ಭದ್ರಾವತಿ: ತಾಲೂಕಿನ ಕೂಡ್ಲಿಗೆರೆ ಲಕ್ಕಪ್ಪನ ಕಟ್ಟೆ ಸಮೀಪ ಖಾಸಗಿ ಬಸ್ ಚಾಲಕನ ನಿಯಂತ್ರಣ ಕಳೆದುಕೊಂಡು ಅಡಕೆ ತೋಟದ ಹಳ್ಳಕ್ಕೆ ನುಗ್ಗಿದ ಹಿನ್ನೆಲೆಯಲ್ಲಿ ಸುಮಾರು ೧೫ ಪ್ರಯಾಣಿಕರು ಗಾಯಗೊಂಡಿರುವ ಘಟನೆ ಗುರುವಾರ ಬೆಳಿಗ್ಗೆ ನಡೆದಿದೆ. ದಾವಣಗೆರೆ-ಭದ್ರಾವತಿ ನಡುವೆ ಸಂಚರಿಸುವ ಬಸ್ ಬೆಳಿಗ್ಗೆ ಭದ್ರಾವತಿಯಿಂದ ಸಂಚರಿಸುವಾಗ ಈ ದುರ್ಘಟನೆ ನಡೆದಿದೆ. ಬಸ್‌ನಲ್ಲಿದ್ದ ಕೂಡ್ಲಿಗೆರೆ ಮತ್ತು ಅರಬಿಳಚಿ ಕ್ಯಾಂಪ್‌ನ ಬಹುತೇಕ ಪ್ರಯಾಣಿಕರು ಗಾಯಗೊಂಡಿದ್ದು, ಗಾಯಾಳುಗಳನ್ನು ತಕ್ಷಣ ತಾಲೂಕು ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಿ ನಂತರ ಹೆಚ್ಚಿನ ಚಿಕಿತ್ಸೆಗೆ ಶಿವಮೊಗ್ಗ ಮೆಗ್ಗಾನ್ ಆಸ್ಪತ್ರೆಗೆ ಕಳುಹಿಸಲಾಗಿದೆ. ಅಪಘಾತ ಸಂಭವಿಸಿದ ತಕ್ಷಣ ಸ್ಥಳೀಯರು ಸ್ಥಳಕ್ಕೆ ಆಗಮಿಸಿ ಪ್ರಯಾಣಿಕರನ್ನು ರಕ್ಷಿಸಿದ್ದಾರೆ. ೩ ಪ್ರಯಾಣಿಕರ ಸ್ಥಿತಿ ಗಂಭೀರವಾಗಿದ್ದು, ಘಟನಾ ಸ್ಥಳಕ್ಕೆ ಗ್ರಾಮಾಂತರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ.