ಬ್ಯಾಡಗಿ: ಖಾಸಗಿ ಶಾಲೆಗಳು ಸಮಾಜದ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಅಮೂಲ್ಯ ರತ್ನಗಳನ್ನು ಕೊಡುಗೆಯಾಗಿ ನೀಡಿದ್ದು, ಶಿಕ್ಷಣದ ಜೊತೆಗೆ ಸಂಸ್ಕಾರ, ಶಿಸ್ತು ಹಾಗೂ ಸಾಮಾಜಿಕ ಮೌಲ್ಯಗಳನ್ನು ಬೆಳೆಸುವಲ್ಲಿ ಖಾಸಗಿ ಶಾಲೆಗಳ ಪಾತ್ರ ಅತ್ಯಂತ ಮಹತ್ವದ್ದಾಗಿದೆ ಎಂದು ಶಾಸಕ ಬಸವರಾಜ ಶಿವಣ್ಣನವರ ಬಣ್ಣಿಸಿದರು.

ಪಟ್ಟಣದ ಬಿಇಎಸ್ ಶಿಕ್ಷಣ ಸಂಸ್ಥೆಯಲ್ಲಿ ನೂತನವಾಗಿ ಆರಂಭಿಸಿದ ಹಿರಿಯ ಪ್ರಾಥಮಿಕ ಶಾಲೆ (ಆಂಗ್ಲ ಮಾಧ್ಯಮ) ಉದ್ಘಾಟಿಸಿ ಅವರು ಮಾತನಾಡಿದರು. ಪ್ರತಿ ಪೋಷಕರು ತಮ್ಮ ಮಕ್ಕಳನ್ನು ಶಾಲೆಗಳಿಗೆ ದಾಖಲಿಸುವ ಮೂಲಕ ಶೈಕ್ಷಣಿಕ ಭವಿಷ್ಯವನ್ನು ರೂಪಿಸಿಕೊಳ್ಳಬೇಕು ಎಂದರು.

ತಾಂತ್ರಿಕ ಶಿಕ್ಷಣದ ಅಗತ್ಯತೆ: ಪ್ರಪಂಚ ವೇಗವಾಗಿ ಬದಲಾಗುತ್ತಿದ್ದು, ಡಿಜಿಟಲ್ ಯುಗದಲ್ಲಿ ತಾಂತ್ರಿಕ ಶಿಕ್ಷಣದ ಅಗತ್ಯತೆ ಹೆಚ್ಚಾಗಿದೆ. ಕೃತಕ ಬುದ್ಧಿಮತ್ತೆ, ಕಂಪ್ಯೂಟರ್ ಶಿಕ್ಷಣ, ವಿಜ್ಞಾನ ಹಾಗೂ ತಾಂತ್ರಿಕ ಕೌಶಲ್ಯಗಳ ಕುರಿತು ವಿದ್ಯಾರ್ಥಿಗಳಿಗೆ ಆರಂಭಿಕ ಹಂತದಲ್ಲಿಯೇ ಮಾರ್ಗದರ್ಶನ ನೀಡಬೇಕು, ಗ್ರಾಮೀಣ ಭಾಗದ ವಿದ್ಯಾರ್ಥಿಗಳೂ ಸಹ ನಗರದಲ್ಲಿನ ಮಕ್ಕಳಂತೆ ಅವಕಾಶಗಳನ್ನು ಬಳಸಿಕೊಳ್ಳುವಂತಾಗಬೇಕು ಎಂದರು.

ಗುಣಮಟ್ಟದ ಶಿಕ್ಷಣ ಆದ್ಯತೆ: ಅಧ್ಯಕ್ಷತೆ ವಹಿಸಿದ್ದ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಹಾಗೂ ಮಾಜಿ ಶಾಸಕ ಸುರೇಶಗೌಡ ಪಾಟೀಲ ಮಾತನಾಡಿ, ಬಿಇಎಸ್ ಶಿಕ್ಷಣ ಸಂಸ್ಥೆಯು ಗುಣಮಟ್ಟದ ಶಿಕ್ಷಣ, ಮೂಲ ಸೌಕರ್ಯ ಅಭಿವೃದ್ಧಿ ಹಾಗೂ ಉದ್ಯೋಗ ಆಧಾರಿತ ಕಲಿಕೆಗೆ ಹೆಚ್ಚಿನ ಒತ್ತು ನೀಡುತ್ತಿದ್ದು, ಸಾರ್ವಜನಿಕರು, ಪೋಷಕರು, ಹಳೆಯ ವಿದ್ಯಾರ್ಥಿಗಳು ಸಾರ್ವಜನಿಕರ ಸಹಕಾರದೊಂದಿಗೆ ಶಾಲೆಗಳ ಸಮಗ್ರ ಅಭಿವೃದ್ಧಿಗೆ ಒತ್ತು ನೀಡುತ್ತಿದೆ ಎಂದರು.

ಈ ಸಂದರ್ಭದಲ್ಲಿ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿ ಡಾ.ಎಸ್.ಎನ್.ನಿಡಗುಂದಿ ಸೇರಿದಂತೆ ದಾನಪ್ಪ ಚೂರಿ, ರಾಜು ಮೋರಿಗೇರಿ, ಪ್ರಾಚಾರ್ಯ ಡಾ. ಪ್ರಶಾಂತ, ನಿವೃತ್ತ ಪ್ರಾಚಾರ್ಯ ಡಾ.ಎಸ್.ಜಿ. ವೈದ್ಯ, ಮುಖ್ಯಶಿಕ್ಷಕ ಉಮೇಶ ಛತ್ರದ ಇನ್ನಿತರರಿದ್ದರು.