ಸಾರಾಂಶ
ಕನ್ನಡಪ್ರಭ ವಾರ್ತೆ ಹುಬ್ಬಳ್ಳಿ
ವಿಧಾನಸೌಧದಲ್ಲಿ ಪಾಕಿಸ್ತಾನ ಪರ ಘೋಷಣೆ ಕೂಗಿದ್ದನ್ನು ಖಂಡಿಸಿ ಇಲ್ಲಿನ ತಹಸೀಲ್ದಾರ್ ಕಚೇರಿ ಎದುರು ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.ಇಲ್ಲಿನ ತಹಸೀಲ್ದಾರ ಕಚೇರಿ ಎದುರು ಪ್ರತಿಭಟನೆ ನಡೆಸಿದ ಮಹಾನಗರ ಜಿಲ್ಲಾ ಬಿಜೆಪಿ ಕಾರ್ಯಕರ್ತರು ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ನೂತನವಾಗಿ ಆಯ್ಕೆಯಾದ ರಾಜ್ಯಸಭಾ ಸದಸ್ಯ ಸಯ್ಯದ್ ನಾಸೀರ್ ಹುಸೇನ್ ಹಾಗೂ ಕಾಂಗ್ರೆಸ್ ಸರ್ಕಾರವನ್ನು ವಜಾಗೊಳಿಸಬೇಕು ಎಂದು ಒತ್ತಾಯಿಸಿದರು.
ಮಹಾನಗರ ಅಧ್ಯಕ್ಷ ತಿಪ್ಪಣ್ಣ ಮಜ್ಜಗಿ, ಪಾಲಿಕೆ ಸದಸ್ಯರಾದ ರಾಜಣ್ಣ ಕೊರವಿ, ಎಂ.ವೈ. ನರಗುಂದ, ಉಮಾ ಮುಕುಂದ, ಮೀನಾಕ್ಷಿ ವಂಟಮೂರಿ, ದತ್ತಮೂರ್ತಿ ಕುಲಕರ್ಣಿ, ಚಂದ್ರಶೇಖರ ಗೋಕಾಕ, ಸತೀಶ ಶೇಜವಾಡಕರ, ಮಹೇಂದ್ರ ಕೌತಾಳ, ರಂಗಾ ಬದ್ದಿ, ವಸಂತ ನಾಡಜೋಶಿ, ಸತೀಶ ನೂಲ್ವಿ, ಮಂಜುನಾಥ ಕಾಟ್ಕರ ಸೇರಿದಂತೆ ನೂರಾರು ಕಾರ್ಯಕರ್ತರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.ಎಬಿವಿಪಿ ಪ್ರತಿಭಟನೆ
ವಿಧಾನಸೌಧದಲ್ಲಿ ಪಾಕಿಸ್ತಾನ ಪರ ಘೋಷಣೆ ಕೂಗಿದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿ ಎಬಿವಿಪಿ ಪದಾಧಿಕಾರಿಗಳು ಬುಧವಾರ ಪ್ರತಿಭಟನೆ ನಡೆಸಿದರು.ಇಲ್ಲಿಯ ಬಿವಿಬಿ ಆವರಣದ ಎದುರು ಪ್ರತಿಭಟನೆ ನಡೆಸಿದ ಪದಾಧಿಕಾರಿಗಳು, ಹು-ಧಾ ರಸ್ತೆಯ ಮಧ್ಯದಲ್ಲಿ ಮಾನವ ಸರಪಳಿ ನಿರ್ಮಿಸಿ ಕೆಲಹೊತ್ತು ರಸ್ತೆ ಬಂದ್ ಮಾಡಿ ಆಕ್ರೋಶ ವ್ಯಕ್ತಪಡಿಸಿದರು. ಈ ವೇಳೆ ಪ್ರತಿಭಟನಾಕಾರರು ಹಾಗೂ ಪೊಲೀಸರ ಮಧ್ಯೆ ವಾಗ್ವಾದ ಸಹ ಉಂಟಾಯಿತು. ಪ್ರತಿಭಟನಾಕಾರರ ಮನವೊಲಿಸಿದ ಬಳಿಕ ಪ್ರತಿಭಟನೆ ಹಿಂಪಡೆದರು.
ಕಾಂಗ್ರೆಸ್ ಅಭ್ಯರ್ಥಿ ಸೈಯದ್ ನಾಸೀರ್ ಹುಸೇನ್ ರಾಜ್ಯಸಭಾ ಚುನಾವಣೆಯಲ್ಲಿ ಗೆಲುವು ಸಾಧಿಸಿದ ವೇಳೆ ಅವರ ಬೆಂಬಲಿಗರು ಪಾಕ್ ಪರ ಘೋಷಣೆ ಕೂಗಿರುವುದು ಖಂಡನೀಯ. ಈ ವೇಳೆ ರಾಜ್ಯಸಭಾ ಸದಸ್ಯ ನಾಸೀರ್ ಹಾಗೂ ಅವರ ಸುತ್ತಮುತ್ತಲು ಇದ್ದಂತಹವರು ಅದನ್ನು ತಡೆಯುವ ಪ್ರಯತ್ನವನ್ನೂ ಮಾಡಲಿಲ್ಲ. ವಿರೋಧವನ್ನೂ ವ್ಯಕ್ತಪಡಿಸಲಿಲ್ಲ. ಮೇಲ್ನೋಟಕ್ಕೆ ದೇಶ ದ್ರೋಹಿಗಳಿಗೆ ಬೆಂಬಲ ನೀಡುತ್ತಿರುವುದು ಸ್ಪಷ್ಟವಾಗುತ್ತಿದೆ ಎಂದು ಆರೋಪಿಸಿದರು.ಕೆಲ ದಿನಗಳ ಹಿಂದೆ ವಿಧಾನಸಭೆ ಚುನಾವಣೆ ಗೆಲುವಿನ ಸಂದರ್ಭದಲ್ಲೂ ಬೆಳಗಾವಿಯಲ್ಲಿ ಪಾಕಿಸ್ತಾನ ಪರ ಘೋಷಣೆ ಕೂಗಿ ಧ್ವಜ ಹಾರಿಸಿದ್ದರು. ದೇಶದ್ರೋಹಿಗಳಿಗೆ ವಿಧಾನಸಭೆಯಲ್ಲಿ ಜಾಗ ಕೊಟ್ಟಿರುವುದು ಆತಂಕಕಾರಿ ಬೆಳವಣಿಗೆ. ಈ ವಿಷಯ ಅತ್ಯಂತ ಗಂಭೀರವಾಗಿದ್ದರೂ ಸರ್ಕಾರ ಯಾವುದೇ ಕ್ರಮ ಕೈಗೊಂಡಿಲ್ಲ. ಆದ್ದರಿಂದ ತಕ್ಷಣವೇ ದೇಶದ್ರೋಹಿಗಳ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳಬೇಕು. ಇಲ್ಲವಾದರೆ ರಾಜ್ಯಾದ್ಯಂತ ಉಗ್ರ ಪ್ರತಿಭಟನೆ ನಡೆಸಲಾಗುವುದು ಎಂದು ಎಚ್ಚರಿಸಿದರು.
ಪ್ರತಿಭಟನೆಯಲ್ಲಿ ಮೌನೀಷ ಆರ್. ಗೌಡ, ಹಿತೇಷ, ಶಶಿ, ಭರತ ಎಸ್., ನಾಗರಾಜ ಸೇರಿದಂತೆ ಇತರರು ಇದ್ದರು.