ಗರಿಷ್ಠ ಮಟ್ಟದ ಮತದಾನಕ್ಕೆ ಕಾರ್ಯಕ್ರಮ ರೂಪಿಸಿ

| Published : Feb 19 2024, 01:37 AM IST

ಸಾರಾಂಶ

ವಿದ್ಯುನ್ಮಾನ ಮತಯಂತ್ರದ ಬಳಕೆ ಕುರಿತು ಪ್ರಾತ್ಯಕ್ಷಿಕೆ ನೀಡುವುದರ ಜತೆಗೆ ಶಾಲಾ ಕಾಲೇಜುಗಳಲ್ಲಿ ಮತದಾರರ ಸಾಕ್ಷರತಾ ಕ್ಲಬ್‌ಗಳ ಮೂಲಕ ಕಾರ್ಯಕ್ರಮ ಆಯೋಜಿಸಬೇಕು, ಮತದಾನ ಮಾಡುವಂತೆ ಪ್ರೋತ್ಸಾಹ ನೀಡಬೇಕು

ಕನ್ನಡಪ್ರಭ ವಾರ್ತೆ ಕೋಲಾರ

ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಜಿಲ್ಲೆಯಲ್ಲಿ ಗರಿಷ್ಠ ಸಂಖ್ಯೆಯಲ್ಲಿ ಮತದಾರರು ಮತದಾನ ಮಾಡುವ ಮೂಲಕ ದಾಖಲೆಯ ಮತದಾನ ನಡೆಯಬೇಕು ಎಂದು ಜಿಪಂ ಸಿಇಒ ಪದ್ಮ ಬಸವಂತಪ್ಪ ಹೇಳಿದರು.

ನಗರದ ಜಿಪಂ ಸಭಾಂಗಣದಲ್ಲಿ ಜಿಲ್ಲಾ ಸ್ವೀಪ್ ಸಮಿತಿ ಸಭೆಯಲ್ಲಿ ಮಾತನಾಡಿ, ಎಲ್ಲ ಇಲಾಖೆಗಳು ದೈನಂದಿನ ಕಾರ್ಯಕ್ರಮಗಳ ಜತೆ ಮತದಾನದ ಮಹತ್ವ ತಿಳಿಸುವ ಕೆಲಸ ಮಾಡಬೇಕು. ಸಾರ್ವಜನಿಕರಿಗೆ ವಿದ್ಯುನ್ಮಾನ ಮತಯಂತ್ರಗಳ ಬಳಕೆ, ವಿವಿ ಪ್ಯಾಟ್ ಪ್ರಾತ್ಯಕ್ಷಿಕೆ ನೀಡಬೇಕು ಎಂದು ಸೂಚನೆ ನೀಡಿದರು.

ಮತದಾನ ಮಾಡುವಂತೆ ಪ್ರೇರೇಪಿಸಿ

ಹಾಸ್ಟೆಲ್‌ಗಳಲ್ಲಿ ವಿದ್ಯಾರ್ಥಿಗಳಿಗೆ ವಿದ್ಯುನ್ಮಾನ ಮತಯಂತ್ರದ ಬಳಕೆ ಕುರಿತು ಪ್ರಾತ್ಯಕ್ಷಿಕೆ ನೀಡುವುದರ ಜತೆಗೆ ಶಾಲಾ ಕಾಲೇಜುಗಳಲ್ಲಿ ಮತದಾರರ ಸಾಕ್ಷರತಾ ಕ್ಲಬ್‌ಗಳ ಮೂಲಕ ಕಾರ್ಯಕ್ರಮ ಆಯೋಜಿಸಬೇಕು ಎಂದು ಡಿಡಿಪಿಐ ಮತ್ತು ಡಿಡಿಪಿಯುಗೆ ಸೂಚಿಸಿದರು. ವಲಸೆ ಮತದಾರರನ್ನು ಗುರುತಿಸಿ ಮತದಾನ ಯಂತ್ರದ ಬಳಕೆ ಕುರಿತು ಅರಿವು ಮತ್ತು ಜಾಗೃತಿ ಕಾರ್ಯಕ್ರಮ ಆಯೋಜಿಸಬೇಕು, ನಗರ ಮತ್ತು ಗ್ರಾಮಾಂತರ ಭಾಗದಲ್ಲಿ ಪ್ರತಿಯೊಬ್ಬರೂ ಮತದಾನ ಪ್ರಕ್ರಿಯೆಯಲ್ಲಿ ಭಾಗವಹಿಸುವಂತೆ ಪ್ರೇರೇಪಿಸಬೇಕು ಎಂದರು. ಜಿಲ್ಲೆಯಲ್ಲಿ ಕಳೆದ ಲೋಕಸಭಾ ಚುನಾವಣೆಯಲ್ಲಿ ಒಟ್ಟು ಶೇ.೭೭.೧೧ ಮತದಾನವಾಗಿದ್ದು, ಕಡಿಮೆ ಮತದಾನ ನಡೆದಿರುವ ಮತಗಟ್ಟೆಗಳ ವ್ಯಾಪ್ತಿಯಲ್ಲಿ ಸ್ವೀಪ್ ಸಮಿತಿ ಸದಸ್ಯರು ಅಧ್ಯಯನ ನಡೆಸಿ ಮತದಾನ ಕುಸಿತಕ್ಕೆ ಕಾರಣ ಪತ್ತೆ ಹಚ್ಚಿ ಮತದಾನ ಹೆಚ್ಚಳಕ್ಕೆ ಕೈಗೊಳ್ಳಬಹುದಾದ ಕ್ರಮಗಳ ಬಗ್ಗೆ ವರದಿ ನೀಡಬೇಕು.ಜಾಹೀರಾತು ವಿವರ ಸಂಗ್ರಹಿಸಿ

ನಗರ ಹಾಗೂ ಸ್ಥಳೀಯ ಸಂಸ್ಥೆಗಳು, ಗ್ರಾಪಂ ವ್ಯಾಪ್ತಿಯ ಸರ್ಕಾರಿ ಖಾಸಗಿ ಜಾಹೀರಾತು ಫಲಕಗಳ ಸಮಗ್ರ ವಿವರ ಸಂಗ್ರಹಿಸಿ ಚುನಾವಣೆ ಘೋಷಣೆಯಾದ ೨೪ ಗಂಟೆಯ ಒಳಗೆ ಫಲಕಗಳಲ್ಲಿ ಸ್ವೀಪ್ ಜಾಹೀರಾತು ಅಳವಡಿಸಬೇಕು. ವಿಶೇಷವಾಗಿ ಯುವ ಜನತೆ ಹೆಚ್ಚಿನ ಸಂಖ್ಯೆಯಲ್ಲಿ ಮತದಾನ ಪ್ರಕ್ರಿಯೆಯಲ್ಲಿ ಭಾಗವಹಿಸುವಂತೆ ಕಾರ್ಯಕ್ರಮ ರೂಪಿಸಿ ಎಂದು ಸಲಹೆ ನೀಡಿದರು.ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಚುನಾವಣೆ ಅತ್ಯಂತ ದೊಡ್ಡ ಹಬ್ಬವಾಗಿದ್ದು ಮತದಾರರು ಸಂಭ್ರಮಿಸಲು ಜಿಲ್ಲಾ ಸ್ವೀಪ್ ಸಮಿತಿ ವತಿಯಿಂದ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದರು. ಸಭೆಯಲ್ಲಿ ಜಿಪಂ ಉಪ ಕಾರ್ಯದರ್ಶಿ ಶಿವಕುಮಾರ್, ಮುಖ್ಯ ಯೋಜನಾ ನಿರ್ದೇಶಕ ರವಿಚಂದ್ರ ಇದ್ದರು.