ದೇಶದಲ್ಲಿ ಎಸ್‌ಐಆರ್ ಕುರಿತು ವಿರೋಧ ಪಕ್ಷಗಳು ಜನರನ್ನು ದಾರಿತಪ್ಪಿಸುತ್ತಿವೆ. ಈ ಹಿನ್ನೆಲೆಯಲ್ಲಿ ಬಿಜೆಪಿ ವತಿಯಿಂದ ಪ್ರಜಾಪ್ರಭುತ್ವ ಉಳಿಸಿ, ಅರಾಜಕತೆ ತೊಲಗಿಸಿ ಆಂದೋಲನ ಹಮ್ಮಿಕೊಂಡಿದ್ದು ಅ.೨೨ರಂದು ನ.೫ರವರೆಗೆ ಜನರಲ್ಲಿ ಜಾಗೃತಿ ಮೂಡಿಸಲು ರಾಜ್ಯಾದ್ಯಂತ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ ಎಂದು ರಾಜ್ಯ ಬಿಜೆಪಿ ಮುಖ್ಯ ವಕ್ತಾರ ಅಶ್ವಥ್‌ ನಾರಾಯಣ್ ಹೇಳಿದರು.

ಕನ್ನಡಪ್ರಭ ವಾರ್ತೆ ಚಾಮರಾಜನಗರ

ದೇಶದಲ್ಲಿ ಎಸ್‌ಐಆರ್ ಕುರಿತು ವಿರೋಧ ಪಕ್ಷಗಳು ಜನರನ್ನು ದಾರಿತಪ್ಪಿಸುತ್ತಿವೆ. ಈ ಹಿನ್ನೆಲೆಯಲ್ಲಿ ಬಿಜೆಪಿ ವತಿಯಿಂದ ಪ್ರಜಾಪ್ರಭುತ್ವ ಉಳಿಸಿ, ಅರಾಜಕತೆ ತೊಲಗಿಸಿ ಆಂದೋಲನ ಹಮ್ಮಿಕೊಂಡಿದ್ದು ಅ.೨೨ರಂದು ನ.೫ರವರೆಗೆ ಜನರಲ್ಲಿ ಜಾಗೃತಿ ಮೂಡಿಸಲು ರಾಜ್ಯಾದ್ಯಂತ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ ಎಂದು ರಾಜ್ಯ ಬಿಜೆಪಿ ಮುಖ್ಯ ವಕ್ತಾರ ಅಶ್ವಥ್‌ ನಾರಾಯಣ್ ಹೇಳಿದರು.

ನಗರದ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಯಾವುದೇ ದುರುದ್ದೇಶದಿಂದ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿಲ್ಲ ಅಥವಾ ಹೊಸದಾಗಿ ಹೆಸರುಗಳನ್ನು ಸೇರಿಸಿಲ್ಲ. ಸಂವಿಧಾನ ಬದ್ಧವಾಗಿ ಹಾಗೂ ಪಾರದರ್ಶಕವಾಗಿ ಎಸ್‌ಐಆರ್ ಪ್ರಕ್ರಿಯೆ ನಡೆದಿದೆ ಎಂದರು,

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹಾಗೂ ವಿಪಕ್ಷಗಳು ಸುಳ್ಳು ಹೇಳಿಕೆಗಳನ್ನು ನೀಡುವ ಮೂಲಕ ಜನರಲ್ಲಿ ಗೊಂದಲ ಸೃಷ್ಟಿಸುತ್ತಿದ್ದಾರೆ. ಮತಗಳು ಸರಿಯಿಲ್ಲ, ಮತಗಳ್ಳತನ ನಡೆದಿದೆ. ಇವಿಎಂ ಸರಿಯಿಲ್ಲ. ಅಕ್ರಮವಾಗಿ ಮತ ಚಲಾಯಿ ಸಲಾಗಿದೆ ಎಂದು ಆಧಾರರಹಿತ ಆರೋಪಗಳನ್ನು ಮಾಡುತ್ತಿದ್ದಾರೆ ಎಂದು ಆರೋಪಿಸಿದರು.

ಈಗಾಗಲೇ ದೇಶದ ೧೮ ರಾಜ್ಯಗಳಲ್ಲಿ ಕಾಂಗ್ರೆಸ್ ಅಧಿಕಾರ ಕಳೆದುಕೊಂಡಿದೆ. ಆಗ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಇರಲಿಲ್ಲ. ಆದರೆ, ಇದೀಗ ರಾಹುಲ್ ಗಾಂಧಿ ಅವರು ಚುನಾವಣಾ ಆಯುಕ್ತರ ವಿರುದ್ಧ ಸುಖಾಸುಮ್ಮನೆ ಆರೋಪಗಳನ್ನು ಮಾಡುತ್ತಿದ್ದಾರೆ ಎಂದು ಟೀಕಿಸಿದರು.

ಕಾಂಗ್ರೆಸ್ ಹಾಗೂ ಕಮ್ಯುನಿಸ್ಟ್ ಪಕ್ಷಗಳು ವಿದ್ಯಾರ್ಥಿಗಳ ಹೆಸರಿನಲ್ಲಿ ಹೋರಾಟ ನಡೆಸುತ್ತಿದ್ದು, ದೇಶದಲ್ಲಿ ಗೊಂದಲ ಮತ್ತು ತಲ್ಲಣ ಸೃಷ್ಟಿಸಲು ಪ್ರಯತ್ನಿಸುತ್ತಿವೆ ಎಸ್‌ಐಆರ್ ಪ್ರಕ್ರಿಯೇ ೧೯೫೨ರಿಂದ ನಿರಂತರವಾಗಿ ನಡೆದುಕೊಂಡು ಬಂದಿರುವ ಪ್ರಕ್ರಿಯೆ ಎಂದರು.

ಎಸ್‌ಐಆರ್ ಪ್ರಕ್ರಿಯೆಯಲ್ಲಿ ಮತದಾರರ ಪಟ್ಟಿಯಿಂದ ಕೈಬಿಟ್ಟಿರುವ ಹೆಸರುಗಳನ್ನು ಮತ್ತೆ ಸೇರ್ಪಡೆಗೊಳಿಸಲು ಅವಕಾಶವಿದೆ. ಹೀಗಾಗಿ ಸಾರ್ವಜನಿಕರು ಆತಂಕಪಡುವ ಅಗತ್ಯವಿಲ್ಲ. ದೇಶದ ಜನರು ರಾಹುಲ್ ಗಾಂಧಿ ಅವರನ್ನು ತಿರಸ್ಕಾರದ ದೃಷ್ಟಿಯಿಂದ ನೋಡುತ್ತಿದ್ದಾರೆ. ಎಸ್‌ಐಆರ್ ಪ್ರಕ್ರಿಯೆ ಸಂಪೂರ್ಣವಾಗಿ ಸಂವಿಧಾನಾತ್ಮಕವಾಗಿ ನಡೆದಿದೆ ಎಂದು ಹೇಳಿದರು.

ಬಿಜೆಪಿಯಿಂದ ನ.೫ ರವರೆಗೆ ಪ್ರಜಾಪ್ರಭುತ್ವವನ್ನು ಉಳಿಸಿ, ಆರಾಜಕತೆಯನ್ನು ಆಳಿಸಿ ಎಂಬ ಅಭಿಯಾನವನ್ನು ಹಮ್ಮಿಕೊಳ್ಳಲಾಗಿದೆ. ಜಿಲ್ಲಾ ಕೇಂದ್ರದಲ್ಲಿ ಪಾದಯಾತ್ರೆ, ಪ್ರತಿಷ್ಠಿತ ವ್ಯಕ್ತಿಗಳ ಸಭೆ, ಯುವಕರು ಮತ್ತು ವಿದ್ಯಾರ್ಥಿಗಳೊಂದಿಗೆ ಸಭೆ, ವಿವಿಧ ಸ್ಪರ್ಧೆಗಳ ಆಯೋಜನೆ ಸೇರಿದಂತೆ ಇತರೆ ಕಾರ್ಯಕ್ರಮಗಳನ್ನು ಆಯೋಜನೆ ಮಾಡಲಾಗುತ್ತಿದೆ ಎಂದರು.

ಬಿಜೆಪಿ ಪಕ್ಷದ ರಾಜ್ಯ ವಕ್ತಾರ ಮೋಹನ್ ವಿಶ್ವ, ವಿಧಾನಪರಿಷತ್ ಮಾಜಿ ಸದಸ್ಯ ಪ್ರೊ.ಕೆ.ಆರ್.ಮಲ್ಲಿಕಾರ್ಜುನಪ್ಪ, ಕೇಂದ್ರ ಬರ ಪರಿಹಾರ ಸಮಿತಿ ಮಾಜಿ ಅಧ್ಯಕ್ಷ ಎಂ.ರಾಮಚಂದ್ರ, ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ವೃಷಭೇಂದ್ರಪ್ಪ, ಹೊನ್ನೂರು ಮಹದೇವಸ್ವಾಮಿ, ಜಿಲ್ಲಾ ವಕ್ತಾರ ಮನೋಜ್ ಪಟೇಲ್ ಇತರರು ಇದ್ದರು.