ಹೆಚ್ಚಿನ ಸಂಖ್ಯೆಯಲ್ಲಿ ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿರುವ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗಳನ್ನು ಖಾಸಗಿ ಕಂಪನಿಗಳ ಸಹಭಾಗಿತ್ವದಲ್ಲಿ ಅಭಿವೃದ್ಧಿಪಡಿಸುವ ಯೋಜನೆಯಡಿ ಬಾಣಾವರದ ಮಕ್ಕಳ ಮನೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಆಯ್ಕೆಯಾಗಿದೆ. ಸುಮಾರು 10 ಕೋಟಿ ವೆಚ್ಚದಲ್ಲಿ ಆಧುನಿಕ ಸೌಲಭ್ಯಗಳನ್ನು ಒಳಗೊಂಡ ಬೃಹತ್ ಶಾಲಾ ಕಟ್ಟಡ ನಿರ್ಮಾಣವಾಗಲಿದೆ ಎಂದು ತಿಳಿಸಿದರು. ತಾಲೂಕಿನಲ್ಲಿ ನಡೆಯುತ್ತಿರುವ ಶೈಕ್ಷಣಿಕ ಅಭಿವೃದ್ಧಿ ಕಾರ್ಯಗಳ ಶ್ರೇಯಸ್ಸು ಜಿಲ್ಲೆಯ ಸಚಿವರಿಗೆ ಸಲ್ಲುತ್ತದೆ. ಇನ್ನೂ ಹಲವು ಅಭಿವೃದ್ಧಿ ಕಾರ್ಯಗಳ ಕುರಿತು ಅವರ ಚಿಂತನೆಯಿದ್ದು, ಮುಂದಿನ ದಿನಗಳಲ್ಲಿ ಅವುಗಳೂ ಅನುಷ್ಠಾನಗೊಳ್ಳುವ ನಿರೀಕ್ಷೆಯಿದೆ ಎಂದರು.
ಕನ್ನಡಪ್ರಭ ವಾರ್ತೆ ಅರಸೀಕೆರೆ
ತಾಲೂಕಿನಲ್ಲಿ ಶಿಕ್ಷಣ ಕ್ಷೇತ್ರವನ್ನು ಮತ್ತಷ್ಟು ಬಲಪಡಿಸುವ ನಿಟ್ಟಿನಲ್ಲಿ ಸರ್ಕಾರಿ ಶಾಲೆಗಳ ಮೂಲಸೌಕರ್ಯ ಅಭಿವೃದ್ಧಿ ಸೇರಿದಂತೆ ಹಲವು ಮಹತ್ವದ ಯೋಜನೆಗಳು ಅನುಷ್ಠಾನಗೊಳ್ಳುತ್ತಿದ್ದು, ಶೈಕ್ಷಣಿಕ ಪ್ರಗತಿಗೆ ಹೊಸ ವೇಗ ದೊರೆತಿದೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಮೋಹನ್ ಕುಮಾರ್ ಹೇಳಿದರು.ನಗರದ ಕ್ರೀಡಾಂಗಣದಲ್ಲಿ ನಡೆದ ಕಸಬಾ-2 ಪ್ರೌಢಶಾಲೆಗಳ ಕ್ರೀಡಾಕೂಟವನ್ನು ಉದ್ಘಾಟಿಸಿ ಮಾತನಾಡಿದ ಅವರು, ದೇಶದ ಸರ್ವತೋಮುಖ ಅಭಿವೃದ್ಧಿಗೆ ಗುಣಮಟ್ಟದ ಶಿಕ್ಷಣ ಅತ್ಯಂತ ಅಗತ್ಯ. ತಾಲೂಕಿನಲ್ಲಿ ಶಿಕ್ಷಣ ಕ್ಷೇತ್ರಕ್ಕೆ ಹಾಲಿ ಸಚಿವರು ಶಾಸಕರಾಗಿದ್ದ ಅವಧಿಯಿಂದಲೇ ಹೆಚ್ಚಿನ ಆದ್ಯತೆ ನೀಡುತ್ತಾ ಬಂದಿದ್ದು, ಇದರ ಪರಿಣಾಮವಾಗಿ ಹಲವು ಅಭಿವೃದ್ಧಿ ಕಾರ್ಯಗಳು ಸಾಕಾರಗೊಂಡಿವೆ ಎಂದರು. ತಾಲೂಕಿನಲ್ಲಿ ಎಂಜಿನಿಯರಿಂಗ್ ಕಾಲೇಜು, ಪಾಲಿಟೆಕ್ನಿಕ್ ಹಾಗೂ ವಸತಿ ಶಾಲೆಗಳು ಈಗಾಗಲೇ ಕಾರ್ಯಾರಂಭ ಮಾಡಿವೆ. ಇದೀಗ ಹೆಚ್ಚಿನ ಸಂಖ್ಯೆಯಲ್ಲಿ ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿರುವ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗಳನ್ನು ಖಾಸಗಿ ಕಂಪನಿಗಳ ಸಹಭಾಗಿತ್ವದಲ್ಲಿ ಅಭಿವೃದ್ಧಿಪಡಿಸುವ ಯೋಜನೆಯಡಿ ಬಾಣಾವರದ ಮಕ್ಕಳ ಮನೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಆಯ್ಕೆಯಾಗಿದೆ. ಸುಮಾರು 10 ಕೋಟಿ ವೆಚ್ಚದಲ್ಲಿ ಆಧುನಿಕ ಸೌಲಭ್ಯಗಳನ್ನು ಒಳಗೊಂಡ ಬೃಹತ್ ಶಾಲಾ ಕಟ್ಟಡ ನಿರ್ಮಾಣವಾಗಲಿದೆ ಎಂದು ತಿಳಿಸಿದರು. ತಾಲೂಕಿನಲ್ಲಿ ನಡೆಯುತ್ತಿರುವ ಶೈಕ್ಷಣಿಕ ಅಭಿವೃದ್ಧಿ ಕಾರ್ಯಗಳ ಶ್ರೇಯಸ್ಸು ಜಿಲ್ಲೆಯ ಸಚಿವರಿಗೆ ಸಲ್ಲುತ್ತದೆ. ಇನ್ನೂ ಹಲವು ಅಭಿವೃದ್ಧಿ ಕಾರ್ಯಗಳ ಕುರಿತು ಅವರ ಚಿಂತನೆಯಿದ್ದು, ಮುಂದಿನ ದಿನಗಳಲ್ಲಿ ಅವುಗಳೂ ಅನುಷ್ಠಾನಗೊಳ್ಳುವ ನಿರೀಕ್ಷೆಯಿದೆ ಎಂದರು.
ವಿದ್ಯಾರ್ಥಿಗಳು ಪಠ್ಯ ಚಟುವಟಿಕೆಗಳ ಜತೆಗೆ ಕ್ರೀಡಾ ಚಟುವಟಿಕೆಗಳಲ್ಲೂ ಸಕ್ರಿಯವಾಗಿ ಪಾಲ್ಗೊಳ್ಳಬೇಕು. ಕೇವಲ ಓದಿನ ಕಡೆಗೆ ಗಮನಹರಿಸಿ ದೈಹಿಕ ಚಟುವಟಿಕೆಗಳಿಂದ ದೂರ ಉಳಿದರೆ ಮುಂದಿನ ದಿನಗಳಲ್ಲಿ ಆರೋಗ್ಯ ಸಮಸ್ಯೆಗಳನ್ನು ಎದುರಿಸುವ ಸಾಧ್ಯತೆ ಇದೆ. ದೈಹಿಕ ಮತ್ತು ಮಾನಸಿಕ ಆರೋಗ್ಯ ಕಾಪಾಡಿಕೊಳ್ಳಲು ಕ್ರೀಡೆಗಳು ಪ್ರಮುಖ ಪಾತ್ರ ವಹಿಸುತ್ತವೆ ಎಂದರು. ಕ್ರೀಡೆಯಲ್ಲಿ ಸೋಲು-ಗೆಲುವು ಸಹಜ. ಫಲಿತಾಂಶಕ್ಕಿಂತ ಕ್ರೀಡೆಯಲ್ಲಿ ಭಾಗವಹಿಸುವ ಮನೋಭಾವ, ಶಿಸ್ತು ಮತ್ತು ಆರೋಗ್ಯಕರ ಸ್ಪರ್ಧಾ ಮನೋಭಾವ ಮುಖ್ಯ. ವಿದ್ಯಾರ್ಥಿಗಳು ಕ್ರೀಡೆಗೆ ಹೆಚ್ಚಿನ ಆದ್ಯತೆ ನೀಡಬೇಕು ಎಂದು ಸಲಹೆ ನೀಡಿದರು.ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಚೆಲ್ಲಾಪುರ ಸರ್ಕಾರಿ ಪ್ರೌಢಶಾಲೆಯ ಮುಖ್ಯಶಿಕ್ಷಕ ಹಾಗೂ ಕ್ರೀಡಾಕೂಟದ ಪ್ರಾಯೋಜಕ ನಾಗಪ್ಪ ಮಾತನಾಡಿ, ನಗರದ ಕ್ರೀಡಾಂಗಣದಲ್ಲಿ ಕ್ರೀಡಾಕೂಟ ಆಯೋಜಿಸಲು ಶಿಕ್ಷಣ ಇಲಾಖೆ ತಮ್ಮ ಶಾಲೆಗೆ ಅವಕಾಶ ನೀಡಿರುವುದು ಸಂತಸ ತಂದಿದೆ. ತಾಲೂಕಿನ ದೈಹಿಕ ಶಿಕ್ಷಣ ಶಿಕ್ಷಕರು ಕ್ರೀಡಾಕೂಟದ ಯಶಸ್ಸಿಗೆ ಉತ್ತಮ ಸಹಕಾರ ನೀಡುತ್ತಿದ್ದಾರೆ ಎಂದರು.ಕ್ರೀಡಾಕೂಟದಲ್ಲಿ ತೀರ್ಪುಗಾರರು ನಿಷ್ಪಕ್ಷಪಾತವಾಗಿ ತೀರ್ಪು ನೀಡುವ ಮೂಲಕ ಪ್ರತಿಭಾವಂತ ಕ್ರೀಡಾಪಟುಗಳನ್ನು ಗುರುತಿಸಬೇಕು ಎಂದು ಮನವಿ ಮಾಡಿದರು.ಕಾರ್ಯಕ್ರಮದಲ್ಲಿ ಸರ್ಕಾರಿ ನೌಕರರ ಸಂಘದ ಉಪಾಧ್ಯಕ್ಷೆ ಕಮಲ, ಕ್ಷೇತ್ರ ಸಮನ್ವಯ ಅಧಿಕಾರಿ (ಪ್ರಭಾರ) ಕುಮಾರ್, ಶಾಲಾ ಮುಖ್ಯಶಿಕ್ಷಕರ ಸಂಘದ ಅಧ್ಯಕ್ಷ ಮೋತಿಲಾಲ್, ಸಹಶಿಕ್ಷಕರ ಸಂಘದ ಅಧ್ಯಕ್ಷ ಹಿರೇಮಠ್, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಮಾಜಿ ಅಧ್ಯಕ್ಷ ಸದಾನಂದಮೂರ್ತಿ ಸೇರಿದಂತೆ ವಿವಿಧ ಸಂಘಟನೆಗಳ ಪದಾಧಿಕಾರಿಗಳು ಹಾಗೂ ಶಿಕ್ಷಕರು ಉಪಸ್ಥಿತರಿದ್ದು, ಕ್ರೀಡಾಪಟುಗಳಿಗೆ ಶುಭ ಹಾರೈಸಿದರು.