ದೊಡ್ಡಬಳ್ಳಾಪುರ: ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ನ.1ರಂದು ನಡೆಯಲಿರುವ ಕನ್ನಡ ರಾಜ್ಯೋತ್ಸವ ಸಮಾರಂಭದ ಪೂರ್ವಬಾವಿ ಸಭೆ ತಾಲೂಕು ಕಚೇರಿ ಸಭಾಂಗಣದಲ್ಲಿ ನಡೆಯಿತು
ದೊಡ್ಡಬಳ್ಳಾಪುರ: ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ನ.1ರಂದು ನಡೆಯಲಿರುವ ಕನ್ನಡ ರಾಜ್ಯೋತ್ಸವ ಸಮಾರಂಭದ ಪೂರ್ವಬಾವಿ ಸಭೆ ತಾಲೂಕು ಕಚೇರಿ ಸಭಾಂಗಣದಲ್ಲಿ ನಡೆಯಿತು.
ಸಭೆಯಲ್ಲಿ ಮಾತನಾಡಿ ವಿವಿಧ ಸಂಘಟನೆಗಳ ಮುಖಂಡರು, ಕನ್ನಡ ರಾಜ್ಯೋತ್ಸವ ಕಾರ್ಯಕ್ರಮಕ್ಕಷ್ಟೇ ಸೀಮಿತವಾಗದೇ ಕನ್ನಡ ಬಳಕೆ ಹಾಗೂ ಅನುಷ್ಟಾನಕ್ಕೆ ಪೂರಕವಾಗಬೇಕು. ಈ ನಿಟ್ಟಿನಲ್ಲಿ ವಾಣಿಜ್ಯ ಹಾಗೂ ಇತರೆ ನಾಮಫಲಕಗಳಲ್ಲಿ ಕನ್ನಡ ಬಳಸದೇ ಇರುವವರ ವಿರುದ್ಧ ಎಲ್ಲಾ ಸಂಘಟನೆಗಳು ಒಟ್ಟಾಗಿ ಹೋರಾಟ ನಡೆಸಬೇಕು. ಇದಕ್ಕೆ ಅಧಿಕಾರಿಗಳು ಸೂಕ್ತ ಸಹಕಾರ ನೀಡಬೇಕು. ಕನ್ನಡ ಭಾಷೆಯ ನಾಮಫಲಕಗಳನ್ನು ಎಲ್ಲರು ಕಡ್ಡಾಯವಾಗಿ ಬಳಸುವಂತೆ ಮಾಡಬೇಕು ಎಂದರು. ಇತ್ತೀಚಿನ ದಿನಗಳಲ್ಲಿ ವಾಣಿಜ್ಯ ಉದ್ದೇಶದ ನಾಮಫಲಕಗಳಲ್ಲಿ ಇಂಗ್ಲಿಷ್ ಹಾಗೂ ಹಿಂದಿ ಭಾಷೆಗೆ ಹೆಚ್ಚಿನ ಒತ್ತು ನೀಡಲಾಗುತ್ತಿದೆ. ಈ ನಾಮಫಲಕಗಳನ್ನು ತೆರುವುಗೊಳಿಸಲು ಒಟ್ಟಾಗಿ ಹೋರಾಟ ನಡೆಸಲು, ಹಾಗೆಯೇ ನವೆಂಬರ್ 1 ರಂದು ನಗರದ ಎಲ್ಲಾ 31 ವಾರ್ಡ್ಗಳಲ್ಲಿನ ಮನೆಗಳ ಮೇಲೆ ಕನ್ನಡ ಭಾವುಟ ಹಾರಿಸುವಂತೆ ಸಾರ್ವಜನಿಕರಲ್ಲಿ ತಾಲ್ಲೂಕು ಆಡಳಿತ ಮನವಿ ಮಾಡಬೇಕು . ಶಾಲಾ ಕಾಲೇಜುಗಳಲ್ಲಿ ಕನ್ನಡ ರಾಜ್ಯೋತ್ಸವ ಕಡ್ಡಾಯವಾಗಿ ಆಚರಿಸಬೇಕು ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.ತಹಸೀಲ್ದಾರ್ ಮಲ್ಲಪ್ಪ ಕೆ.ಯರಗೋಳ ಮಾತನಾಡಿ, ಕರ್ನಾಟಕ ರಾಜ್ಯೋತ್ಸವ ಆಚರಣೆಯನ್ನು ಈ ಹಿಂದಿನ ವರ್ಷಗಳಂತೆಯೇ ಅದ್ದೂರಿಯಾಗಿ ನಡೆಸಲಾಗುವುದು. ತಾಲೂಕು ಕಚೇರಿಯಿಂದ ಪ್ರಾರಂಭಿಸಿ ನಗರದ ಪ್ರಮುಖ ರಸ್ತೆಗಳಲ್ಲಿ ವಿವಿಧ ಕಲಾ ತಂಡಗಳೊಂದಿಗೆ ಭುವನೇಶ್ವರ ತಾಯಿ ಮೆರವಣಿಗೆ ನಡೆಸಲಾಗುವುದು. ವೇದಿಕೆ ಕಾರ್ಯಕ್ರಮವನ್ನ ಡಾ.ರಾಜಕುಮಾರ್ ಕಲಾ ಭವನದಲ್ಲಿ ನಡೆಸಲಾಗುವುದು. ವಿವಿಧ ಕ್ಷೇತ್ರಗಳ ಸಾಧಕರನ್ನು ಸನ್ಮಾನಿಸಲಾಗುವುದು ಎಂದರು.
ಸಭೆಯಲ್ಲಿ ತಾಪಂ ಇಒ ಮಂಜುನಾಥ ಹರ್ತಿ, ನಗರಸಭೆ ಪೌರಾಯುಕ್ತ ಕಾರ್ತೀಕೇಶ್ವರ, ಬಿಇಒ ಟಿ.ಎಸ್.ಶಂಕರಯ್ಯ, ವಿವಿಧ ಇಲಾಖೆಯ ಅಧಿಕಾರಿಗಳು ಹಾಗೂ ಕನ್ನಡಪರ ಸಂಘಟನೆಗಳ ಮಖಂಡರು ಭಾಗವಹಿಸಿದ್ದರು.18ಕೆಡಿಬಿಪಿ1- ದೊಡ್ಡಬಳ್ಳಾಪುರದ ತಾಲೂಕು ಕಚೇರಿಯಲ್ಲಿ ಕನ್ನಡ ರಾಜ್ಯೋತ್ಸವ ಪೂರ್ವಭಾವಿ ಸಭೆ ನಡೆಯಿತು.