ಎಸ್ಸೆಸ್ಸೆಲ್ಸಿ ಪರೀಕ್ಷೆ ಕೇಂದ್ರಗಳ ಸುತ್ತ ನಿಷೇಧಾಜ್ಞೆ ಜಾರಿ

| Published : Jun 14 2024, 01:04 AM IST

ಸಾರಾಂಶ

ಕೊಡಗು ಜಿಲ್ಲೆಯಲ್ಲಿ ಜೂ.14 ರಿಂದ ಜೂನ್, 22 ರವರೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ-2 ನಡೆಯಲಿದೆ. ಪರೀಕ್ಷಾ ಕೇಂದ್ರಗಳಾದ ಮಡಿಕೇರಿ, ವಿರಾಜಪೇಟೆ ಮತ್ತು ಸೋಮವಾರಪೇಟೆ ಸರ್ಕಾರಿ ಪದವಿ ಪೂರ್ವ ಕಾಲೇಜುಗಳ ಸುತ್ತಲಿನ 200 ಮೀಟರ್ ವ್ಯಾಪ್ತಿಯಲ್ಲಿನ ಪ್ರದೇಶವನ್ನು ನಿರ್ಬಂಧಿತ ಎಂದು ಘೋಷಿಸಿ ಜಿಲ್ಲಾಧಿಕಾರಿ ವೆಂಕಟ್ ರಾಜಾ ಆದೇಶಿಸಿದ್ದಾರೆ.

ಕನ್ನಡಪ್ರಭ ವಾರ್ತೆ ಮಡಿಕೇರಿ

ಜಿಲ್ಲೆಯಲ್ಲಿ ಜೂ.14 ರಿಂದ ಜೂನ್, 22 ರವರೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ-2 ನಡೆಯಲಿದೆ. ಪರೀಕ್ಷೆಯನ್ನು ಸುಗಮವಾಗಿ ನಡೆಸುವ ಸಲುವಾಗಿ ಪರೀಕ್ಷಾ ಕೇಂದ್ರಗಳಾದ ಮಡಿಕೇರಿ, ವಿರಾಜಪೇಟೆ ಮತ್ತು ಸೋಮವಾರಪೇಟೆ ಸರ್ಕಾರಿ ಪದವಿ ಪೂರ್ವ ಕಾಲೇಜುಗಳ ಸುತ್ತಲಿನ 200 ಮೀಟರ್ ವ್ಯಾಪ್ತಿಯಲ್ಲಿನ ಪ್ರದೇಶವನ್ನು ನಿರ್ಬಂಧಿತ ಎಂದು ಘೋಷಿಸಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ವೆಂಕಟ್ ರಾಜಾ ಆದೇಶಿಸಿದ್ದಾರೆ.

ನಿಷೇಧಿತ ವಲಯದಲ್ಲಿ ಯಾವುದೇ ರೀತಿಯಲ್ಲಿ ಪರೀಕ್ಷೆಯಲ್ಲಿ ನಕಲು ಹೊಡೆಯಲು ಸಹಾಯ ಮಾಡುವುದು, ಚೀಟಿ ಅಥವಾ ಇನ್ನಿತರ ರೀತಿಯಲ್ಲಿ ಉತ್ತರಗಳನ್ನು ಬರೆದು ಹಂಚುವುದು, ಇನ್ನಾವುದೇ ವಸ್ತುಗಳನ್ನು ಹಂಚುವುದು/ ರವಾನಿಸುವುದು ಮತ್ತಿತರ ಚಟುವಟಿಕೆ ಸಂಪೂರ್ಣ ನಿಷೇಧಿಸಿದೆ.

ಪರೀಕ್ಷಾ ಕೇಂದ್ರದೊಳಗೆ ಮೊಬೈಲ್, ಸ್ಮಾರ್ಟ್‌ ವಾಚ್ ಮುಂತಾದ ಎಲೆಕ್ಟ್ರಾನಿಕ್ ಸಾಮಾಗ್ರಿಗಳನ್ನು ಒಯ್ಯುವುದು ಮತ್ತು ಬಳಸುವುದನ್ನು ನಿಷೇಧಿಸಿದೆ. ಪರೀಕ್ಷಾ ಕೇಂದ್ರದೊಳಗೆ ಅನಧಿಕೃತ ವ್ಯಕ್ತಿಗಳ ಪ್ರವೇಶ, ಚಿತ್ರೀಕರಣ ಮುಂತಾದವುಗಳನ್ನು ಸಂಪೂರ್ಣವಾಗಿ ನಿಷೇಧಿಸಿದೆ. ಯಾವುದೇ ನಿಯಮಬಾಹಿರ ಕಾರ್ಯಗಳನ್ನು ನಡೆಸಬಾರದು. ನಿಷೇಧಿತ ವಲಯದಲ್ಲಿ ಯಾವುದೇ ರೀತಿಯ ಸ್ಫೋಟಕ ವಸ್ತುಗಳನ್ನು ಕೊಂಡು ಹೋಗುವುದನ್ನು ಹಾಗೂ ಇನ್ನಿತರ ಮಾರಕ ಆಯುಧಗಳನ್ನು ಹೊಂದುವುದನ್ನು ನಿಷೇಧಿಸಿದೆ.

ನಿಷೇಧಿತ ವಲಯದಲ್ಲಿ ಪರೀಕ್ಷೆಗೆ ಸಂಬಂಧಿಸಿದ ಯಾವುದೇ ವಿಷಯಗಳನ್ನು, ಮಾಹಿತಿಯನ್ನು ರವಾನಿಸುವ, ತಿಳಿಸುವ ಸಲುವಾಗಿ ಸಂಜ್ಞೆಗಳನ್ನು ಮಾಡುವುದು ಮುಂತಾದ ಕ್ರಿಯೆಗಳಲ್ಲಿ ತೊಡಗುವುದನ್ನು ಸಂಪೂರ್ಣವಾಗಿ ನಿಷೇಧಿಸಿದೆ.

ಪರೀಕ್ಷೆ ಪ್ರಾರಂಭವಾಗುವ ಒಂದು ಗಂಟೆ ಮುಂಚಿತವಾಗಿ ಹಾಗೂ ಪರೀಕ್ಷೆ ಮುಗಿಯುವ ವರೆಗೆ ಪರೀಕ್ಷಾ ಕೇಂದ್ರಗಳ 200 ಮೀಟರ್ ವ್ಯಾಪ್ತಿಯಲ್ಲಿರುವ ಜೆರಾಕ್ಸ್ ಅಂಗಡಿಗಳು ಕಾರ್ಯನಿರ್ವಹಿಸುವುದನ್ನು ಮತ್ತು ಈ ವ್ಯಾಪ್ತಿಯಲ್ಲಿ ಧ್ವನಿವರ್ಧಕ ಬಳಕೆಯನ್ನು ನಿಷೇಧಿಸಿದೆ. ಈ ಆದೇಶವು ಪರೀಕ್ಷೆ ಆರಂಭದ ಒಂದು ಗಂಟೆ ಮುಂಚಿತ ಅವಧಿಯಿಂದ ಪರೀಕ್ಷೆ ಮುಕ್ತಾಯದ ಒಂದು ಗಂಟೆ ನಂತರದ ವರೆಗೆ ಜಾರಿಯಲ್ಲಿರುತ್ತದೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.