ಪಕ್ಷದ ಸಂಘಟನೆಯನ್ನು ಗ್ರಾಮ ಮಟ್ಟದಿಂದಲೇ ಬಲಪಡಿಸುವ ಮೂಲಕ ಕಾರ್ಯಕರ್ತರು ಈಗಿನಿಂದಲೇ ಚುನಾವಣಾ ಸಿದ್ಧತೆಯಲ್ಲಿ ತೊಡಗಿಸಿಕೊಳ್ಳಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಕರೆ ನೀಡಿದರು.
ಬಳ್ಳಾರಿ: ಮುಂಬರುವ ಜಿಲ್ಲಾ ಪಂಚಾಯಿತಿ ಹಾಗೂ ತಾಲೂಕು ಪಂಚಾಯಿತಿ ಚುನಾವಣೆಯನ್ನು ಗಂಭೀರವಾಗಿ ಪರಿಗಣಿಸಿ, ಪಕ್ಷದ ಸಂಘಟನೆಯನ್ನು ಗ್ರಾಮ ಮಟ್ಟದಿಂದಲೇ ಬಲಪಡಿಸುವ ಮೂಲಕ ಕಾರ್ಯಕರ್ತರು ಈಗಿನಿಂದಲೇ ಚುನಾವಣಾ ಸಿದ್ಧತೆಯಲ್ಲಿ ತೊಡಗಿಸಿಕೊಳ್ಳಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಕರೆ ನೀಡಿದರು.
ನಗರದ ಬಿಜೆಪಿ ಜಿಲ್ಲಾ ಕಚೇರಿಯಲ್ಲಿ ಬುಧವಾರ ಮತದಾರರ ಪಟ್ಟಿ ಪರಿಷ್ಕರಣೆ ಹಿನ್ನೆಲೆಯಲ್ಲಿ ಜರುಗಿದ ಪಕ್ಷದ ಪ್ರಮುಖರು, ಪದಾಧಿಕಾರಿಗಳು ಹಾಗೂ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದರು. ಜಿಲ್ಲಾ ಮತ್ತು ತಾಲೂಕು ಪಂಚಾಯಿತಿ ಚುನಾವಣೆ ಮುಂದಿನ ವಿಧಾನಸಭಾ ಚುನಾವಣೆಗೆ ಭದ್ರ ಬುನಾದಿಯಾಗಲಿದೆ ಎಂದು ಹೇಳಿದರು."ಗ್ರಾಮೀಣ ಪ್ರದೇಶಗಳಲ್ಲಿ ಪಕ್ಷದ ಸಂಘಟನೆ ಗಟ್ಟಿಯಾಗಿದ್ದರೆ ಮಾತ್ರ ವಿಧಾನಸಭಾ ಚುನಾವಣೆಯಲ್ಲಿ ಉತ್ತಮ ಫಲಿತಾಂಶ ಸಾಧಿಸಲು ಸಾಧ್ಯವಾಗುತ್ತದೆ. ಆದ್ದರಿಂದ ಪ್ರತಿಯೊಬ್ಬ ಕಾರ್ಯಕರ್ತರೂ ಪಕ್ಷದ ಸಂಘಟನೆಯನ್ನು ಮನೆಮನೆಗೂ ತಲುಪಿಸುವ ಕೆಲಸ ಮಾಡಬೇಕು. ರಾಜ್ಯದ ಎಲ್ಲ ವಿಧಾನಸಭಾ ಕ್ಷೇತ್ರಗಳಿಗೆ ಭೇಟಿ ನೀಡಿ ಕಾರ್ಯಕರ್ತರೊಂದಿಗೆ ನೇರವಾಗಿ ಚರ್ಚಿಸಿ ಸಂಘಟನೆಗೆ ಮತ್ತಷ್ಟು ಚೈತನ್ಯ ತುಂಬುವ ಕೆಲಸ ಮಾಡುತ್ತೇನೆ " ಎಂದು ತಿಳಿಸಿದರು.
ಜಿಪಂ ಮತ್ತು ತಾಪಂ ಚುನಾವಣೆಯಲ್ಲಿ ಟಿಕೆಟ್ ಹಂಚಿಕೆ ಕುರಿತು ಮಾತನಾಡಿದ ಅವರು, ಹಣದ ಬಲ ಅಥವಾ ಗುತ್ತಿಗೆದಾರರಿಗೆ ಆದ್ಯತೆ ನೀಡುವ ಬದಲು ಪಕ್ಷಕ್ಕಾಗಿ ವರ್ಷಗಳಿಂದ ದುಡಿಯುತ್ತಿರುವ ನಿಷ್ಠಾವಂತ ಕಾರ್ಯಕರ್ತರಿಗೆ ಅವಕಾಶ ಕಲ್ಪಿಸಲಾಗುವುದು ಎಂದು ಸ್ಪಷ್ಟಪಡಿಸಿದರು. ಹೀಗಾಗಿ ಕಾರ್ಯಕರ್ತರು ನಿರಂತರವಾಗಿ ಜನಸಂಪರ್ಕ ಬೆಳೆಸಿ, ಪಕ್ಷದ ಬೆಳವಣಿಗೆಗೆ ಶ್ರಮಿಸಬೇಕು ಎಂದು ಸಲಹೆ ನೀಡಿದರು.ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆ (ಎಸ್‌ಐಆರ್) ಕುರಿತು ಮಾತನಾಡಿದ ವಿಜಯೇಂದ್ರ, ಚುನಾವಣಾ ಆಯೋಗ ಕೈಗೊಂಡಿರುವ ಈ ಪ್ರಕ್ರಿಯೆ ಪಾರದರ್ಶಕ ಹಾಗೂ ಸಮರ್ಪಕವಾಗಿ ಜಾರಿಯಾಗಬೇಕು ಎಂದು ಒತ್ತಾಯಿಸಿದರು.
ಪಶ್ಚಿಮ ಬಂಗಾಳದಲ್ಲಿ ಎಸ್‌ಐಆರ್ ಮೂಲಕ ಬೋಗಸ್ ಮತದಾರರು ಹಾಗೂ ಅಕ್ರಮ ವಲಸಿಗರ ಹೆಸರುಗಳನ್ನು ಪಟ್ಟಿಯಿಂದ ತೆಗೆದುಹಾಕಲು ಸಾಧ್ಯವಾಯಿತು ಎಂದು ಹೇಳಿದ ಅವರು, ಕರ್ನಾಟಕದಲ್ಲಿಯೂ ಯಾವುದೇ ಅಕ್ರಮ ಅಥವಾ ನಕಲಿ ಮತದಾರರಿಗೆ ಅವಕಾಶ ಸಿಗದಂತೆ ಪಕ್ಷದ ಕಾರ್ಯಕರ್ತರು ಜಾಗೃತಿಯಿಂದ ಕೆಲಸ ಮಾಡಬೇಕು ಎಂದು ಸೂಚಿಸಿದರು."ಚುನಾವಣೆಯಲ್ಲಿ ಅಭ್ಯರ್ಥಿಯ ಗೆಲುವಿಗಾಗಿ ಶ್ರಮಿಸುವಷ್ಟೇ ಮಹತ್ವ ಮತದಾರರ ಪಟ್ಟಿಯ ಪರಿಷ್ಕರಣೆಯಲ್ಲಿಯೂ ಇದೆ. ಮತದಾರರ ಪಟ್ಟಿಯಲ್ಲಿ ಅರ್ಹ ಮತದಾರರ ಹೆಸರು ಕೈ ತಪ್ಪದಂತೆ ನೋಡಿಕೊಳ್ಳಬೇಕು. ಈ ಪ್ರಕ್ರಿಯೆಯಲ್ಲಿ ನಿರ್ಲಕ್ಷ್ಯ ವಹಿಸಿದರೆ ಮುಂದಿನ ಹಲವು ವರ್ಷಗಳ ರಾಜಕೀಯ ಭವಿಷ್ಯದ ಮೇಲೆಯೇ ಪರಿಣಾಮ ಬೀಳಬಹುದು. ಹೀಗಾಗಿ ಪ್ರತಿಯೊಬ್ಬ ಕಾರ್ಯಕರ್ತರೂ ಎಸ್‌ಐಆರ್ ಪ್ರಕ್ರಿಯೆಯಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳಬೇಕು " ಎಂದು ಹೇಳಿದರು.
ಸಭೆಯಲ್ಲಿ ಮಾಜಿ ಸಚಿವರಾದ ಜಿ. ಜನಾರ್ದನ ರೆಡ್ಡಿ ಹಾಗೂ ಬಿ. ಶ್ರೀರಾಮುಲು ಮಾತನಾಡಿ, ರಾಜ್ಯದಲ್ಲಿ ಎಸ್‌ಐಆರ್ ಅನುಷ್ಠಾನದ ವೇಳೆ ಕಂಡುಬರುತ್ತಿರುವ ಲೋಪಗಳು ಹಾಗೂ ಕಾಂಗ್ರೆಸ್ ಸರ್ಕಾರದ ಜನವಿರೋಧಿ ಆಡಳಿತವನ್ನು ಟೀಕಿಸಿದರು. ಸರ್ಕಾರದ ವೈಫಲ್ಯಗಳನ್ನು ಜನರ ಮುಂದೆ ಪರಿಣಾಮಕಾರಿಯಾಗಿ ತೆಗೆದುಕೊಂಡು ಹೋಗುವ ಮೂಲಕ ಪಕ್ಷವನ್ನು ಮತ್ತಷ್ಟು ಬಲಪಡಿಸುವ ಅಗತ್ಯವಿದೆ ಎಂದು ಅಭಿಪ್ರಾಯಪಟ್ಟರು.ಸಭೆಯಲ್ಲಿ ಶಾಸಕ ವೈ.ಎಂ. ಸತೀಶ್, ಬಿಜೆಪಿ ಜಿಲ್ಲಾಧ್ಯಕ್ಷ ಅನಿಲ್ ಕುಮಾರ್ ಮೋಕಾ, ಮಾಜಿ ಶಾಸಕರಾದ ಜಿ. ಸೋಮಶೇಖರ ರೆಡ್ಡಿ, ಎಂ.ಎಸ್. ಸೋಮಲಿಂಗಪ್ಪ, ಸುರೇಶ್‌ಬಾಬು, ಲಕ್ಷ್ಮಿ ಅರುಣಾ, ಡಾ. ಮಹಿಪಾಲ್, ಮಾಜಿ ಸಂಸದ ಸಣ್ಣ ಫಕ್ಕೀರಪ್ಪ, ಜಿಲ್ಲಾ ಮುಖಂಡರಾದ ಕೆ.ಎ. ರಾಮಲಿಂಗಪ್ಪ, ಎಸ್. ಗುರುಲಿಂಗನಗೌಡ, ಎಚ್. ಹನುಮಂತಪ್ಪ, ಕೆ.ಎಸ್. ದಿವಾಕರ್, ಕೆ.ಎಂ. ಮಹೇಶ್ವರಸ್ವಾಮಿ, ಡಾ. ಅರುಣಾ ಕಾಮಿನೇನಿ, ಮುರಹರಗೌಡ ಗೋನಾಳ್, ವಿಜಯಲಕ್ಷ್ಮಿ, ಸುಗುಣ ಸೇರಿದಂತೆ ಪಕ್ಷದ ಅನೇಕ ಪ್ರಮುಖರು ಮತ್ತು ಕಾರ್ಯಕರ್ತರು ಉಪಸ್ಥಿತರಿದ್ದರು.