ಕೆಎಸ್‌ಆರ್‌ಟಿಸಿ ನಿಗಮಗಳ ಎಸ್ಸಿ, ಎಸ್ಟಿ ನೌಕರರ ಕ್ಷೇಮಾಭಿವೃದ್ಧಿ ಸಂಘ ಕಬ್ಬನ್‌ ಉದ್ಯಾನದಲ್ಲಿರುವ ರಾಜ್ಯ ಸರ್ಕಾರಿ ನೌಕರರ ಭವನದಲ್ಲಿ ಆಯೋಜಿಸಿದ್ದ ಡಾ.ಬಿ.ಆರ್‌.ಅಂಬೇಡ್ಕರ್‌ ಅವರ 135ನೇ ಜಯಂತ್ಯುತ್ಸವದಲ್ಲಿ ಕಾರ್ಮಿಕರ ಪ್ರತಿಭಾನ್ವಿತ ಮಕ್ಕಳನ್ನು ಸನ್ಮಾನಿಸಲಾಯಿತು.

ಕನ್ನಡಪ್ರಭ ವಾರ್ತೆ ಬೆಂಗಳೂರು

ಇಂದು ನಾವು ಗೌರವಯುತವಾಗಿ ಬದುಕುತ್ತಿದ್ದೇವೆ, ಮುಕ್ತವಾಗಿ ಮಾತನಾಡುತ್ತಿದ್ದೇವೆ ಹಾಗೂ ವಾಕ್ ಸ್ವಾತಂತ್ರ್ಯವನ್ನು ಅನುಭವಿಸುತ್ತಿದ್ದೇವೆ ಎಂದರೆ ಅದಕ್ಕೆ ಡಾ. ಬಿ.ಆರ್. ಅಂಬೇಡ್ಕರ್ ಅವರು ದೇಶಕ್ಕೆ ನೀಡಿದ ಸಂವಿಧಾನವೇ ಮೂಲ ಕಾರಣ ಎಂದು ಕೆಎಸ್‌ಆರ್‌ಟಿಸಿ (ಸಿಬ್ಬಂದಿ ಮತ್ತು ಜಾಗೃತಿ) ನಿರ್ದೇಶಕಿ ಕೆ.ಎಂ.ಗಾಯತ್ರಿ ಅವರು ಹೇಳಿದರು.

ಗುರುವಾರ ಕೆಎಸ್‌ಆರ್‌ಟಿಸಿ ನಿಗಮಗಳ ಎಸ್ಸಿ, ಎಸ್ಟಿ ನೌಕರರ ಕ್ಷೇಮಾಭಿವೃದ್ಧಿ ಸಂಘ ಕಬ್ಬನ್‌ ಉದ್ಯಾನದಲ್ಲಿರುವ ರಾಜ್ಯ ಸರ್ಕಾರಿ ನೌಕರರ ಭವನದಲ್ಲಿ ಆಯೋಜಿಸಿದ್ದ ಡಾ.ಬಿ.ಆರ್‌.ಅಂಬೇಡ್ಕರ್‌ ಅವರ 135ನೇ ಜಯಂತ್ಯುತ್ಸವ ಹಾಗೂ ಕಾರ್ಮಿಕರ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ಪ್ರದಾನ ಮಾಡಿ ಅವರು ಮಾತನಾಡಿದರು. ಸಂವಿಧಾನವು ಮಹಿಳೆಯರಿಗೆ ಶಿಕ್ಷಣ, ಮತದಾನ ಮತ್ತು ಸಮಾನ ಹಕ್ಕುಗಳನ್ನು ಕಲ್ಪಿಸಿ ಸಮಾಜದಲ್ಲಿ ನೆಲೆನಿಲ್ಲಲು ಅವಕಾಶ ಮಾಡಿಕೊಟ್ಟಿದೆ.ಡಾ.ಅಂಬೇಡ್ಕರ್ ಅವರ ಆಶಯದಂತೆ ಎಲ್ಲರೂ ಶಿಕ್ಷಣವನ್ನು ಅರ್ಧಕ್ಕೆ ನಿಲ್ಲಿಸದೆ ಸಂಪೂರ್ಣವಾಗಿ ಪಡೆಯಬೇಕು. ಉನ್ನತ ಶಿಕ್ಷಣದ ಮೂಲಕ ಸರ್ಕಾರಿ ಹಾಗೂ ಖಾಸಗಿ ವಲಯಗಳಲ್ಲಿ ಉನ್ನತ ಹುದ್ದೆಗಳನ್ನು ಪಡೆಯಲು ಶ್ರಮಿಸಬೇಕು. ಖಾಸಗಿ ಕ್ಷೇತ್ರದಲ್ಲಿಯೂ ಉದ್ಯೋಗ ಸೃಷ್ಟಿಸುವ ಮಟ್ಟಕ್ಕೆ ಬೆಳೆಯಬೇಕು ಎಂದರು.

ಇಂದಿನ ಆಧುನಿಕ ಯುಗದಲ್ಲಿ ಅನೇಕ ಆಕರ್ಷಣೆಗಳಿವೆ. ಅವುಗಳನ್ನು ಮೀರಿ ವಿದ್ಯಾರ್ಥಿಗಳು ಸ್ಪರ್ಧಾತ್ಮಕ ಮನೋಭಾವವನ್ನು ಬೆಳೆಸಿಕೊಳ್ಳಬೇಕು. ಕಠಿಣ ಪರಿಶ್ರಮ ಮತ್ತು ಛಲದಿಂದ ಸಮಾಜಕ್ಕೆ ಕೊಡುಗೆ ನೀಡುವಂತೆ ಬೆಳೆಯಬೇಕು ಎಂದು ಹೇಳಿದರು.

​ಇದೇ ಸಂದರ್ಭದಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ಕೆಎಸ್‌ಆರ್‌ಟಿಸಿ ನಿಗಮಗಳ ಕಾರ್ಮಿಕರ ಮಕ್ಕಳಿಗೆ ಅಭಿನಂದನೆ ಸಲ್ಲಿಸಲಾಯಿತು. ಕಾರ್ಯಕ್ರಮದಲ್ಲಿ ಬಿಎಂಟಿಸಿ ಉಪಾಧ್ಯಕ್ಷರಾದ ನಿಕೇತ್ ರಾಜ್ ಮೌರ್ಯ, ನಿಗಮದ ನೌಕರರು ಹಾಗೂ ಪದಾಧಿಕಾರಿಗಳು ಉಪಸ್ಥಿತರಿದ್ದರು.