ವಾಣಿಜ್ಯ ಉದ್ದೇಶಕ್ಕಾಗಿ ಕೊಳವೆಬಾವಿ ನೀರು ಮಾರಾಟ ನಿಷೇಧ

| Published : Apr 17 2024, 01:20 AM IST

ಸಾರಾಂಶ

ವಾಣಿಜ್ಯ ಉದ್ದೇಶಕ್ಕಾಗಿ ಕೊಳವೆಬಾವಿ ನೀರು ಮಾರಾಟ ಮಾಡುವುದನ್ನು ನಿಷೇಧಿಸಲಾಗಿದೆ ಎಂದು ಜಿಲ್ಲಾಧಿಕಾರಿ ಟಿ.ವೆಂಕಟೇಶ್‌ ತಿಳಿಸಿದ್ದಾರೆ.

ಚಿತ್ರದುರ್ಗ: ವಾಣಿಜ್ಯ ಉದ್ದೇಶಕ್ಕಾಗಿ ಕೊಳವೆಬಾವಿ ನೀರು ಮಾರಾಟ ಮಾಡುವುದನ್ನು ನಿಷೇಧಿಸಲಾಗಿದೆ ಎಂದು ಜಿಲ್ಲಾಧಿಕಾರಿ ಟಿ.ವೆಂಕಟೇಶ್‌ ತಿಳಿಸಿದ್ದಾರೆ.

ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ಜಿಲ್ಲೆಯಲ್ಲಿ ತೀವ್ರತರನಾದ ಬರಗಾಲ ಆವರಿಸಿದೆ. ಜನ ಜಾನುವಾರುಗಳಿಗೆ ಕುಡಿಯುವ ನೀರಿನ ಅಭಾವ ಉಂಟಾಗಿದೆ. ಕೊಳವೆಬಾವಿಗಳಲ್ಲಿ ದಿನದಿಂದ ದಿನಕ್ಕೆ ನೀರಿನ ಪ್ರಮಾಣ ಗಣನೀಯವಾಗಿ ಕುಸಿಯುತ್ತಿದೆ. ಇಂತಹ ಪರಿಸ್ಥಿತಿಯಲ್ಲಿ ಜನ ಜಾನುವಾರುಗಳಿಗೆ ಕುಡಿಯುವ ನೀರು ಒದಗಿಸುವುದು ಜಿಲ್ಲಾಡಳಿತದ ಪ್ರಥಮ ಆದ್ಯತೆಯಾಗಿದೆ ಎಂದರು.

ಖಾಸಗಿ ಕೊಳವೆಬಾವಿ ಮಾಲೀಕರು ಹೆಚ್ಚು ಹಣಗಳಿಸುವ ಉದ್ದೇಶದಿಂದ, ನೀರು ಮಾರಾಟ ಮಾಡುವುದನ್ನು ಉದ್ದಿಮೆ ಮಾಡಿಕೊಂಡಿದ್ದಾರೆ. ಜಿಲ್ಲೆಯಾದ್ಯಂತ ಅವ್ಯಹತವಾಗಿ ನೀರು ಮಾರಾಟ ಮಾಡುವ ಪ್ರಕರಣಗಳು ಕಂಡುಬರುತ್ತವೆ. ವಾಣಿಜ್ಯ ಉದ್ದೇಶಗಳಿಗೆ ನೀರು ಮಾರಾಟ ಮಾಡುವುದನ್ನು ನಿಷೇಧಿಸಲು ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಸಭೆಯಲ್ಲಿ ನಿರ್ಣಯ ತೆಗೆದುಕೊಳ್ಳಲಾಗಿದೆ.

ಇದರ ಅನ್ವಯ ವಿಪತ್ತು ನಿರ್ವಹಣಾ ಕಾಯ್ದೆ 2005 ಕಲಂ 30(1)ಅಡಿ, ಜಿಲ್ಲಾ ವ್ಯಾಪ್ತಿಯಲ್ಲಿ ಖಾಸಗಿ ಕೊಳವೆ ಬಾವಿಗಳ ಮೂಲಕ ವಾಣಿಜ್ಯ ಉದ್ದೇಶಕ್ಕೆ ಕುಡಿಯುವ ನೀರು ಮಾರಾಟ ಮಾಡುವುದನ್ನು ನಿಷೇಧಿಸಿ ಆದೇಶ ಹೊರಡಿಸಲಾಗಿದ್ದು ಆದೇಶ ಉಲ್ಲಂಘಿಸುವವರು ವಿರುದ್ಧ ವಿಪತ್ತು ನಿರ್ವಹಣಾ ಕಾಯ್ದೆ 2005 ಕಲಂ 51 (ಬಿ) ಮತ್ತು 57ರ ಅಡಿ ಕಾನೂನು ಕ್ರಮ ಕೈಗೊಳ್ಳುವುದಾಗಿ ಎಚ್ಚರಿಸಿದ್ದಾರೆ.