವೀಕ್ಷಕರ ಗಮನಕ್ಕೆ ತಂದರು. ಮತದಾರರ ಪಟ್ಟಿ ಪರಿಷ್ಕರಣೆ ಪ್ರಕ್ರಿಯೆಯಲ್ಲಿ ಪಾರದರ್ಶಕತೆ ಕಾಯ್ದುಕೊಳ್ಳುವುದು, ಅರ್ಹ ಮತದಾರರಿಗೆ ನೋಂದಣಿಗೆ ಅವಕಾಶ ಕಲ್ಪಿಸುವುದು ಹಾಗೂ ನಿಯಮಾನುಸಾರ ಆಕ್ಷೇಪಣೆ ಮತ್ತು ತಿದ್ದುಪಡಿಗಳಿಗೆ ಅವಕಾಶ ನೀಡುವ ಕುರಿತು ಚರ್ಚೆ ನಡೆಯಿತು.ಜಿಲ್ಲೆಯಲ್ಲಿ ವಿಶೇಷ ಮತದಾರರ ನೋಂದಣಿ ಅಭಿಯಾನವನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲು ಜಿಲ್ಲಾಡಳಿತ ಹಾಗೂ ಚುನಾವಣಾ ಅಧಿಕಾರಿಗಳು ಕೈಗೊಂಡಿರುವ ಕ್ರಮಗಳ ಕುರಿತು ಸಭೆಯಲ್ಲಿ ಮಾಹಿತಿ ನೀಡಲಾಯಿತು.

ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಅಶೋಕ ತೇಲಿ, ಉಪ ವಿಭಾಗಾಧಿಕಾರಿ ಕ್ಯಾಪ್ಟನ್ ಮಹೇಶ ಮಾಲಗಿತ್ತಿ, ತಹಶೀಲ್ದಾರ್‌ ವಾಸುದೇವ ಸ್ವಾಮಿ ಸೇರಿದಂತೆ ವಿವಿಧ ರಾಜಕೀಯ ಪಕ್ಷಗಳ ಮುಖಂಡರು ಹಾಗೂ ಪ್ರತಿನಿಧಿಗಳು ಉಪಸ್ಥಿತರಿದ್ದರು.

ರಾಜಕೀಯ ಪಕ್ಷಗಳ ಪ್ರತಿನಿಧಿಗಳೊಂದಿಗೆ ಸಭೆ: ನಂತರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ವಿವಿಧ ರಾಜಕೀಯ ಪಕ್ಷಗಳ ಮುಖಂಡರು ಹಾಗೂ ಪ್ರತಿನಿಧಿಗಳೊಂದಿಗೆ ಸಭೆ ನಡೆಸಿದ ಕ್ಯಾಪ್ಟನ್ ಕೆ. ರಾಜೇಂದ್ರ ಅವರು, ವಿಶೇಷ ಸಮಗ್ರ ಪರಿಷ್ಕರಣೆ ಪ್ರಕ್ರಿಯೆಯ ಕುರಿತು ಮಾಹಿತಿ ಪಡೆದುಕೊಂಡರು. ಯುವ ಮತದಾರರ ನೋಂದಣಿ ಕಾರ್ಯಕ್ಕೆ ಎಲ್ಲ ರಾಜಕೀಯ ಪಕ್ಷಗಳ ಸಹಕಾರ ಅಗತ್ಯವಾಗಿದ್ದು, ತಮ್ಮ ಹಂತದಲ್ಲಿಯೂ ಈ ಕುರಿತು ಜಾಗೃತಿ ಮೂಡಿಸುವ ಕಾರ್ಯ ಕೈಗೊಳ್ಳಬೇಕು ಎಂದರು.