ಕಾರ್ಯಕರ್ತರ ಸಮಸ್ಯೆಗಳ ನಿವಾರಣೆಗೆ ಆದ್ಯತೆ

| Published : Mar 27 2024, 01:00 AM IST

ಸಾರಾಂಶ

ದೊಡ್ಡಬಳ್ಳಾಪುರ: ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ.ಕೆ.ಸುಧಾಕರ್ ಮಂಗಳವಾರ ದೊಡ್ಡಬಳ್ಳಾಪುರ ತಾಲೂಕಿನ ಸುಪ್ರಸಿದ್ದ ಘಾಟಿ ಸುಬ್ರಹ್ಮಣ್ಯ ದೇವಾಲಯಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು.

ದೊಡ್ಡಬಳ್ಳಾಪುರ: ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ.ಕೆ.ಸುಧಾಕರ್ ಮಂಗಳವಾರ ದೊಡ್ಡಬಳ್ಳಾಪುರ ತಾಲೂಕಿನ ಸುಪ್ರಸಿದ್ದ ಘಾಟಿ ಸುಬ್ರಹ್ಮಣ್ಯ ದೇವಾಲಯಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು.

ಬಳಿಕ ಅವರು, ದೊಡ್ಡಬಳ್ಳಾಪುರದ ಪ್ರಸಿದ್ದ ಶ್ರೀ ನೆಲದಾಂಜನೇಯಸ್ವಾಮಿ ದೇವಾಲಯಕ್ಕೆ ಭೇಟಿ ನೀಡಿ ಪೂಜಾ ಕಾರ್ಯದಲ್ಲಿ ಪಾಲ್ಗೊಂಡರು. ದೊಡ್ಡಬಳ್ಳಾಪುರ ಶಾಸಕ ಧೀರಜ್ ಮುನಿರಾಜ್ ಅವರ ಮನೆಗೆ ಭೇಟಿ ನೀಡಿ ಕಾರ್ಯಕರ್ತರೊಂದಿಗೆ ಸಭೆ ನಡೆಸಿದರು.

ಇಲ್ಲಿನ ಬಸವೇಶ್ವರ ನಗರದಲ್ಲಿರುವ ಬೆಂಗಳೂರು ಗ್ರಾಮಾಂತರ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ನಡೆದ ಕಾರ್ಯಕರ್ತರ ಸಭೆಯಲ್ಲಿ ಪಾಲ್ಗೊಂಡರು. ಈ ವೇಳೆ ವಿವಿಧ ವಿಷಯಗಳನ್ನು ಪ್ರಸ್ತಾಪಿಸಿದ ಕೆಲ ಕಾರ್ಯಕರ್ತರು, ಸುಧಾಕರ್‌ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಕೆಲಕಾಲ ಗೊಂದಲದ ಬಳಿಕ, ಕಾರ್ಯಕರ್ತರನ್ನು ಸಮಾಧಾನಪಡಿಸಿದ ಪಕ್ಷದ ಮುಖಂಡರು ಪ್ರತಿಕ್ರಿಯಿಸಿ, ಇದು ಕುಟುಂಬದೊಳಗಿನ ಭಿನ್ನಾಭಿಪ್ರಾಯ ಅಷ್ಟೇ ಎಂದು ಸ್ಪಷ್ಟನೆ ನೀಡಿದರು.

ಬಳಿಕ ಮಾತನಾಡಿದ ಡಾ.ಕೆ.ಸುಧಾಕರ್, ಪಕ್ಷ ಒಂದು ಕುಟುಂಬವಿದ್ದಂತೆ. ಇಂದು ದೊಡ್ಡಬಳ್ಳಾಪುರ ನಗರ ಮತ್ತು ಗ್ರಾಮಾಂತರ ಕಾರ್ಯಕರ್ತರೊಂದಿಗೆ ಸಂವಾದ ಸಭೆ ನಡೆಸಲಾಗಿದೆ. ತಮ್ಮ ಅಹವಾಲುಗಳನ್ನು ಸಲ್ಲಿಸಿದ್ದಾರೆ. ನಮ್ಮಲ್ಲಿ ಯಾವುದೇ ಸಮಸ್ಯೆಗಳಿಲ್ಲ. ಸ್ಥಳೀಯ ಶಾಸಕರ ಬೆಂಬಲ ಹಾಗೂ ಕಾರ್ಯಕರ್ತರ ಸಹಕಾರದಿಂದ ಈ ಬಾರಿ ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಗೆಲವು ಖಚಿತ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಬಿಜೆಪಿ ರಾಜ್ಯ ಯುವ ಮೋರ್ಚಾ ಅಧ್ಯಕ್ಷ, ಶಾಸಕ ಧೀರಜ್‌ ಮುನಿರಾಜ್ ಮಾತನಾಡಿ, ಪಕ್ಷಕ್ಕೆ ಕಾರ್ಯಕರ್ತರೇ ಶಕ್ತಿ. ಕೆಲ ಕುಂದುಕೊರತೆಗಳು ಇರುವುದು ಸಹಜ. ಅಂತಹ ಸಮಸ್ಯೆಗಳ ಪರಿಹಾರಕ್ಕೆ ಕ್ರಮ ಕೈಗೊಳ್ಳಲಾಗುವುದು. ಈ ಬಾರಿ ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಚುನಾವಣೆಯಲ್ಲಿ ಬಿಜೆಪಿಯ ಗೆಲುವಿಗಾಗಿ ಒಮ್ಮತದಿಂದ ಶ್ರಮಿಸಬೇಕಿದೆ. ಅತ್ಯಧಿಕ ಮತಗಳ ಅಂತರದಿಂದ ಪಕ್ಷವನ್ನು ಗೆಲ್ಲಿಸಬೇಕು ಎಂದರು.

ಮಾಜಿ ಸಚಿವ ಎಂಟಿಬಿ ನಾಗರಾಜ್, ಪಕ್ಷದ ಜಿಲ್ಲಾಧ್ಯಕ್ಷ ರಾಮಕೃಷ್ಣಯ್ಯ, ಹಿರಿಯ ಮುಖಂಡ ಕೆ.ಎಂ.ಹನುಮಂತರಾಯಪ್ಪ, ಬಿ.ಸಿ.ನಾರಾಯಣಸ್ವಾಮಿ, ತಾಲೂಕು ಅಧ್ಯಕ್ಷ ನಾಗೇಶ್ ಸೇರಿದಂತೆ ಜಿಲ್ಲಾ ಹಾಗೂ ತಾಲೂಕು ಘಟಕಗಳ ಮುಖಂಡರು, ವಿವಿಧ ಮೋರ್ಚಾಗಳ ಪ್ರಮುಖರು ಉಪಸ್ಥಿತರಿದ್ದರು.

ಜೆಡಿಎಸ್‌ ಮುಖಂಡರ ಮನೆಗಳಿಗೂ ಭೇಟಿ:

ಜೆಡಿಎಸ್‌ ಜಿಲ್ಲಾಧ್ಯಕ್ಷ ಬಿ.ಮುನೇಗೌಡ, ಬಮೂಲ್ ಮಾಜಿ ನಿರ್ದೇಶಕ ಎಚ್.ಅಪ್ಪಯ್ಯಣ್ಣ ಸೇರಿದಂತೆ ಜೆಡಿಎಸ್‌ ಪಕ್ಷದ ಪ್ರಮುಖ ಮುಖಂಡರ ಮನೆಗಳಿಗೂ ಭೇಟಿ ನೀಡಿದ ಅವರು, ಚುನಾವಣೆಯ ಗೆಲುವಿನ ರಣತಂತ್ರದ ಕುರಿತು ಚರ್ಚೆ ನಡೆಸಿದರು.26ಕೆಡಿಬಿಪಿ2- ದೊಡ್ಡಬಳ್ಳಾಪುರದ ಬೆಂ.ಗ್ರಾ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಡಾ.ಕೆ.ಸುಧಾಕರ್ ಮಾತನಾಡಿದರು.26ಕೆಡಿಬಿಪಿ3- ದೊಡ್ಡಬಳ್ಳಾಪುರ ತಾಲೂಕಿನ ಘಾಟಿ ಸುಬ್ರಹ್ಮಣ್ಯಕ್ಕೆ ಡಾ.ಕೆ.ಸುಧಾಕರ್ ಭೇಟಿ ನೀಡಿ ಪೂಜೆ ಸಲ್ಲಿಸಿದರು.