ಸಾರಾಂಶ
ಜನಸ್ಪಂದನಾ ಕಾರ್ಯಕ್ರಮದಲ್ಲಿ ನಲಿನ್ ಅತುಲ್
ಕನ್ನಡಪ್ರಭ ವಾರ್ತೆ ಹನುಮಸಾಗರ
ತಾಲೂಕು ಕೇಂದ್ರ ಸ್ಥಾನದಲ್ಲಿ ಜನಸ್ಪಂದನಾ ಕಾರ್ಯಕ್ರಮ ಮಾಡುವುದರಿಂದ ಅಲ್ಲಿಗೆ ಬರಲು ಗ್ರಾಮೀಣರಿಗೆ ಆಗುವ ತೊಂದರೆ ಮನಗಂಡು ಹೋಬಳಿ ವ್ಯಾಪ್ತಿಯಲ್ಲಿ ಕಾರ್ಯಕ್ರಮ ಮಾಡಲಾಗುತ್ತಿದ್ದು, ಗ್ರಾಮೀಣರು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ನಲಿನ್ ಅತುಲ್ ಹೇಳಿದರು.ಸಮೀಪದ ಹನುಮನಾಳ ಗ್ರಾಮದಲ್ಲಿ ಜಿಲ್ಲಾ ಆಡಳಿತ, ಜಿಪಂ ಸಹಯೋಗದಲ್ಲಿ ಮಂಗಳವಾರ ಹಮ್ಮಿಕೊಂಡ ಜನಸ್ಪಂದನಾ ಕಾರ್ಯಕ್ರಮದಲ್ಲಿ ಮಾತನಾಡಿದರು.
ಇತ್ತೀಚೆಗೆ ಜಿಲ್ಲಾಡಳಿತದಿಂದ ಹಮ್ಮಿಕೊಂಡ ಜನಸ್ಪಂದನಾ ಕಾರ್ಯಕ್ರಮದಲ್ಲಿ ಸುಮಾರು 2,300 ಅರ್ಜಿ ಬಂದಿದ್ದು, ಅವುಗಳಲ್ಲಿ 58 ಅರ್ಜಿ ಮಾತ್ರ ಬಾಕಿ ಇದ್ದು, ಉಳಿದವುಗಳನ್ನು ಬಗೆಹರಿಸಲಾಗಿದೆ. ನಿಮ್ಮ ಸಮಸ್ಯೆಗಳು ಕಾನೂನಾತ್ಮಕವಾಗಿದ್ದರೆ ಕೂಡಲೇ ಬಗೆಹರಿಸಲಾಗುವುದು ಎಂದರು.ರಾಜ್ಯ ಸರ್ಕಾರ ಜಾರಿಗೆ ತಂದಿರುವ ಗ್ಯಾರಂಟಿ ಯೋಜನೆಗಳನ್ನು ಜಿಲ್ಲೆಯಲ್ಲಿ ಸಮರ್ಪಕವಾಗಿ ಜಾರಿಗೆ ತಂದಿದ್ದು, ಗೃಹಲಕ್ಷ್ಮಿ ಯೋಜನೆ ಅಡಿಯಲ್ಲಿ ಜಿಲ್ಲೆಯಲ್ಲಿ ಸುಮಾರು 3.10 ಲಕ್ಷಕ್ಕೂ ಹೆಚ್ಚು ಮಹಿಳೆಯರ ಖಾತೆಗೆ ₹ 654 ಕೋಟಿ ಹಣ ಜಮಾ ಮಾಡಿದ್ದು, ಹನುಮನಾಳ ಹೋಬಳಿ ವ್ಯಾಪ್ತಿಯಲ್ಲಿ 11700 ಮಹಿಳೆಯರ ಖಾತೆಗೆ ಜಮಾ ಮಾಡಲಾಗಿದೆ. ಅನ್ನಭಾಗ್ಯ ಯೋಜನೆ ಅಡಿಯಲ್ಲಿ 3.28 ಲಕ್ಷ ಪಡಿತರ ಚೀಟಿ ವಿತರಣೆ ಮಾಡಿದ್ದು, 3 ಲಕ್ಷ ಪಡಿತರದಾರರಿಗೆ ₹280 ಕೋಟಿ ಹಣ ಜಮಾ ಮಾಡಲಾಗಿದೆ. ಹನುಮನಾಳ ಹೋಬಳಿಯಲ್ಲಿ 9925 ಕುಟುಂಬಕ್ಕೆ ₹63 ಲಕ್ಷ ಜಮಾ ಮಾಡಲಾಗಿದೆ. ಗೃಹಜೋತಿ ಯೋಜನೆಯಡಿ 2.74 ಲಕ್ಷ ಮನೆಗಳಿಗೆ ಉಚಿತ ವಿದ್ಯುತ್ ನೀಡುತ್ತಿದ್ದು, ಇದಕ್ಕೆ ₹136 ಕೋಟಿ ಖರ್ಚಾಗಿದೆ. ಶಕ್ತಿ ಯೋಜನೆಯಡಿ ಜಿಲ್ಲೆಯಲ್ಲಿ ಪ್ರತಿ ತಿಂಗಳು ಸುಮಾರು 30-35 ಲಕ್ಷ ಮಹಿಳೆಯರು ಉಚಿತವಾಗಿ ಬಸ್‌ನಲ್ಲಿ ಪ್ರಯಾಣಿಸುತ್ತಿದ್ದಾರೆ. ಯುವನಿಧಿ ಯೋಜನೆಯಡಿ ಜಿಲ್ಲೆಯಲ್ಲಿ 5 ಸಾವಿರ ಯುವಕ-ಯುವತಿಯರಿಗೆ 3.35 ಕೋಟಿ ಫಲಾನುಭವಿಗಳ ಖಾತೆಗೆ ಜಮಾ ಮಾಡಲಾಗಿದೆ ಎಂದರು.
ಕೃಷಿ ಇಲಾಖೆಯಿಂದ ಔಷಧಿ ಸಿಂಪಡಣೆ ಮಾಡುವ ಯಂತ್ರ ಪ್ರಾತ್ಯಕ್ಷಿಕೆ ಮಾಡಲಾಯಿತು. ಆರೋಗ್ಯ ಇಲಾಖೆ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಅರಣ್ಯ ಇಲಾಖೆ, ತೋಟಗಾರಿಕೆ ಇಲಾಖೆ, ಕೃಷಿ ಇಲಾಖೆ ಸೇರಿ ವಿವಿಧ ಇಲಾಖೆಗಳಿಂದ ಮಳಿಗೆಗಳನ್ನು ತೆರೆಯಲಾಗಿತ್ತು.ಜಿಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಾಹುಲ್ ರತ್ನಂ ಪಾಂಡೆ, ಗ್ರಾಪಂ ಅಧ್ಯಕ್ಷೆ ಸುಜಾತಾ ಚಿಕನಾಳ, ಅಪರ ಜಿಲ್ಲಾ ಅಧಿಕಾರಿ ಸಿದ್ದರಾಮೇಶ್ವರ, ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ಹೇಮಂತಕುಮಾರ್, ಉಪವಿಭಾಗಾಧಿಕಾರಿ ಡಾ. ಮಹೇಶ ಮಾಲಗಿತ್ತಿ, ತಹಸೀಲ್ದಾರ್ ಅಶೋಕ ಶಿಗ್ಗಾವಿ ಸೇರಿ ಜಿಲ್ಲಾ ಹಾಗೂ ತಾಲೂಕು ಮಟ್ಟದ ವಿವಿಧ ಇಲಾಖೆಗಳ ಅಧಿಕಾರಿಗಳು ಇತರರು ಇದ್ದರು.