ಸಾರಾಂಶ
- ಸರ್ಕಾರಿ ಹೈಸ್ಕೂಲ್ ಮೈದಾನದಲ್ಲಿ ವೇದಿಕೆ ಸಜ್ಜು । ಸಿಎಂ, ಡಿಸಿಎಂ, ಎಐಸಿಸಿ ಅಧ್ಯಕ್ಷರು ಭಾಗಿ - - - ಕನ್ನಡಪ್ರಭ ವಾರ್ತೆ, ದಾವಣಗೆರೆ
ಕಾಂಗ್ರೆಸ್ ಯುವ ನಾಯಕಿ ಪ್ರಿಯಾಂಕ ಗಾಂಧಿ ಮೇ 4ರಂದು ದಾವಣಗೆರೆಗೆ ಆಗಮಿಸಲಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಡಾ.ಪ್ರಭಾ ಮಲ್ಲಿಕಾರ್ಜುನ್ ಪರವಾಗಿ ಬೃಹತ್ ಸಾರ್ವಜನಿಕ ಸಭೆ ಉದ್ದೇಶಿಸಿ ಮಾತನಾಡಲಿದ್ದಾರೆ ಎಂದು ಎಐಸಿಸಿ ಉಸ್ತುವಾರಿ ಕಾರ್ಯದರ್ಶಿ ಮಯೂರ್ ಜಯಕುಮಾರ್ ಹೇಳಿದರು.ನಗರದ ಸರ್ಕಾರಿ ಹೈಸ್ಕೂಲ್ ಮೈದಾನದಲ್ಲಿ ಶುಕ್ರವಾರ ಸಂಜೆ ಕಾರ್ಯಕ್ರಮ ಸಿದ್ಧತೆಗಳ ಪರಿಶೀಲಿಸಿ, ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶನಿವಾರ ಮಧ್ಯಾಹ್ನ 3 ಗಂಟೆಗೆ ಪ್ರಿಯಾಂಕ ಗಾಂಧಿ ಆಗಮಿಸಲಿದ್ದಾರೆ. ಅವರೊಂದಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಜಿಲ್ಲಾ ಉಸ್ತುವಾರಿ ಸಚಿವ ಎಸ್.ಎಸ್.ಮಲ್ಲಿಕಾರ್ಜುನ್, ಗೃಹ ಸಚಿವ ಡಾ.ಜಿ.ಪರಮೇಶ್ವರ್, ಹಿರಿಯ ಶಾಸಕ ಡಾ.ಶಾಮನೂರು ಶಿವಶಂಕರಪ್ಪ ಆಗಮಿಸಲಿದ್ದಾರೆ ಎಂದರು.
ವೇದಿಕೆಯಲ್ಲಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಎಚ್.ಬಿ.ಮಂಜಪ್ಪ, ಶಾಸಕರಾದ ಡಿ.ಜಿ.ಶಾಂತನಗೌಡ, ಲತಾ ಮಲ್ಲಿಕಾರ್ಜುನ, ಶಿವಗಂಗಾ ಬಸವರಾಜ್, ಬಿ.ದೇವೇಂದ್ರಪ್ಪ. ಕೆ.ಎಸ್. ಬಸವಂತಪ್ಪ, ಕೆ.ಅಬ್ದುಲ್ ಜಬ್ಬಾರ್, ಮಾಜಿ ಶಾಸಕರು, 2023ರ ವಿಧಾನಸಭಾ ಕಾಂಗ್ರೆಸ್ ಅಭ್ಯರ್ಥಿಗಳು, ಕೆಪಿಸಿಸಿ ಪದಾಧಿಕಾರಿಗಳು, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರು, ಜಿಲ್ಲಾ ಕಾಂಗ್ರೆಸ್ ಪದಾಧಿಕಾರಿಗಳು, ಜಿಲ್ಲಾ ಕಾಂಗ್ರೆಸ್‌ನ ಮುಂಚೂಣಿ ಘಟಕಗಳ ಅಧ್ಯಕ್ಷರು, ಜಿಲ್ಲಾ ಕಾಂಗ್ರೆಸ್ ಮುಖಂಡರು ಸೇರಿ 60 ಗಣ್ಯರು ಉಪಸ್ಥಿತರಿರುವರು ಎಂದು ತಿಳಿಸಿದರು.ಈಗಾಗಲೇ ವೇದಿಕೆ ನಿರ್ಮಾಣಗೊಳ್ಳುತ್ತಿದ್ದು, 60 ಗಣ್ಯರಿಗೆ ಆಸನ ವ್ಯವಸ್ಥೆ ಕಲ್ಪಿಸಲಾಗಿದೆ. ವೇದಿಕೆ ಮುಂಭಾಗ 45 ಸಾವಿರ ಕುರ್ಚಿಗಳ ಹಾಕಲಾಗಿದೆ. ಕಾರ್ಯಕ್ರಮಕ್ಕೆ 1 ಲಕ್ಷ ಜನರು ಭಾಗವಹಿಸುವ ನಿರೀಕ್ಷೆ ಇದೆ. ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳಿಂದ ಕರ್ನಾಟಕದ ಮಹಿಳೆಯರು, ನಿರುದ್ಯೋಗಿ ಯುವಕ-ಯುವತಿಯರು ಸೇರಿದಂತೆ ಎಲ್ಲ ವರ್ಗದ ಜನರಿಗೆ ಆಗಿರುವ ಅನುಕೂಲಗಳು ಮತ್ತು ಕೇಂದ್ರದಲ್ಲಿ ಕಾಂಗ್ರೆಸ್ ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬಂದರೆ ಕೊಡುವ ಜನಪ್ರಿಯ ಗ್ಯಾರಂಟಿ ಕಾರ್ಯಕ್ರಮಗಳ ಕುರಿತು ಪ್ರಿಯಾಂಕ ಗಾಂಧಿ ಮಾತನಾಡುವರು ಎಂದು ತಿಳಿಸಿದರು.
ಕಳೆದ 10 ವರ್ಷಗಳಲ್ಲಿ ಆಡಳಿತ ನಡೆಸಿದ ಬಿಜೆಪಿ ಸರ್ಕಾರದ ಜನವಿರೋಧಿ, ರೈತ ವಿರೋಧಿ, ಬೆಲೆ ಏರಿಕೆ, ಮಹಿಳೆಯರ ಮೇಲಿನ ದೌರ್ಜನ್ಯಗಳ ಕುರಿತು ಪ್ರಿಯಾಂಕ ಗಾಂಧಿ ವಿಷಯಗಳನ್ನು ಪ್ರಸ್ತಾಪಿಸಲಿದ್ದಾರೆ. ಈ ಎಲ್ಲ ನಾಯಕರ ಆಗಮನದಿಂದ ದಾವಣಗೆರೆ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಪರವಾದ ಅಲೆ ಮತ್ತಷ್ಟು ಹೆಚ್ಚಾಗಲಿದೆ ಎಂದು ಹೇಳಿದರು.ಈ ಸಂದರ್ಭ ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ದಿನೇಶ್ ಕೆ.ಶೆಟ್ಟಿ, ಅಸಗೋಡು ಜಯಸಿಂಹ, ಡಿ.ಬಸವರಾಜ್, ಎಸ್.ಮಲ್ಲಿಕಾರ್ಜುನ್ ಇತರರು ಉಪಸ್ಥಿತರಿದ್ದರು.
- - - -3ಕೆಡಿವಿಜಿ44ಃ: ಪ್ರಿಯಾಂಕ ಗಾಂಧಿ