ಸಾರಾಂಶ
ಬಾಗೇಪಲ್ಲಿ: ಶುದ್ಧ ಕುಡಿಯುವ ನೀರು, ರಸ್ತೆ ಸೇರಿ ಮೂಲಭೂತ ಸೌಲಭ್ಯಗಳನ್ನು ಸಮರ್ಪಕವಾಗಿ ಒದಗಿಸುವ ಮೂಲಕ ತಾಲೂಕಿನ ಗ್ರಾಮೀಣ ಪ್ರದೇಶಗಳ ಅಭಿವೃದ್ಧಿಗೆ ಹೆಚ್ಚಿನ ಒತ್ತು ನೀಡುವಂತಹ ಪ್ರಾಮಾಣಿಕ ಪ್ರಯತ್ನ ಮಾಡುವುದಾಗಿ ಶಾಸಕ ಎಸ್.ಎನ್.ಸುಬ್ಬಾರೆಡ್ಡಿ ತಿಳಿಸಿದರು.
ತಾಲೂಕಿನ ನಲ್ಲರೆಡ್ಡಿಪಲ್ಲಿ ಗ್ರಾಪಂ ವ್ಯಾಪ್ತಿಯ ಜಿಲ್ಲಾಜಿರ್ಲ ಗ್ರಾಮದಿಂದ ಆಂಧ್ರ ಪ್ರದೇಶ ಗಡಿಯವರೆಗೆ 50 ಲಕ್ಷ ರು.ಗಳ ವೆಚ್ಚದಲ್ಲಿ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿ ಮಾತನಾಡಿದ ಅವರು, ತಾಲೂಕಿನ ಗ್ರಾಮೀಣ ಪ್ರದೇಶಗಳಿಗೆ ಮೂಲಭೂತ ಸೌಲಭ್ಯಗಳನ್ನು ಒದಗಿಸುವುದಲ್ಲದೆ ಸರ್ಕಾರದ ವಿವಿಧ ಯೋಜನೆಯಡಿ ಪಟ್ಟಣದಿಂದ ಗ್ರಾಮೀಣ ಪ್ರದೇಶಗಳಿಗ ಸಂಪರ್ಕ ಕಲ್ಪಿಸುವ ಉತ್ತಮ ರಸ್ತೆ ಅಭಿವೃದ್ಧಿಪಡಿಸುವುದಾಗಿ ಶಾಸಕರು ತಿಳಿಸಿದರು.ಪಟ್ಟಣದಿಂದ ಜಿಲಾಜಿರ್ಲ ಗ್ರಾಮದವರೆಗೆ ರಸ್ತೆ ನಿರ್ಮಾಣ ಕಾಮಗಾರಿ ಪೂರ್ಣಗೊಂಡಿದ್ದು, ಜಿಲ್ಲಾಜಿರ್ಲ ಗ್ರಾಮದಿಂದ ಆಂಧ್ರ ಪ್ರದೇಶ ಗಡಿಯವರೆಗೆ ರಸ್ತೆ ಅಭಿವೃದ್ಧಿಪಡಿಸುವಂತೆ ಗ್ರಾಮಸ್ಥರ ಬೇಡಿಕೆಯಿತ್ತು, ಸುಮಾರು 50 ಲಕ್ಷ ರು. ವೆಚ್ಚದಲ್ಲಿ ಸುಸಜ್ಜಿತ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಲಾಗಿದೆ ಎಂದ ಅವರು, ಗುಣಮಟ್ಟದ ರಸ್ತೆಯನ್ನು ನಿರ್ಮಿಸಬೇಕು, ಅಲ್ಲದೆ ತ್ವರಿತವಾಗಿ ಕಾಮಗಾರಿ ಪೂರ್ಣಗೊಳಿಸುವಂತೆ ಸಂಬಂಧಪಟ್ಟ ಇಲಾಖೆ ಅಧಿಕಾರಿಗಳಿಗೆ ಹಾಗೂ ಗುತ್ತಿಗೆದಾರರಿಗೆ ಸೂಚನೆ ನೀಡಿದರು. ಪುರಸಭೆ ಅಧ್ಯಕ್ಷರಾದ ಎ.ಶ್ರೀನಿವಾಸ್, ಮೊಟಕಪಲ್ಲಿ ಶ್ರೀನಿವಾಸರೆಡ್ಡಿ, ಆನಂದ್, ಕಾಂಗ್ರೆಸ್ ಮುಖಂಡರಾದ ಶ್ರೀನಿವಾಸ್, ನಾಗರಾಜ್, ಕೃಷ್ಣಾರೆಡ್ಡಿ, ಆದಿನಾರಾಯಣ ಸೇರಿ ಗ್ರಾಮಸ್ಥರು ಇದ್ದರು.