ಮಡಿಕೇರಿ: ನಗರದ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಜೂ. 21ರಂದು 2026ರ ರೀ-ನೀಟ್ (ಯುಜಿ) ಪರೀಕ್ಷೆ ನಡೆಯಲಿದ್ದು, ಈ ಪರೀಕ್ಷಾ ಕೇಂದ್ರದಲ್ಲಿ ಯಾವುದೇ ಅವ್ಯವಹಾರಗಳಿಲ್ಲದೆ ಸುಗಮವಾಗಿ ಪರೀಕ್ಷೆ ನಡೆಸುವ ಸಲುವಾಗಿ ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ 2023ರ ಕಲಂ 163ರ ಅಡಿ ದತ್ತವಾದ ಅಧಿಕಾರದಂತೆ ಪರೀಕ್ಷಾ ಕೇಂದ್ರದ ಸುತ್ತಲೂ 200 ಮೀಟರ್ ವ್ಯಾಪ್ತಿಯಲ್ಲಿನ ಪ್ರದೇಶವನ್ನು ನಿರ್ಬಂಧಿತ ಸ್ಥಳ ಎಂದು ಘೋಷಿಸಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಎಸ್.ಜೆ. ಸೋಮಶೇಖರ್ ಆದೇಶಿಸಿದ್ದಾರೆ. ಈ ವ್ಯಾಪ್ತಿಯಲ್ಲಿರುವ ಎಲ್ಲ ಜೆರಾಕ್ಸ್ ಅಂಗಡಿ ಮತ್ತು ಸೈಬರ್ ಸೆಂಟರ್‌ಗಳನ್ನು ಮುಚ್ಚಿಸತಕ್ಕದೆಂದು ಸಹ ತಿಳಿಸಿದ್ದಾರೆ. ಈ ಆದೇಶವು ಪರೀಕ್ಷಾ ದಿನದಂದು ಬೆಳಗ್ಗೆ 10 ಗಂಟೆಯಿಂದ ಸಂಜೆ 5.30 ಗಂಟೆಯವರೆಗೆ ಮಾತ್ರ ಚಾಲ್ತಿಯಲ್ಲಿರಲಿದೆ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಸೋಮಶೇಖರ್ ತಿಳಿಸಿದ್ದಾರೆ.
----------------------------------ಘನ ವಾಹನ ಸಂಚಾರ ನಿಷೇಧ 25ರ ತನಕ ಸಡಿಲಿಕೆ
ಮಡಿಕೇರಿ: ಜಿಲ್ಲೆಯಲ್ಲಿ ಈಗಾಗಲೇ ಮುಂಗಾರು ಮಳೆ ಪ್ರಾರಂಭವಾಗಿದ್ದು, ಮಳೆಯ ಪ್ರಮಾಣ ಹೆಚ್ಚಾದರೆ ನೆಲದಲ್ಲಿ ತೇವಾಂಶ ಅಧಿಕವಾಗಿ, ಅಧಿಕ ಭಾರದ ವಾಹನಗಳು ಸಂಚರಿಸಿದರೆ ಭೂ ಕುಸಿತ ಉಂಟಾಗಿ ಅನಾಹುತಗಳಾಗುವ ಸಾಧ್ಯತೆ ಹೆಚ್ಚಿರುವುದರಿಂದ ಜಿಲ್ಲೆಯಾದ್ಯಂತ ಜೂ. 10ರಿಂದ ಜು. 9ರ ವರೆಗೆ ಮರಳು ಮತ್ತು ಮರದ ದಿಮ್ಮಿಗಳ ಸಾಗಾಣಿಕೆ ಹಾಗೂ ಭಾರಿ ವಾಹನಗಳ ಸಂಚಾರ ನಿಷೇಧಿಸಲಾಗಿತ್ತು. ಪ್ರಸ್ತುತ ಕೋರಿಕೆಯಂತೆ ಹಾಗೂ ಹಾಲಿ ಜಿಲ್ಲೆಯಲ್ಲಿನ ಹವಾಮಾನ ಪರಿಸ್ಥಿತಿಯನ್ನು ಅವಲೋಕಿಸಿ, ಭಾಗಶಃ ಮಾರ್ಪಡಿಸಿ ಎಲ್ಲ ವಿಧದ ವಾಹನಗಳ ಸಂಚಾರಕ್ಕೆ ಜೂ. 25ರವರೆಗೆ ಅವಕಾಶ ನೀಡಲಾಗಿದೆ. ಉಳಿದಂತೆ ಯಾವುದೇ ಬದಲಾವಣೆ ಇರುವುದಿಲ್ಲ ಎಂದು ಜಿಲ್ಲಾ ದಂಡಾಧಿಕಾರಿ ಹಾಗೂ ಪ್ರಾದೇಶಿಕ ಸಾರಿಗೆ ಪ್ರಾಧಿಕಾರದ ಅಧ್ಯಕ್ಷ ಎಸ್.ಜೆ. ಸೋಮಶೇಖರ್ ತಿಳಿಸಿದ್ದಾರೆ.