4 ಖಾಸಗಿ ಹಾಗೂ ಅನುದಾನಿತ ಶಿಕ್ಷಣ ಸಂಸ್ಥೆಗಳ ಆಡಳಿತ ಮಂಡಳಿಗಳು ಮತ್ತು ನೌಕರರ ಹೋರಾಟ ಸಮನ್ವಯ ಸಮಿತಿಯ ನೇತೃತ್ವದಲ್ಲಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಶಿಕ್ಷಕರು ಹಾಗೂ ಸಿಬ್ಬಂದಿ ವರ್ಗ ನಗರದ ತಹಸೀಲ್ದಾರ್ ಕಚೇರಿ ಎದುರು ಗುರುವಾರ ಪ್ರತಿಭಟನೆ ನಡೆಸಿದರು.
ರಾಣಿಬೆನ್ನೂರು: ಖಾಸಗಿ ಹಾಗೂ ಅನುದಾನಿತ ಶಿಕ್ಷಣ ಸಂಸ್ಥೆಗಳ ಆಡಳಿತ ಮಂಡಳಿಗಳು ಮತ್ತು ನೌಕರರ ಹೋರಾಟ ಸಮನ್ವಯ ಸಮಿತಿಯ ನೇತೃತ್ವದಲ್ಲಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಶಿಕ್ಷಕರು ಹಾಗೂ ಸಿಬ್ಬಂದಿ ವರ್ಗ ನಗರದ ತಹಸೀಲ್ದಾರ್ ಕಚೇರಿ ಎದುರು ಗುರುವಾರ ಪ್ರತಿಭಟನೆ ನಡೆಸಿದರು.
ಮಾಜಿ ಶಾಸಕ ಅರುಣಕುಮಾರ ಪೂಜಾರ ಪ್ರತಿಭಟನೆಯಲ್ಲಿ ಪಾಲ್ಗೊಂಡು ಮಾತನಾಡಿ, ನಾಡಿನ ಭವಿಷ್ಯವನ್ನು ರೂಪಿಸುವ ಶಿಕ್ಷಕ ಬಳಗ ಬೀದಿಗಿಳಿದು ಹೋರಾಟ ನಡೆಸುವಂತಹ ಪರಿಸ್ಥಿತಿ ನಿರ್ಮಾಣವಾಗಿರುವುದು ವಿಷಾದಕರ ಸಂಗತಿಯಾಗಿದೆ. ರಾಜ್ಯ ಕಾಂಗ್ರೆಸ್ ಸರ್ಕಾರವು ತಕ್ಷಣವೇ ಎಚ್ಚೆತ್ತುಕೊಂಡು ಶಿಕ್ಷಣ ಸಂಸ್ಥೆಗಳು ಹಾಗೂ ನೌಕರರ ನ್ಯಾಯಯುತ ಬೇಡಿಕೆಗಳಿಗೆ ಸಕಾರಾತ್ಮಕವಾಗಿ ಸ್ಪಂದಿಸಬೇಕು. ನೀವು ಕೈಗೊಳ್ಳುವ ಹೋರಾಟ, ಪಾದಯಾತ್ರೆಯಲ್ಲಿ ಭಾಗವಹಿಸಿ ಬೆಂಬಲ ನೀಡುವುದಾಗಿ ತಿಳಿಸಿದರು.ಲಿಂಗದಹಳ್ಳಿಯ ರಂಭಾಪುರಿ ಶಾಖಾ ಪೀಠದ ವೀರಭದ್ರ ಶಿವಾಚಾರ್ಯರು ಪ್ರತಿಭಟನಾಕಾರರಿಗೆ ಬೆಂಬಲಿಸಿ ಮಾತನಾಡಿ, ಕಾಂಗ್ರೆಸ್ ಸರ್ಕಾರವು ಚುನಾವಣಾ ಪೂರ್ವದಲ್ಲಿ ತಮ್ಮ ಪ್ರಣಾಳಿಕೆಯಲ್ಲಿ ಘೋಷಿಸಿದಂತೆ ಒಪಿಎಸ್ ನೀತಿಯನ್ನು ಜಾರಿಗೊಳಿಸಿ ನುಡಿದಂತೆ ನಡೆದುಕೊಳ್ಳಬೇಕು. ದೇಶದ ಭವಿಷ್ಯ ರೂಪಿಸುವ ಶಿಕ್ಷಕರ ಬೇಡಿಕೆ ಈಡೇರಿಸುವುದು ಸರ್ಕಾರದ ಆದ್ಯ ಕರ್ತವ್ಯವಾಗಿದೆ ಎಂದರು.
ಪ್ರತಿಭಟನೆಯಲ್ಲಿ ಪಾಲ್ಗೊಂಡ ಶಿಕ್ಷಕರ ಸಂಘಟನೆಯ ಪದಾಧಿಕಾರಿಗಳು ಮಾತನಾಡಿ, ಶಿಕ್ಷಣ ಕ್ಷೇತ್ರದಲ್ಲಿ ಹಲವು ಬದಲಾವಣೆಗಳಾಗುತ್ತಿದ್ದರೂ, ಅನುದಾನಿತ ಹಾಗೂ ಅನುದಾನರಹಿತ ಶಿಕ್ಷಣ ಸಂಸ್ಥೆಗಳಲ್ಲಿ ದಶಕಗಳಿಂದ ಸೇವೆ ಸಲ್ಲಿಸುತ್ತಿರುವ ಸಾವಿರಾರು ಶಿಕ್ಷಕರು ಮತ್ತು ನೌಕರರು ಮೂಲಭೂತ ಸೇವಾ ಸೌಲಭ್ಯ ಹಾಗೂ ಪಿಂಚಣಿ ಸೌಲಭ್ಯಗಳಿಂದ ವಂಚಿತರಾಗಿದ್ದಾರೆ. ಸರ್ಕಾರ ಶಿಕ್ಷಕರ ಹಾಗೂ ನೌಕರರ ನ್ಯಾಯಯುತ ಬೇಡಿಕೆಗಳನ್ನು ಈಡೇರಿಸಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.2006ರ ಏಪ್ರಿಲ್ 1ರ ನಂತರ ನೇಮಕಗೊಂಡ ಅನುದಾನಿತ ಶಿಕ್ಷಣ ಸಂಸ್ಥೆಗಳ ನೌಕರರಿಗೆ ಹಳೆಯ ನಿಶ್ಚಿತ ಪಿಂಚಣಿ ಯೋಜನೆ (ಒಪಿಎಸ್) ಜಾರಿಗೊಳಿಸಬೇಕು. ಉಚ್ಚ ನ್ಯಾಯಾಲಯದ ಆದೇಶದಂತೆ ಕಾಲ್ಪನಿಕ ವೇತನ ನೀಡಬೇಕು. 1995ರ ನಂತರ ಆರಂಭಗೊಂಡ ಅನುದಾನರಹಿತ ಕನ್ನಡ ಮಾಧ್ಯಮ ಶಾಲೆಗಳನ್ನು ಅನುದಾನಕ್ಕೆ ಒಳಪಡಿಸಬೇಕು. ಅನುದಾನಿತ ಶಾಲೆಗಳಲ್ಲಿ 2015ರಿಂದ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಬೇಕು ಎಂದರು.
ಅನುದಾನಿತ ಮತ್ತು ಅನುದಾನರಹಿತ ಶಾಲೆಗಳಿಗೂ ದ್ವಿಭಾಷಾ ಪದ್ಧತಿ ವಿಸ್ತರಿಸಬೇಕು. ಮಾನ್ಯತೆ ನವೀಕರಣದ ಗೊಂದಲಗಳನ್ನು ಸರಳಗೊಳಿಸಬೇಕು. ಅನುದಾನಿತ ನೌಕರರಿಗೂ ಆರೋಗ್ಯ ಸಂಜೀವಿನಿ ಯೋಜನೆ ಹಾಗೂ ಮಹಿಳಾ ಸಿಬ್ಬಂದಿಗೆ ಋತುಚಕ್ರ ರಜೆ ಜಾರಿಗೊಳಿಸಬೇಕು. ಅನುದಾನರಹಿತ ಶಾಲಾ ನೌಕರರಿಗೆ ಸೇವಾ ಭದ್ರತೆ, ಆರೋಗ್ಯ ವಿಮೆ ಸೌಲಭ್ಯ ಕಲ್ಪಿಸಬೇಕು ಎಂದು ಆಗ್ರಹಿಸಿದರು.ಸರ್ಕಾರಿ ಶಾಲಾ ಮಕ್ಕಳಿಗೆ ದೊರೆಯುವ ಎಲ್ಲ ಸೌಲಭ್ಯಗಳನ್ನು ಅನುದಾನಿತ ಶಾಲೆಗಳ ಮಕ್ಕಳಿಗೂ ಒದಗಿಸಬೇಕು. ಖಾಲಿ ಇರುವ ಚಿತ್ರಕಲೆ, ಸಂಗೀತ, ಹೊಲಿಗೆ ಹಾಗೂ ನಾಟಕ ಶಿಕ್ಷಕರ ಹುದ್ದೆಗಳನ್ನು ಭರ್ತಿ ಮಾಡಬೇಕು ಎಂಬುದು ಸೇರಿದಂತೆ ಒಟ್ಟು 17 ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಲಾಯಿತು.
ಬಿಜೆಪಿ ರಾಜ್ಯ ಘಟಕದ ಉಪಾಧ್ಯಕ್ಷ ಡಾ.ಬಸವರಾಜ ಕೇಲಗಾರ, ಜೆಡಿಎಸ್ ಜಿಲ್ಲಾಧ್ಯಕ್ಷ ಮಂಜುನಾಥ ಗೌಡಶಿವಣ್ಣನವರ, ವಿ.ಪಿ.ಲಿಂಗನಗೌಡ್ರ, ಪ್ರಕಾಶ ಪೂಜಾರ ಪ್ರತಿಭಟನೆಯಲ್ಲಿ ಭಾಗವಹಿಸಿ ಬೆಂಬಲ ಸೂಚಿಸಿದರು.ಕರ್ನಾಟಕ ರಾಜ್ಯ ಮಾಧ್ಯಮಿಕ ಶಾಲಾ ನೌಕರರ ಸಂಘದ ಅಧ್ಯಕ್ಷ ಮಾಲತೇಶ ಚಲವಾದಿ, ಕಾರ್ಯದರ್ಶಿ ಚಂದ್ರಶೇಖರ ಗ್ಯಾನಗೌಡರ, ಮುಖ್ಯ ಶಿಕ್ಷಕರ ಸಂಘದ ಅಧ್ಯಕ್ಷ ಶಂಕರ ಚಲವಾದಿ, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಬಸವರಾಜ ನಾಯಕ, ಪದವಿ ಪೂರ್ವ ಕಾಲೇಜಿನ ಸಂಘದ ಅಧ್ಯಕ್ಷ ಶಿವಾನಂದ ಸಂಗಾಪುರ, ದೈಹಿಕ ಶಿಕ್ಷಕರ ಸಂಘದ ಅಧ್ಯಕ್ಷ ಕಾಂತೇಶ ಮಾದಪುರ, ಡಾ.ಸಂಜಯ ಸಾವಕಾರ, ಡಿ.ವಿ. ಜಂಗಣ್ಣನವರ, ನಾಗರಾಜ ನಲವಾಗಲ, ರಮೇಶ ಅಳಲಗೇರಿ, ನಾಗರಾಜ ಮತ್ತೂರ, ವಿರೇಶ ಜಂಬಗಿ, ಶ್ರೀಕಾಂತ ಸಂಜೀವಣ್ಣನವರ, ಸಿ.ಐ. ಶಿಡಗನಾಳ, ರಮೇಶ ಬಡಕರಿಯಪ್ಪನವರ ಸೇರಿದಂತೆ ವಿವಿಧ ಖಾಸಗಿ ಹಾಗೂ ಅನುದಾನಿತ ಶಿಕ್ಷಣ ಸಂಸ್ಥೆಗಳ ಆಡಳಿತ ಮಂಡಳಿಗಳ ಪದಾಧಿಕಾರಿಗಳು, ಶಿಕ್ಷಕರು, ನೌಕರರು ಪಾಲ್ಗೊಂಡಿದ್ದರು.