. ಸಿಟಿ ಆಸ್ಪತ್ರೆ ಹಾಗೂ ಹೆರಿಗೆ ಆಸ್ಪತ್ರೆ ಸೇರಿದಂತೆ ಲಭ್ಯವಾಗುವ ಒಟ್ಟು 600ಕ್ಕೂ ಹೆಚ್ಚು ಬೆಡ್‌ಗಳ ಆಧಾರದ ಮೇಲೆ ಹೊಸಪೇಟೆಯಲ್ಲಿ ಮೆಡಿಕಲ್ ಕಾಲೇಜು ಸ್ಥಾಪನೆಗೆ ಪ್ರಸ್ತಾವನೆ ಸಲ್ಲಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಶಾಸಕ ಎಚ್.ಆರ್. ಗವಿಯಪ್ಪ ಹೇಳಿದರು.

ಹೊಸಪೇಟೆ: ಜಿಲ್ಲಾಸ್ಪತ್ರೆಗೆ ಅಗತ್ಯವಿರುವ ಶೇ. 40ರಿಂದ 50ರಷ್ಟು ಉಪಕರಣಗಳು ಈಗಾಗಲೇ ಬಂದಿದ್ದು, ಸೆಪ್ಟೆಂಬರ್‌ನಲ್ಲಿ ಉಳಿದ ಉಪಕರಣಗಳು ಹಾಗೂ ಫರ್ನಿಚರ್ ಪೂರೈಕೆಯಾಗಲಿದೆ. ಒಟ್ಟು ಹುದ್ದೆಗಳ ಪೈಕಿ ಆರಂಭಿಕವಾಗಿ ಅಗತ್ಯ ಸಿಬ್ಬಂದಿ ನಿಯೋಜಿಸಿ, ಅಕ್ಟೋಬರ್ ಮೊದಲ ವಾರದಲ್ಲಿ ಮುಖ್ಯಮಂತ್ರಿಗಳಿಂದ ಆಸ್ಪತ್ರೆ ಉದ್ಘಾಟನೆ ಮಾಡುವ ಗುರಿ ಹೊಂದಲಾಗಿದೆ ಎಂದು ಶಾಸಕ ಎಚ್.ಆರ್. ಗವಿಯಪ್ಪ ಹೇಳಿದರು.

ನಗರದಲ್ಲಿ ಶಿಕ್ಷಣ, ವಸತಿ ಹಾಗೂ ಕುಡಿಯುವ ನೀರಿನ ಮೂಲಸೌಕರ್ಯ ಬಲಪಡಿಸುವ ನಿಟ್ಟಿನಲ್ಲಿ ಒಟ್ಟು ₹8.62 ಕೋಟಿ ವೆಚ್ಚದ ಮೇಲ್ಮಟ್ಟದ ಜಲಸಂಗ್ರಹಗಾರ ಹಾಗೂ ಮೆಟ್ರಿಕ್ ನಂತರ ಬಾಲಕಿಯರ ವಸತಿ ನಿಲಯ ಕಾಮಗಾರಿಗಳಿಗೆ ಭಾನುವಾರ ಭೂಮಿಪೂಜೆ ನೆರವೇರಿಸಿ ಮಾತನಾಡಿದರು.

ಹೆಚ್ಚುವರಿಯಾಗಿ ₹20 ಕೋಟಿ ವೆಚ್ಚದಲ್ಲಿ 100 ಬೆಡ್‌ಗಳನ್ನು ಸೇರ್ಪಡೆಗೊಳಿಸಿ 400 ಬೆಡ್‌ಗಳ ಆಸ್ಪತ್ರೆಯನ್ನಾಗಿ ಅಭಿವೃದ್ಧಿಪಡಿಸಲಾಗುವುದು. ಸಿಟಿ ಆಸ್ಪತ್ರೆ ಹಾಗೂ ಹೆರಿಗೆ ಆಸ್ಪತ್ರೆ ಸೇರಿದಂತೆ ಲಭ್ಯವಾಗುವ ಒಟ್ಟು 600ಕ್ಕೂ ಹೆಚ್ಚು ಬೆಡ್‌ಗಳ ಆಧಾರದ ಮೇಲೆ ಹೊಸಪೇಟೆಯಲ್ಲಿ ಮೆಡಿಕಲ್ ಕಾಲೇಜು ಸ್ಥಾಪನೆಗೆ ಪ್ರಸ್ತಾವನೆ ಸಲ್ಲಿಸಲು ಕ್ರಮ ಕೈಗೊಳ್ಳಲಾಗುವುದು ಎಂದರು.

ನೂತನ ವಸತಿ ನಿಲಯ ನಿರ್ಮಾಣದಿಂದ ದೂರದ ಪ್ರದೇಶಗಳಿಂದ ಬಂದು ವ್ಯಾಸಂಗ ಮಾಡುವ ವಿದ್ಯಾರ್ಥಿನಿಯರಿಗೆ ಸುರಕ್ಷಿತ ಹಾಗೂ ಉತ್ತಮ ವಸತಿ ಸೌಲಭ್ಯ ದೊರೆಯಲಿದೆ. ಇದರಿಂದ ಸುಮಾರು 150 ವಿದ್ಯಾರ್ಥಿಗಳಿಗೆ ವಸತಿ ಸೌಲಭ್ಯ ದೊರಕಲಿದೆ ಎಂದು ಹೇಳಿದರು.

ಕಾಮಗಾರಿ 1ರಿಂದ 1.5 ವರ್ಷದಲ್ಲಿ ಪೂರ್ಣಗೊಳ್ಳುವ ನಿರೀಕ್ಷೆಯಿದೆ. ಆಕಾಶವಾಣಿ ಬಡಾವಣೆಯ ಈಶ್ವರ ನಗರದಲ್ಲೂ ಮತ್ತೊಂದು ಟ್ಯಾಂಕ್ ಹಾಗೂ ಸಮುದಾಯ ಭವನ ನಿರ್ಮಾಣಕ್ಕೆ ಕ್ರಮ ಕೈಗೊಳ್ಳಲಾಗುವುದು. ಈ ಕುರಿತು ಸಚಿವರೊಂದಿಗೆ ಚರ್ಚಿಸಿ ಶೀಘ್ರದಲ್ಲಿಯೇ ಸಚಿವ ಕೆ.ಎಸ್. ಬಸವಂತಪ್ಪ ನೇತೃತ್ವದಲ್ಲಿ ಭೂಮಿಪೂಜೆ ನೆರವೇರಿಸಲಾಗುವುದು ಎಂದರು.

ಬಾಗಿನ ಅರ್ಪಣೆ

ತುಂಗಭದ್ರಾ ಜಲಾಶಯ ಭರ್ತಿಯಾಗುತ್ತಿರುವ ಹಿನ್ನೆಲೆಯಲ್ಲಿ ಮುಂದಿನವಾರ ಮುಖ್ಯಮಂತ್ರಿ, ಜಿಲ್ಲಾ ಉಸ್ತುವಾರಿ ಸಚಿವರ ಸಮ್ಮುಖದಲ್ಲಿ ಬಾಗಿನ ಅರ್ಪಿಸುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗುವುದು. ಭದ್ರಾ ಮತ್ತು ತುಂಗಾ ನದಿಗಳಿಂದ ಉತ್ತಮ ಒಳಹರಿವು ಇರುವುದರಿಂದ ಈ ವರ್ಷ ದ್ವಿತೀಯ ಬೆಳೆಗೆ ನೀರಿನ ಅಭಾವ ಎದುರಾಗುವುದಿಲ್ಲ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ನಗರದಲ್ಲಿ ಅಮೃತ ನಗರೋತ್ಥಾನ ಯೋಜನೆಯಡಿ ಕುಡಿಯುವ ನೀರಿನ ಸೌಲಭ್ಯವನ್ನು ಸುಧಾರಿಸಲು ಬಾಲಾಜಿ ನಗರದಲ್ಲಿ 10 ಲಕ್ಷ ಲೀಟರ್ ಸಾಮರ್ಥ್ಯದ ಮೇಲ್ಮಟ್ಟದ ಜಲಸಂಗ್ರಹಗಾರ ನಿರ್ಮಾಣ ಹಾಗೂ 250 ಮಿ.ಮೀ. ವ್ಯಾಸದ ಡಿ.ಐ. ಪೈಪ್‌ಲೈನ್ ಮೂಲಕ ನೀರು ಪೂರೈಸುವ ₹203.58 ಲಕ್ಷ ವೆಚ್ಚದ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಿದರು.

ಈ ಸಂದರ್ಭದಲ್ಲಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಎಚ್ಎನ್ಎಫ್ ಇಮಾಮ್ ನಿಯಾಜಿ, ನಗರಸಭೆ ಅಧ್ಯಕ್ಷ ಎನ್. ರೂಪೇಶ್ ಕುಮಾರ್, ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಮನೋಹರ್, ನಗರಸಭೆ ಪೌರಾಯುಕ್ತ ಎರಗುಡಿ ಶಿವಕುಮಾರ್, ವಿವಿಧ ವಾರ್ಡ್ ಸದಸ್ಯರು, ಜನಪ್ರತಿನಿಧಿಗಳು ಹಾಗೂ ಮುಖಂಡರು ಉಪಸ್ಥಿತರಿದ್ದರು.