ಸಾರಾಂಶ
ಲಕ್ಷ್ಮೇಶ್ವರ ತಾಲೂಕಿನಲ್ಲಿ ಶೈಕ್ಷಣಿಕ ಕ್ಷೇತ್ರದಲ್ಲಿ ಮಹತ್ತರ ಬದಲಾವಣೆ ತರುವ ನಿಟ್ಟಿನಲ್ಲಿ ಹೆಚ್ಚಿನ ಪ್ರಯತ್ನ ಮಾಡಲಾಗುವುದು
ಲಕ್ಷ್ಮೇಶ್ವರ: ತಾಲೂಕಿನಲ್ಲಿ ಶೈಕ್ಷಣಿಕ ಚಟುವಟಿಕೆಗೆ ಹೆಚ್ಚಿನ ಪ್ರೋತ್ಸಾಹ ನೀಡುವ ಮೂಲಕ ವಿದ್ಯಾರ್ಥಿಗಳ ಕಲಿಕೆಗೆ ಒತ್ತು ನೀಡುವ ಕಾರ್ಯ ಮಾಡಲಾಗುವುದು ಎಂದು ಶಾಸಕ ಡಾ. ಚಂದ್ರು ಲಮಾಣಿ ಹೇಳಿದರು.
ಭಾನುವಾರ ಸಮೀಪದ ಗೊಜನೂರ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಪುನರುಜ್ಜೀವನ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಿ ಅವರು ಮಾತನಾಡಿದರು. ಲಕ್ಷ್ಮೇಶ್ವರ ತಾಲೂಕಿನಲ್ಲಿ ಶೈಕ್ಷಣಿಕ ಕ್ಷೇತ್ರದಲ್ಲಿ ಮಹತ್ತರ ಬದಲಾವಣೆ ತರುವ ನಿಟ್ಟಿನಲ್ಲಿ ಹೆಚ್ಚಿನ ಪ್ರಯತ್ನ ಮಾಡಲಾಗುವುದು ಎಂದು ಹೇಳಿದರು. ಗೊಜನೂರ ಗ್ರಾಮದ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ವಿದ್ಯಾರ್ಥಿಗಳು ಜಿಲ್ಲೆಗೆ ಪ್ರಥಮ ಸ್ಥಾನ ಗಳಿಸುವ ಮೂಲಕ ತಾಲೂಕಿನ ಕೀರ್ತಿ ಹೆಚ್ಚಿಸಿದ್ದಾರೆ. ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿನ ವಿದ್ಯಾರ್ಥಿಗಳ ಸಂಖ್ಯೆಗೆ ಅನುಗುಣವಾಗಿ ಕೊಠಡಿಗಳ ನಿರ್ಮಾಣ, ಶಾಲಾ ಕಾಂಪೌಂಡ್ ನಿರ್ಮಾಣ, ಸಿಸಿ ರಸ್ತೆ ಕಾಮಗಾರಿ ಹೀಗೆ ಹತ್ತು ಹಲವು ಕಾಮಗಾರಿಗಳಿಗೆ ಚಾಲನೆ ನೀಡಲಾಗಿದೆ. ಸುಮಾರು ₹2 ಕೋಟಿ ವೆಚ್ಚದಲ್ಲಿ ಶಾಲೆಯಲ್ಲಿನ ವಿವಿಧ ಕಾಮಗಾರಿಗಳಿಗೆ ಚಾಲನೆ ನೀಡಲಾಗಿದೆ. ವಿದ್ಯಾರ್ಥಿಗಳು ಈ ಸೌಲಭ್ಯಗಳನ್ನು ಉಪಯೋಗಿಸಿಕೊಂಡು ರಾಜ್ಯ ಮಟ್ಟದಲ್ಲಿ ಶಾಲೆಯ ಕೀರ್ತಿ ತರುವ ಕಾರ್ಯ ಮಾಡಬೇಕು. ಶಾಲೆಗಳು ದೇವಸ್ಥಾನಕ್ಕಿಂತ ಮಿಗಿಲಾಗಿದ್ದು, ಇಲ್ಲಿ ಕೈಗೊಳ್ಳುವ ಕಾಮಗಾರಿಗಳನ್ನು ಗುತ್ತಿಗೆದಾರರು ಗುಣಮಟ್ಟದಿಂದ ನಿರ್ವಹಿಸಬೇಕು. ಅಂದಾಗ ಮಾತ್ರ ದೇವರು ಮೆಚ್ಚುತ್ತಾನೆ ಎಂದು ಹೇಳಿದರು.ರಮೇಶ ದನದಮನಿ, ಚಂದ್ರಣ್ಣ ಮಾಡಳ್ಳಿ, ಗ್ರಾಪಂ ಅಧ್ಯಕ್ಷ ಮಂಜುನಾಥ ಮಾದರ, ಗ್ರಾಮದ ಅಭಿವೃದ್ಧಿಗೆ ರಾಜಕೀಯ ಮರೆತು ದುಡಿಯಲು ನಾವು ಸಿದ್ಧರಿದ್ದೇವೆ ಎಂದು ಹೇಳಿದರು.
ಶಾಲೆ ಮುಖ್ಯೋಪಾಧ್ಯಾಯ ಎನ್.ಕೆ. ಹತ್ತಿಕಾಳ ಪ್ರಾಸ್ತಾವಿಕವಾಗಿ ಮಾತನಾಡಿದರು. ಗ್ರಾಪಂ ಉಪಾಧ್ಯಕ್ಷ ಮಹಾಂತೇಶಗೌಡ ಪಾಟೀಲ, ಚಂದ್ರಗೌಡ ಪಾಟೀಲ, ಮಂಜುನಾಥ ಕಣವಿ, ಸಂಗನಗೌಡ ಪಾಟೀಲ, ಜಾನು ಲಮಾಣಿ, ನಾಗರಾಜ ಕುಲಕರ್ಣಿ, ಸಿ.ಆರ್. ಕೆಂಚಕ್ಕನವರ, ಗುತ್ತಿಗೆದಾರ ಅನಿಲ ಚೌರೆಡ್ಡಿ ಇದ್ದರು.