ಕೃಷಿಯಿಂದ ಲಾಭ, ಉದ್ಯೋಗಾವಕಾಶ: ಸಚಿವ ಚೆಲುವರಾಯ ಸ್ವಾಮಿ
KannadaprabhaNewsNetwork | Published : Oct 15 2023, 12:46 AM IST
ಕೃಷಿಯಿಂದ ಲಾಭ, ಉದ್ಯೋಗಾವಕಾಶ: ಸಚಿವ ಚೆಲುವರಾಯ ಸ್ವಾಮಿ
ಸಾರಾಂಶ
ಬ್ರಹ್ಮಾವರದಲ್ಲಿ ಕೃಷಿ ಕಾಲೇಜು ಆರಂಭಿಸುವ ಕುರಿತಂತೆ ಅಧಿಕಾರಿಗಳು ಮತ್ತು ಕೃಷಿ ವಿಶ್ವವಿದ್ಯಾಲಯದ ಅಧಿಕಾರಿಗಳೊಂದಿಗೆ ಚರ್ಚಿಸಿ, ಸಕಾರಾತ್ಮಕ ಕ್ರಮ ಕೈಗೊಳ್ಳಲಾಗುವುದು.
ಕನ್ನಡಪ್ರಭ ವಾರ್ತೆ ಬ್ರಹ್ಮಾವರ ಕೃಷಿಯನ್ನು ಆಸಕ್ತಿ, ಶ್ರದ್ಧೆ ಮತ್ತು ಪ್ರಾಮಾಣಿಕತೆಯಿಂದ ಮಾಡಿದರೆ ಅತ್ಯಂತ ಲಾಭದಾಯಕವಾಗಿದ್ದು, ಜೊತೆಗೆ ಹಲವು ಮಂದಿಗೆ ಉದ್ಯೋಗ ಒದಗಿಸುವುದಕ್ಕೂ ಸಾಧ್ಯವಿದೆ. ಈ ಹಿನ್ನೆಲೆಯಲ್ಲಿ ಸರ್ಕಾರವು ರಾಜ್ಯದ ರೈತರಿಗೆ ಸಂಪೂರ್ಣ ಬೆಂಬಲ ಮತ್ತು ಅಗತ್ಯವಿರುವ ಎಲ್ಲ ರೀತಿಯ ನೆರವು ನೀಡುತ್ತಿದೆ ಎಂದು ರಾಜ್ಯದ ಕೃಷಿ ಸಚಿವ ಚೆಲುವರಾಯ ಸ್ವಾಮಿ ಹೇಳಿದರು. ಅವರು ಶನಿವಾರ ಇಲ್ಲಿನ ಚೇರ್ಕಾಡಿಯಲ್ಲಿ ಕೃಷಿ ವಿಜ್ಞಾನ ಕೇಂದ್ರದಲ್ಲಿ ತೋಟಗಾರಿಕಾ ಇಲಾಖೆಯು ವಿವಿಧ ಸಂಘ ಸಂಸ್ಥೆಗಳ ಸಹಯೋಗದಲ್ಲಿ ಆಯೋಸಿದ್ದ ಕೃಷಿ ಆಹಾರ ಸಸ್ಯ ಮೇಳ ಮತ್ತು ಉದ್ಯೋಗ ಮಾಹಿತಿ ಶಿಬಿರ ಉದ್ಘಾಟಿಸಿ ಮಾತನಾಡಿದರು. ರಾಜ್ಯಾದ್ಯಂತ ಈ ಬಾರಿಯ ಮುಂಗಾರು ಹಂಗಾಮಿನಲ್ಲಿ ರೈತರಿಗೆ ಬಿತ್ತನೆ ಬೀಜ ಮತ್ತು ರಸಗೊಬ್ಬರದ ಕೊರತೆಯಾಗದಂತೆ ಸಮರ್ಪಕವಾಗಿ ವಿತರಿಸಲಾಗಿದೆ. ನಕಲಿ ಬೀಜ ಮತ್ತು ಕಳಪೆ ರಸಗೊಬ್ಬರ ಮಾರಾಟಕ್ಕೆ ಕಡಿವಾಣ ಹಾಕಲಾಗಿದೆ. ಕೃಷಿ ಯಂತ್ರಧಾರೆ ಕೇಂದ್ರಗಳನ್ನು ಬೃಹತ್ ಪ್ರಮಾಣದಲ್ಲಿ ತೆರೆಯಲು ಅನುದಾನ ಮೀಸಲಿಡಲಾಗಿದೆ. ಸಿರಿಧಾನ್ಯ ಬೆಳೆಯುವ ರೈತರಿಗೆ ಹೆಕ್ಟೇರ್‌ಗೆ 10000 ರು. ಸಹಾಯಧನ ನೀಡಲಾಗುತ್ತಿದೆ. ರಾಜ್ಯದ ಎಲ್ಲ ಕೃಷಿ ಮತ್ತು ತೋಟಗಾರಿಕಾ ವಿಶ್ವವಿದ್ಯಾಲಯಗಳ ಮೂಲಕ ರೈತರಿಗೆ ಅವರ ಜಮೀನಿನ ಮಣ್ಣಿನ ಸಾರಾಂಶ ಬೆಳೆಯಬಹುದಾದ ಬೆಳೆಗಳು, ಹವಾಮಾನ ಆಧಾರಿತವಾಗಿ ಬೆಳೆಯಬಹುದಾದ ಬೆಳೆಗಳು, ಕಡಿಮೆ ನೀರಿನಲ್ಲಿ ಬೆಳೆಯಬಹುದಾದ ಮತ್ತು ಹೆಚ್ಚು ಇಳುವರಿ ನೀಡುವಂತಹ ಬೆಳೆಯಬಹುದಾದ ಬೆಳೆಗಳ ಬಗ್ಗೆ ಕಾಲಕಾಲಕ್ಕೆ ಮಾಹಿತಿಯನ್ನು ನೀಡಲಾಗುತ್ತಿದೆ ಎಂದರು. ಬ್ರಹ್ಮಾವರದಲ್ಲಿ ಕೃಷಿ ಕಾಲೇಜು ಆರಂಭಿಸುವ ಕುರಿತಂತೆ ಅಧಿಕಾರಿಗಳು ಮತ್ತು ಕೃಷಿ ವಿಶ್ವವಿದ್ಯಾಲಯದ ಅಧಿಕಾರಿಗಳೊಂದಿಗೆ ಚರ್ಚಿಸಿ, ಸಕಾರಾತ್ಮಕ ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಕೆ.ಜಯಪ್ರಕಾಶ್ ಹೆಗ್ಡೆ ವಹಿಸಿದ್ದರು. ಉಡುಪಿ ಶಾಸಕ ಯಶ್ಪಾಲ್ ಸುವರ್ಣ, ಚೇರ್ಕಾಡಿ ಗ್ರಾ.ಪಂ. ಅಧ್ಯಕ್ಷ ನಾರಾಯಣ ನಾಯ್ಕ, ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಶ್ವವಿದ್ಯಾಲಯದ ಕುಲಪತಿ ಡಾ.ಆರ್.ಸಿ. ಜಗದೀಶ್, ಬ್ರಹ್ಮಾವರ ವಲಯ ಕೃಷಿ ತೋಟಗಾರಿಕಾ ಸಂಶೋಧನಾ ಕೇಂದ್ರದ ಸಹ ಸಂಶೋಧನಾ ನಿರ್ದೇಶಕ ಡಾ.ಲಕ್ಷ್ಮಣ, ಹಿರಿಯ ವಿಜ್ಞಾನಿ ಡಾ.ಬಿ.ಧನಂಜಯ, ಕೃಷಿ ಇಲಾಖೆ ಜಂಟಿ ನಿರ್ದೇಶಕಿ ಸೀತಾ ಮತ್ತಿತರರು ಉಪಸ್ಥಿತರಿದ್ದರು. ಇದೇ ಸಂದರ್ಭ ಪ್ರಗತಿಪರ ಕೃಷಿಕರು ಮತ್ತು ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದವರನ್ನು ಸನ್ಮಾನಿಸಲಾಯಿತು.