ಬಾಗಲಕೋಟೆ ಮತಕ್ಷೇತ್ರದ ಸರ್ಕಾರಿ ಶಾಲೆಗಳಲ್ಲಿ ಹಂತ ಹಂತವಾಗಿ ಸ್ಮಾರ್ಟ್ ಕ್ಲಾಸ್ ಹಾಗೂ ಡಿಜಿಟಲ್ ಶಿಕ್ಷಣ ಸೌಲಭ್ಯಗಳನ್ನು ಕಲ್ಪಿಸಲಾಗುವುದು. ಗ್ರಾಮೀಣ ಭಾಗದ ಸರ್ಕಾರಿ ಶಾಲೆಗಳನ್ನು ದುರಸ್ತಿಗೊಳಿಸುವುದರ ಜೊತೆಗೆ ಪ್ರತಿ ಗ್ರಾಮದಲ್ಲಿ ಗ್ರಂಥಾಲಯ ನಿರ್ಮಿಸಲು ಆದ್ಯತೆ ನೀಡಲಾಗುವುದು ಎಂದು ಶಾಸಕ ಉಮೇಶ ಮೇಟಿ ತಿಳಿಸಿದರು.
ಕನ್ನಡಪ್ರಭ ವಾರ್ತೆ ಬಾಗಲಕೋಟೆ
ಬಾಗಲಕೋಟೆ ಮತಕ್ಷೇತ್ರದ ಸರ್ಕಾರಿ ಶಾಲೆಗಳಲ್ಲಿ ಹಂತ ಹಂತವಾಗಿ ಸ್ಮಾರ್ಟ್ ಕ್ಲಾಸ್ ಹಾಗೂ ಡಿಜಿಟಲ್ ಶಿಕ್ಷಣ ಸೌಲಭ್ಯಗಳನ್ನು ಕಲ್ಪಿಸಲಾಗುವುದು. ಗ್ರಾಮೀಣ ಭಾಗದ ಸರ್ಕಾರಿ ಶಾಲೆಗಳನ್ನು ದುರಸ್ತಿಗೊಳಿಸುವುದರ ಜೊತೆಗೆ ಪ್ರತಿ ಗ್ರಾಮದಲ್ಲಿ ಗ್ರಂಥಾಲಯ ನಿರ್ಮಿಸಲು ಆದ್ಯತೆ ನೀಡಲಾಗುವುದು ಎಂದು ಶಾಸಕ ಉಮೇಶ್ ಮೇಟಿ ತಿಳಿಸಿದರು.ಸ್ವಗ್ರಾಮ ತಿಮ್ಮಾಪುರದಲ್ಲಿ ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಬಾಗಲಕೋಟೆ ತಾಲೂಕು ಘಟಕದ 2026-2031ರ ಅವಧಿಗೆ ಆಯ್ಕೆಯಾದ ನೂತನ ಪದಾಧಿಕಾರಿಗಳ ಪದಗ್ರಹಣ ಹಾಗೂ ಅಭಿನಂದನಾ ಸಮಾರಂಭದಲ್ಲಿ ಅವರು ಮಾತನಾಡಿದರು.
ಈಗಾಗಲೇ ಕೆಲವು ಗ್ರಾಮಗಳಲ್ಲಿ ಗ್ರಂಥಾಲಯಗಳನ್ನು ನಿರ್ಮಿಸಲಾಗಿದೆ. ಶಾಲೆಗಳಲ್ಲಿ ಆಹಾರದ ಗುಣಮಟ್ಟ ಕಾಪಾಡಲು ಕ್ಲಸ್ಟರ್ ಕಿಚನ್ ವ್ಯವಸ್ಥೆ ಜಾರಿಗೆ ತರುವ ಕುರಿತು ಸರ್ಕಾರದ ಮಟ್ಟದಲ್ಲಿ ಚರ್ಚಿಸಲಾಗುವುದು ಎಂದು ತಿಳಿಸಿದರು.ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಚಂದ್ರಶೇಖರ್ ನುಗ್ಲಿ ಮಾತನಾಡಿ, ದಿ.ಎಚ್.ವೈ. ಮೇಟಿ ಅವರ ಜನಸೇವೆಯ ಪರಂಪರೆ ಮುಂದುವರಿಸಿಕೊಂಡು ಹೋಗುತ್ತಿರುವ ಶಾಸಕ ಉಮೇಶ್ ಮೇಟಿ ಅವರು ಜನರ ಸಮಸ್ಯೆಗಳಿಗೆ ಪ್ರಾಮಾಣಿಕವಾಗಿ ಸ್ಪಂದಿಸುತ್ತಿದ್ದಾರೆ. ಶಿಕ್ಷಕರೊಂದಿಗೆ ಆತ್ಮೀಯ ಸಂಬಂಧ ಹೊಂದಿರುವ ಅವರು, ಶಿಕ್ಷಕರ ನ್ಯಾಯಯುತ ಬೇಡಿಕೆಗಳಿಗೂ ಬೆಂಬಲ ನೀಡುತ್ತಿದ್ದಾರೆ ಎಂದರು.
ಕ್ಷೇತ್ರದ ಮೊದಲ ಹಂತದಲ್ಲಿ ಸುಮಾರು 100 ಸರ್ಕಾರಿ ಶಾಲೆಗಳನ್ನು ಆಯ್ಕೆ ಮಾಡಿ ಸ್ಮಾರ್ಟ್ ಕ್ಲಾಸ್ ಸೌಲಭ್ಯ ಕಲ್ಪಿಸಬೇಕು. ಶಾಲೆಗಳಲ್ಲಿ ಮಕ್ಕಳಿಗೆ ಗುಣಮಟ್ಟದ ಬಿಸಿಯೂಟ ಹಾಗೂ ಮೊಟ್ಟೆ ಸೇರಿ ಪೌಷ್ಟಿಕ ಆಹಾರ ಒದಗಿಸಬೇಕು. ಆಹಾರದ ಗುಣಮಟ್ಟ ಕಾಪಾಡಲು ಕ್ಲಸ್ಟರ್ ಕಿಚನ್ ವ್ಯವಸ್ಥೆ ಜಾರಿಗೆ ತರಲು ಸರ್ಕಾರ ಚಿಂತನೆ ನಡೆಸಬೇಕು ಎಂದು ಶಾಸಕರಿಗೆ ಮನವಿ ಮಾಡಿದರು.ತಾಲೂಕು ಅಧ್ಯಕ್ಷ ಸಿ.ಜಿ. ಮಲ್ಲನಗೌಡ, ಪ್ರಧಾನ ಕಾರ್ಯದರ್ಶಿ ಎಸ್.ವಿ. ಬಂಗಿ, ಉಪಾಧ್ಯಕ್ಷರಾದ ಎಚ್.ಎಸ್. ಪೂಜಾರ, ಎಸ್.ಎಚ್. ಕಂದಗಲ ಸೇರಿನೂತನ ಪದಾಧಿಕಾರಿಗಳನ್ನು ಶಾಸಕ ಉಮೇಶ್ ಮೇಟಿ ಸನ್ಮಾನಿಸಿ ಅಭಿನಂದಿಸಿದರು.
ಈ ಸಂದರ್ಭದಲ್ಲಿ ಚುನಾವಣಾಧಿಕಾರಿ ಎಸ್.ಎಸ್. ರಕರಡ್ಡಿ, ಪರಶುರಾಮ ಮಹಾರಾಜನವರ, ಐ.ಡಿ. ಅತ್ತಾರ, ಎಸ್.ಬಿ. ಮಾಚ್ಚಾ, ಮಲ್ಲು ಜಕಾತಿ, ಕಲ್ಲು ಹಳ್ಳೂರ, ರಾಯಪ್ಪ ವಾಲಿಕಾರ ಹಾಗೂ ಶ್ರೀಕರ್ ದೇಸಾಯಿ ಸೇರಿದಂತೆ ಶಿಕ್ಷಕ ಸಂಘದ ಪದಾಧಿಕಾರಿಗಳು ಮತ್ತು ಶಿಕ್ಷಕರು ಉಪಸ್ಥಿತರಿದ್ದರು.