ನೆತ್ತಿ ಸುಡುವ ಬಿಸಿಲನ್ನೂ ಲೆಕ್ಕಿಸದೆ ರೈತರು ಕಬಿನಿ ನಾಲೆಗೆ 4 ಕಟ್ಟು ಪದ್ಧತಿಯಲ್ಲಿ ನೀರು ಹರಿಸುವಂತೆ ಒತ್ತಾಯಿಸಿ ಘೋಷಣೆ

ಕನ್ನಡಪ್ರಭ ವಾರ್ತೆ ಟಿ. ನರಸೀಪುರಕಬಿನಿ ನಾಲೆಯ ವ್ಯಾಪ್ತಿಯ ರೈತರ ಬೆಳೆಗಳಿಗೆ ನೀರು ಹರಿಸುವಂತೆ ಆಗ್ರಹಿಸಿ ತಾಲೂಕಿನ ಮೂಗೂರು ಗ್ರಾಮದಲ್ಲಿ ನೂರಾರು ರೈತರು ಗುರುವಾರ ರಸ್ತೆ ತಡೆ ನಡೆಸಿ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.ಮೂಗೂರು ಗ್ರಾಮದ ಶ್ರೀ ತ್ರಿಪುರಸುಂದರಿ ಅಮ್ಮನವರ ದೇವಸ್ಥಾನದ ಬಳಿ ಜಮಾವಣೆಗೊಂಡ ರೈತರು, ಗ್ರಾಮಗಳ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ನಡೆಸಿ ಬಳಿಕ ಹಳೇ ಬಸ್ ನಿಲ್ದಾಣದ ಬಳಿಯ ರಾಷ್ಟ್ರೀಯ ಹೆದ್ದಾರಿ-212ಕ್ಕೆ ತೆರಳಿ ರಸ್ತೆಗಡ್ಡಲಾಗಿ ಕುಳಿತು ಪ್ರತಿಭಟನೆ ನಡೆಸಿದರು. ನೆತ್ತಿ ಸುಡುವ ಬಿಸಿಲನ್ನೂ ಲೆಕ್ಕಿಸದೆ ರೈತರು ಕಬಿನಿ ನಾಲೆಗೆ 4 ಕಟ್ಟು ಪದ್ಧತಿಯಲ್ಲಿ ನೀರು ಹರಿಸುವಂತೆ ಒತ್ತಾಯಿಸಿ ಘೋಷಣೆಗಳನ್ನು ಕೂಗಿದರು.ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ಜಲಸಂಪನ್ಮೂಲ ಸಚಿವ ಚಲುವರಾಯಸ್ವಾಮಿ ವಿರುದ್ಧ ಧಿಕ್ಕಾರದ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದ ಪ್ರತಿಭಟನಾಕಾರರು, ಕ್ಷೇತ್ರದ ಶಾಸಕ ಹಾಗೂ ಮಾಜಿ ಸಚಿವ ಎಚ್.ಸಿ.ಮಹದೇವಪ್ಪ ಅವರು ಕಬಿನಿ ನಾಲೆಗೆ ನೀರು ಹರಿಸಲು ವಿಫಲರಾಗಿದ್ದಾರೆ ಎಂದು ತೀವ್ರ ಅಸಮಾಧಾನ ವ್ಯಕ್ತಪಡಿಸಿದರು.ಸುಮಾರು ಅರ್ಧ ಗಂಟೆಗೂ ಹೆಚ್ಚು ಕಾಲ ನಡೆದ ರಸ್ತೆ ತಡೆಯಿಂದ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಚಾರ ಅಸ್ತವ್ಯಸ್ತಗೊಂಡಿತು. ವಾಹನ ಸವಾರರು ಬದಲಿ ಮಾರ್ಗದ ಮೂಲಕ ಸಂಚರಿಸಬೇಕಾಯಿತು. ಪೊಲೀಸರು ಪ್ರತಿಭಟನಾಕಾರರನ್ನು ಮನವೊಲಿಸಿ ರಸ್ತೆ ತೆರವುಗೊಳಿಸುವಂತೆ ಮನವಿ ಮಾಡಿದರೂ ರೈತರು ಪ್ರತಿಭಟನೆ ಹಿಂಪಡೆಯಲು ನಿರಾಕರಿಸಿದರು.ಕಬಿನಿ ನೀರಾವರಿ ಇಲಾಖೆಯ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿ ನಾಲೆಗಳಿಗೆ ನೀರು ಹರಿಸುವ ಭರವಸೆ ನೀಡುವವರೆಗೆ ಪ್ರತಿಭಟನೆ ಮುಂದುವರಿಸುವುದಾಗಿ ರೈತರು ಎಚ್ಚರಿಸಿದರು. ಸರ್ಕಾರದ ವಿರುದ್ಧ ಆಕ್ರೋಶಪ್ರತಿಭಟನಾಕಾರರನ್ನು ಉದ್ದೇಶಿಸಿ ಮಾತನಾಡಿದ ತಾಪಂ ಮಾಜಿ ಸದಸ್ಯ ಚಂದ್ರಶೇಖರ್, ಪಾರುಪತ್ತೇದಾರ್ ಸಾಗರ್, ಗ್ರಾಪಂ ಮಾಜಿ ಸದಸ್ಯ ಎಂ.ಎಸ್. ಜಯಣ್ಣ, ಸಿದ್ದರಾಜು, ಕಬಿನಿ ನಾಲೆಗೆ ನೀರು ಹರಿಸಲು ವಿಫಲವಾಗಿರುವ ಸರ್ಕಾರ ಹಾಗೂ ಕ್ಷೇತ್ರದ ಶಾಸಕರ ನಡೆಗೆ ಖಂಡನೆ ವ್ಯಕ್ತಪಡಿಸಿದರು.ಉಪ ತಹಶೀಲ್ದಾರ್ ಕೆ.ಎನ್. ಲಕ್ಷ್ಮಿ ಅವರಿಗೆ ಮನವಿ ಸಲ್ಲಿಸಿದ ಬಳಿಕ ಪ್ರತಿಭಟನೆ ಅಂತ್ಯಗೊಳಿಸಲಾಯಿತು. ಎಸ್‌ಐ ಮಲ್ಲೇಶ್ ನೇತೃತ್ವದಲ್ಲಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿತ್ತು.ಪ್ರತಿಭಟನೆಯಲ್ಲಿ ಶರತ್, ಮೋಹನ್ ಕುಮಾರ್, ನಾಗೇಂದ್ರ, ಭಾನು, ಮನು, ಗುರುಸಿದ್ದಪ್ಪ, ಗೌಡ್ರ ನಾಗರಾಜು, ಅರವಿಂದ್, ಕುಮಾರ್, ನೂರಾರು ರೈತರು ಭಾಗವಹಿಸಿದ್ದರು.