ಸಾರಾಂಶ
ಇವರು ತುಮಕೂರು ವಿಶ್ವ ವಿದ್ಯಾಲಯದಲ್ಲಿ ಸಮಾಜ ಕಾರ್ಯ ಅಧ್ಯಯನ ಮತ್ತು ಸಂಶೋಧನಾ ವಿಭಾಗದ ಹಿರಿಯ ಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸಿದ್ದರು ಮತ್ತು ಬೆಂಗಳೂರು ನಗರ ವಿಶ್ವವಿದ್ಯಾಲಯದಲ್ಲಿ ಮೌಲ್ಯಮಾಪನ ಕುಲಸಚಿವರಾಗಿಯೂ ಕಾರ್ಯ ನಿರ್ವಹಿಸುತ್ತಿದ್ದರು.
ಕನಕಪುರ: ತಾಲೂಕಿನ ಟಿ. ಗೊಲ್ಲಹಳ್ಳಿ ಗ್ರಾಮದ ಪ್ರೊ. ರಮೇಶ್ ರವರು ಬೆಂಗಳೂರು ವಿಶ್ವವಿದ್ಯಾಲಯದ ನೂತನ ಉಪ ಕುಲಪತಿಯಾಗಿ ಸೋಮವಾರ ಅಧಿಕಾರ ಸ್ವೀಕರಿಸಿದ್ದಾರೆ. ರಾಜ್ಯಪಾಲರ ಆದೇಶದ ಮೇರೆಗೆ ಪ್ರಭಾರ ಕುಲಪತಿ ಪ್ರೊ. ಕೆ. ಆರ್. ಜಲಜಾ ಅವರು ಪ್ರೊ. ರಮೇಶ್ ಅವರಿಗೆ ಅಧಿಕಾರ ಹಸ್ತಾಂತರಿಸಿದ್ದು, ಇವರು ತುಮಕೂರು ವಿಶ್ವ ವಿದ್ಯಾಲಯದಲ್ಲಿ ಸಮಾಜ ಕಾರ್ಯ ಅಧ್ಯಯನ ಮತ್ತು ಸಂಶೋಧನಾ ವಿಭಾಗದ ಹಿರಿಯ ಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸಿದ್ದರು ಮತ್ತು ಬೆಂಗಳೂರು ನಗರ ವಿಶ್ವವಿದ್ಯಾಲಯದಲ್ಲಿ ಮೌಲ್ಯಮಾಪನ ಕುಲಸಚಿವರಾಗಿಯೂ ಕಾರ್ಯ ನಿರ್ವಹಿಸುತ್ತಿದ್ದರು.
ಪ್ರೊ. ಬಿ. ರಮೇಶ್ ಅವರು ಮೂಲತಃ ಕನಕಪುರ ತಾಲೂಕು ಕೋಡಿಹಳ್ಳಿ ಹೋಬಳಿ ಟಿ.ಗೊಲ್ಲಹಳ್ಳಿ ಗ್ರಾಮದ ಭದ್ರಗಿರಯ್ಯ ಹಾಗೂ ಚಿಕ್ಕಮ್ಮನವರ ಪುತ್ರ. ಇವರು ತಮ್ಮ ವಿದ್ಯಾಭ್ಯಾಸವನ್ನು ಟಿ. ಗೊಲ್ಲಹಳ್ಳಿ ಸರ್ಕಾರಿ ಪ್ರಾಥಮಿಕ ಶಾಲೆ ಹಾಗೂ ಮಾಧ್ಯಮಿಕ ಪ್ರೌಢ ಶಿಕ್ಷಣವನ್ನು ಕೋಡಿಹಳ್ಳಿಯ ಶ್ರೀ ಶಾರದಾ ಪ್ರೌಢ ಶಾಲೆಯಲ್ಲಿ ಮುಗಿಸಿ ಕಾಲೇಜು ಶಿಕ್ಷಣವನ್ನು ಬೆಂಗಳೂರು ವಿಶ್ವವಿದ್ಯಾಲಯದಲ್ಲಿ ಪೂರೈಸಿದ್ದರು. ಉಪ ಕುಲಪತಿಗಳಾಗಿ ಅಧಿಕಾರ ಸ್ವೀಕರಿಸಿದ ಇವರಿಗೆ ತಾಲೂಕಿನ ಸಂಘ- ಸಂಸ್ಥೆಗಳು ಹಾಗೂ ಗ್ರಾಮಸ್ಥರು ಅಭಿನಂದನೆ ಸಲ್ಲಿಸಿದ್ದಾರೆ.