ದೊಡ್ಡಬಳ್ಳಾಪುರ: ಕನ್ನಡ ಅಭಿವೃದ್ದಿ ಕಾರ್ಯಕ್ರಮಗಳ ಯಶಸ್ವಿ ಅನುಷ್ಠಾನ ಉದ್ದೇಶದಿಂದ ಕನ್ನಡ ಜಾಗೃತಿ ಸಮಿತಿ ಸದಸ್ಯರು, ವಿವಿಧ ಕನ್ನಡ ಸಂಘಟನೆಗಳ ಸಹಯೋಗದಲ್ಲಿ ತಹಸೀಲ್ದಾರ್ ಡಾ.ಮಲ್ಲಪ್ಪ ಕೆ.ಯರಗೋಳ ಅವರ ಅಧ್ಯಕ್ಷತೆಯಲ್ಲಿ ಗುರುವಾರ ಸಭೆ ನಡೆಯಿತು.
ರಾಜ್ಯದ ಕನ್ನಡ ಅಭಿವೃದ್ಧಿ ಕಾರ್ಯಕ್ರಮಗಳನ್ನು ಹಾಗೂ ಭಾಷಾ ನೀತಿಯನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲು ಹಾಗೂ ಸರ್ಕಾರದ ಭಾಷಾ ನೀತಿಯ ಅನುಷ್ಠಾನದಲ್ಲಿ ಜನರು ಸಕ್ರಿಯವಾಗಿ ಪಾಲ್ಗೊಳ್ಳುವಂತೆ ನೋಡಿಕೊಳ್ಳಲು ಪೂರ್ವಭಾವಿ ಸಮಾಲೋಚನಾ ಸಭೆ ನಡೆಸಲಾಯಿತು.ತಹಸೀಲ್ದಾರ್ ಡಾ.ಮಲ್ಲಪ್ಪ ಕೆ.ಯರಗೋಳ ಮಾತನಾಡಿ, ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ನೂತನವಾಗಿ ಕನ್ನಡ ಜಾಗೃತಿ ಸಮಿತಿ ಸದಸ್ಯರನ್ನು ನೇಮಕ ಮಾಡಿದೆ. ಈ ಸದಸ್ಯರ ಕಾರ್ಯವ್ಯಾಪ್ತಿ ಹಾಗೂ ಜವಾಬ್ದಾರಿಗಳನ್ನು ನಿರ್ವಹಿಸುವ ಸಂಬಂಧವಾಗಿ ಆಡಳಿತದ ಎಲ್ಲ ಹಂತಗಳಲ್ಲಿಯೂ ಕನ್ನಡವನ್ನು ಕಡ್ಡಾಯವಾಗಿ ಜಾರಿಗೆ ತರಬೇಕು ಎಂಬುದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಆಶಯವಾಗಿದೆ ಎಂದರು.
ಈ ದಿಸೆಯಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ಎಲ್ಲ ಸರ್ಕಾರಿ ಇಲಾಖೆಗಳ ಅಧಿಕಾರಿಗಳು, ಕೈಗಾರಿಕೋದ್ಯಮಿಗಳು, ವಿವಿಧ ಕನ್ನಡ ಪರ ಸಂಘ ಸಂಸ್ಥೆಗಳು ಒಂದುಗೂಡಿ ಮಾ.31 ರಂದು ಮಂಗಳವಾರ ದೊಡ್ಡಬಳ್ಳಾಪುರ ನಗರದ ಕನ್ನಡ ಜಾಗೃತ ಪರಿಷತ್ತಿನಲ್ಲಿ ಕನ್ನಡ ಜಾಗೃತಿ ಸಭೆ ಹಮ್ಮಿಕೊಳ್ಳಲಾಗಿದ್ದು ಎಲ್ಲ ಇಲಾಖೆಯ ಅಧಿಕಾರಿಗಳು ಕೈಗಾರಿಕೋದ್ಯಮಿಗಳು ವಿವಿಧ ಕನ್ನಡ ಪರ ಸಂಘ ಸಂಸ್ಥೆಗಳು ಹಾಗೂ ಕನ್ನಡ ಮನಸ್ಸುಗಳು ಸಕ್ರಿಯವಾಗಿ ಭಾಗವಹಿಸಬೇಕೆಂದು ಕರೆ ನೀಡಿದರು.ಕನ್ನಡ ಪಕ್ಷದ ಸಂಜೀವ ನಾಯಕ್ ಮಾತನಾಡಿ, ಕನ್ನಡ ಜಾಗೃತಿ ಸಭಾ ಕಾರ್ಯಕ್ರಮದ ಯಶಸ್ಸಿಗೆ ಕನ್ನಡ ಪರ ಮನಸ್ಸುಳ್ಳವರ ಒಂದು ಉಪಸಮಿತಿ ರಚಿಸುವಂತೆ ಸಲಹೆ ನೀಡಿ, ಸಲಹೆ ಪುರಸ್ಕರಿಸಿದ ಸಭೆ ವಿವಿಧ ಕನ್ನಡ ಪರ ಸಂಘಟನೆಗಳ ಪದಾಧಿಕಾರಿಗಳು, ಅಧಿಕಾರಿಗಳು, ಪತ್ರಕರ್ತರನ್ನು ಒಳಗೊಂಡ ಉಪಸಮಿತಿ ರಚಿಸಿ ಅನುಮೋದನೆ ನೀಡಿತು. ಸಭೆಯಲ್ಲಿ ಕನ್ನಡ ಪರ ಸಂಘಟನೆಗಳ ಕಾರ್ಯಕರ್ತರು, ಮುಖಂಡರು ಹಾಜರಿದ್ದರು.
12ಕೆಡಿಬಿಪಿ6- ದೊಡ್ಡಬಳ್ಳಾಪುರದಲ್ಲಿ ಕನ್ನಡ ಜಾಗೃತಿ ಸಮಿತಿ ಸದಸ್ಯರು, ವಿವಿಧ ಕನ್ನಡ ಸಂಘಟನೆಗಳ ಸಹಯೋಗದಲ್ಲಿ ಸಭೆ ನಡೆಯಿತು.