ಸಾರಾಂಶ
ಕನ್ನಡಪ್ರಭ ವಾರ್ತೆ ಕೋಲಾರಸಿಎಂ ಸಿದ್ದರಾಮಯ್ಯ ಜೂ.೨೮ ಹಾಗೂ ೨೯ರಂದು ಜಿಲ್ಲಾಧಿಕಾರಿಗಳ ಮತ್ತು ಜಿಲ್ಲಾ ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿಗಳ ಸಭೆಯಲ್ಲಿ ಜಿಲ್ಲೆಯ ಪ್ರಗತಿ ಪರಿಶೀಲನಾ ಸಭೆ ನಡೆಯಲಿದೆ ಎಂದು ಜಿಲ್ಲಾಧಿಕಾರಿ ಅಕ್ರಂ ಪಾಷ ಹೇಳಿದರು. ನಗರದ ಜಿಲ್ಲಾಡಳಿತ ಭವನದ ಸಭಾಂಗಣದಲ್ಲಿ ನಡೆದ ಪೂರ್ವಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಅಧಿಕಾರಿಗಳು ತಮ್ಮ ತಮ್ಮ ಇಲಾಖೆಗಳ ಯೋಜನೆಗಳ ಪ್ರಗತಿ ಮಾಹಿತಿ, ಕಾಮಗಾರಿಗಳ ಸ್ಥಿತಿಗತಿ ಹಾಗೂ ಇತರೆ ಸಮಗ್ರ ವಿವರಗಳನ್ನು ಕೂಡಲೇ ಒದಗಿಸುವಂತೆ ತಿಳಿಸಿದರು.ಜಿಲ್ಲೆಯಲ್ಲಿನ ವಸತಿ ಶಾಲೆಗಳಿಗೆ ಅಧಿಕಾರಿಗಳು ಭೇಟಿ ನೀಡಬೇಕು. ಅಲ್ಲಿನ ಗುಣಮಟ್ಟದ ಆಹಾರ ಪೂರೈಕೆ, ಸ್ವಚ್ಛತೆ ಹಾಗೂ ಇತರೆ ಮೂಲಭೂತ ಸೌಕರ್ಯಗಳ ಬಗ್ಗೆ ಗಮನಿಸಬೇಕು. ಯಾವುದೇ ದೂರು ಉಲ್ಲೇಖವಾಗಬಾರದು ಎಂದು ಸಮಾಜ ಕಲ್ಯಾಣ ಇಲಾಖೆ, ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿಗಳಿಗೆ ಸೂಚಿಸಿದರು.ಜನತಾದರ್ಶನ ಕಾರ್ಯಕ್ರಮದಲ್ಲಿ ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದಲ್ಲಿ ವಿವಿಧ ಇಲಾಖೆಗಳಿಗೆ ಸಂಬಂಧಿಸಿದಂತೆ ಸಾರ್ವಜನಿಕರಿಂದ ಸಲ್ಲಿಕೆಯಾದ ದೂರುಗಳಿದ್ದಲ್ಲಿ ಕೂಡಲೇ ಬಗೆಹರಿಸಲು ಕ್ರಮವಹಿಸಬೇಕು ಎಂದು ಎಲ್ಲಾ ಇಲಾಖೆ ಅಧಿಕಾರಿಗಳಿಗೆ ತಿಳಿಸಿದರು.ಜಿಪಂ ಸಿಇಓ ಪದ್ಮ ಬಸವಂತಪ್ಪ ಮಾತನಾಡಿ, ಯಾವುದೇ ಇಲಾಖೆಗಳ ಅಧಿಕಾರಿಗಳು ತಮ್ಮ ಕಾರ್ಯದಲ್ಲಿ ಅಗತ್ಯ ಸಹಕಾರ ಬೇಕಾದಲ್ಲಿ ಇತರೆ ಅಧಿಕಾರಿಗಳೊಂದಿಗೆ ನಿಕಟ ಸಂಪರ್ಕದಲ್ಲಿರಬೇಕು ಎಂದರು.ದೈನಂದಿನ ಪತ್ರಿಕೆಗಳಲ್ಲಿ ವರದಿಯಾಗುವ ತಮ್ಮ ಇಲಾಖೆಗಳಿಗೆ ಸಂಬಂಧಿತ ಸಮಸ್ಯೆಗಳ ವರದಿ ಗಂಭೀರವಾಗಿ ಪರಿಗಣಿಸಿ, ತ್ವರಿತಗತಿಯಲ್ಲಿ ಸೂಕ್ತ ಕ್ರಮ ಕೈಗೊಳ್ಳಬೇಕು. ಆಯಾ ಸಾಲಿನ ಯೋಜನೆಗಳ ಕಾರ್ಯಪ್ರಗತಿ ವಿವರ ಕಡ್ಡಾಯವಾಗಿ ಇಟ್ಟುಕೊಳ್ಳಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.ಡಿಹೆಚ್‌ಓ ಡಾ.ಜಗದೀಶ್, ಡಿಡಿಎಲ್‌ಆರ್ ಭಾಗ್ಯ, ಡಿಡಿಪಿಯು ರಾಮಚಂದ್ರಪ್ಪ, ಡಿಡಿಪಿಐ ಕೃಷ್ಣಮೂರ್ತಿ ಇದ್ದರು.