ಬೀದಿ ಬದಿ ಆಹಾರ ತಯಾರಕರಿಗಾಗಿ ಪ್ರತ್ಯೇಕ ಫುಡ್ ಕೋರ್ಟ್ ನಿರ್ಮಿಸಲಾಗುವುದು ಎಂದು ಭರವಸೆ ನೀಡಿದರು.ಬಿ.ಹೆಚ್. ರಸ್ತೆಯ ಹಳೆಯ ತರಕಾರಿ ಮಾರುಕಟ್ಟೆಯ ಅಂಗಡಿಗಳನ್ನು ಸಂತೆ ಮೈದಾನದ ನೂತನ ಮಳಿಗೆಗಳಿಗೆ ಸ್ಥಳಾಂತರಿಸಿ, ಹಳೆಯ ತರಕಾರಿ ಮಾರುಕಟ್ಟೆ ಪ್ರದೇಶದಲ್ಲೇ ಫುಡ್ ಕೋರ್ಟ್ ಅಭಿವೃದ್ಧಿಪಡಿಸಲಾಗುವುದು.

ಕನ್ನಡಪ್ರಭ ವಾರ್ತೆ ಅರಸೀಕೆರೆ

ನಗರದಲ್ಲಿ ನಿರ್ಮಾಣ ಹಂತದಲ್ಲಿರುವ ನೂತನ ಬಸ್ ನಿಲ್ದಾಣದಲ್ಲಿ ಪ್ರಯಾಣಿಕರ ಅನುಕೂಲಕ್ಕೆ ಅಗತ್ಯವಾದ ಎಲ್ಲಾ ಮೂಲಭೂತ ಸೌಲಭ್ಯಗಳನ್ನು ಒದಗಿಸುವುದಕ್ಕೆ ಮೊದಲ ಆದ್ಯತೆ ನೀಡಲಾಗಿದೆ ಎಂದು ಶಾಸಕ ಹಾಗೂ ರಾಜ್ಯ ಗೃಹ ಮಂಡಳಿ ಅಧ್ಯಕ್ಷ ಕೆ.ಎಂ. ಶಿವಲಿಂಗೇಗೌಡ ತಿಳಿಸಿದ್ದಾರೆ.

ನೂತನ ಬಸ್ ನಿಲ್ದಾಣ ನಿರ್ಮಾಣ ಕಾಮಗಾರಿ ನಡೆಯುತ್ತಿರುವ ಸ್ಥಳಕ್ಕೆ ಅಧಿಕಾರಿಗಳೊಂದಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಅವರು, ಪ್ರಯಾಣಿಕರ ವಾಹನಗಳ ಪಾರ್ಕಿಂಗ್ ವ್ಯವಸ್ಥೆಗಾಗಿ ನೆಲಮಳಿಗೆ ನಿರ್ಮಾಣ ಮಾಡಲಾಗುತ್ತದೆ. ಜೊತೆಗೆ ಹೋಟೆಲ್‌ಗಳು, ಸುಸಜ್ಜಿತ ಶೌಚಾಲಯಗಳು ಸೇರಿದಂತೆ ಸಾರ್ವಜನಿಕರಿಗೆ ಅಗತ್ಯವಿರುವ ಎಲ್ಲ ಮೂಲಸೌಕರ್ಯಗಳನ್ನು ಸಮಗ್ರವಾಗಿ ಒದಗಿಸಲಾಗುವುದು ಎಂದು ಹೇಳಿದರು.

ಈಗಾಗಲೇ ಪಶುಸಂಗೋಪನೆ ಆಸ್ಪತ್ರೆಯ ಹಳೆಯ ಕಟ್ಟಡವನ್ನು ತೆರವುಗೊಳಿಸಲಾಗಿದ್ದು, ಗ್ರಾಮೀಣ ಸಾರಿಗೆ ಬಸ್ ನಿಲ್ದಾಣ ಕಾಮಗಾರಿ ಇದೇ ಸ್ಥಳದಿಂದ ಆರಂಭವಾಗಲಿದೆ. ಬಹು ವರ್ಷಗಳ ಕನಸಾಗಿದ್ದ ನೂತನ ಬಸ್ ನಿಲ್ದಾಣ ಯೋಜನೆ ಇದೀಗ ಕಾರ್ಯರೂಪಕ್ಕೆ ಬಂದಿದ್ದು, ನಗರ ಹಾಗೂ ಗ್ರಾಮೀಣ ಸಾರಿಗೆ ಬಸ್‌ಗಳಿಗೆ ಪ್ರತ್ಯೇಕ ವ್ಯವಸ್ಥೆಯೊಂದಿಗೆ ಒಂದೇ ಸ್ಥಳದಲ್ಲಿ ನಿಲ್ದಾಣ ನಿರ್ಮಾಣ ಮಾಡಲಾಗುತ್ತಿದೆ ಎಂದು ಮಾಹಿತಿ ನೀಡಿದರು.

ಹಾಲಿ ಬಸ್ ನಿಲ್ದಾಣದ ಹಳೆಯ ಕಟ್ಟಡಗಳನ್ನು ತೆರವುಗೊಳಿಸುವ ಪ್ರಕ್ರಿಯೆ ಆರಂಭವಾಗಿದ್ದು, ಶೀಘ್ರದಲ್ಲೇ ಸಂಪೂರ್ಣ ತೆರವು ಕಾರ್ಯ ಮುಗಿಯಲಿದೆ. ಕಾಮಗಾರಿ ಆರಂಭಕ್ಕೆ ಅಡ್ಡಿಯಾಗಿರುವ ಟ್ರಾನ್ಸ್‌ಫಾರ್ಮರ್ ಸ್ಥಳಾಂತರಿಸುವಂತೆ ಚೆಸ್ಕಾಂ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಆರಂಭಿಕ ಹಂತದಲ್ಲಿ ಸ್ವಲ್ಪ ತೊಂದರೆಗಳು ಉಂಟಾಗಬಹುದಾದರೂ, ಸಾರ್ವಜನಿಕರು ಸಹಕಾರ ನೀಡಬೇಕು ಎಂದು ಅವರು ಮನವಿ ಮಾಡಿದರು.

ಈ ಸಂದರ್ಭದಲ್ಲಿ ಸ್ಥಳೀಯ ಮುಖಂಡರಾದ ವಿಭವ್ ಇಟಗಿ, ಹೇಮಂತ್ ಕುಮಾರ್, ಮಂಜುನಾಥ್, ರೈಲ್ವೇ ಮಂಜು, ಪೃಥ್ವಿ ನಾಯಕ್, ಅಗ್ಗುಂದ ಎ.ಪಿ. ಚಂದ್ರಯ್ಯ, ಚಿಕ್ಕಬಾಣಾವರ ವೆಂಕಟೇಶ್, ಆಟೋ ಚಾಲಕರು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.

ಬೀದಿ ಬದಿ ವ್ಯಾಪಾರಿಗಳಿಗೆ ಪರ್ಯಾಯ ವ್ಯವಸ್ಥೆ:

ನೂತನ ಬಸ್ ನಿಲ್ದಾಣ ನಿರ್ಮಾಣದಿಂದ ಸ್ಥಳಾವಕಾಶ ಸಮಸ್ಯೆ ಎದುರಾಗುತ್ತಿದೆ ಎಂದು ಬೀದಿ ಬದಿ ವ್ಯಾಪಾರಿಗಳು ತಮ್ಮ ಅಳಲನ್ನು ಶಾಸಕರ ಮುಂದೆ ವ್ಯಕ್ತಪಡಿಸಿದ ಸಂದರ್ಭದಲ್ಲಿ ಪ್ರತಿಕ್ರಿಯಿಸಿದ ಕೆ.ಎಂ. ಶಿವಲಿಂಗೇಗೌಡ, ಬೀದಿ ಬದಿ ಆಹಾರ ತಯಾರಕರಿಗಾಗಿ ಪ್ರತ್ಯೇಕ ಫುಡ್ ಕೋರ್ಟ್ ನಿರ್ಮಿಸಲಾಗುವುದು ಎಂದು ಭರವಸೆ ನೀಡಿದರು.ಬಿ.ಹೆಚ್. ರಸ್ತೆಯ ಹಳೆಯ ತರಕಾರಿ ಮಾರುಕಟ್ಟೆಯ ಅಂಗಡಿಗಳನ್ನು ಸಂತೆ ಮೈದಾನದ ನೂತನ ಮಳಿಗೆಗಳಿಗೆ ಸ್ಥಳಾಂತರಿಸಿ, ಹಳೆಯ ತರಕಾರಿ ಮಾರುಕಟ್ಟೆ ಪ್ರದೇಶದಲ್ಲೇ ಫುಡ್ ಕೋರ್ಟ್ ಅಭಿವೃದ್ಧಿಪಡಿಸಲಾಗುವುದು. ಅಲ್ಲಿಯವರೆಗೆ ಬೀದಿ ಬದಿ ವ್ಯಾಪಾರಿಗಳು ಸಹಕರಿಸಬೇಕೆಂದು ಅವರು ಮನವಿ ಮಾಡಿದರು.